
ಬೇನಾಮಿ ಕೇಸ್: ಡಿ.ಕೆ. ಶಿವಕುಮಾರ್ ವಿರುದ್ಧ ಕೇಸು ವಿಚಾರಣೆ ಸೆ. 27 ಕ್ಕೆ ಮುಂದೂಡಿಕೆ
ನವದೆಹಲಿ, ಆ. 17: ಅಕ್ರಮ ಹಣ ವರ್ಗಾವಣೆ ಆರೋಪ ಸಂಬಂಧ ಡಿ.ಕೆ. ಶಿವಕುಮಾರ್ ವಿರುದ್ದ ಜಾರಿ ನಿರ್ದೇಶನಾಲಯ ದಾಖಲಿಸಿದ್ದ ಪ್ರಕರಣ ವಿಚಾರಣೆ ಆರಂಭವಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ದೆಹಲಿ ವಿಶೇಷ ನ್ಯಾಯಾಲಯ ದಾಖಲೆಗಳನ್ನು ನೀಡುವಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಗೆ ಸೂಚಿಸಿದೆ. ಪ್ರಕರಣದ ವಿಚಾರಣೆಯನ್ನು ಸೆ. 27ಕ್ಕೆ ಮುಂದೂಡಿದೆ.
ನ್ಯಾಯಾಲಯದ ವಿಚಾರಣೆ ಬಳಿಕ ಮಾತನಾಡಿದ ಡಿ.ಕೆ. ಶಿವಕುಮಾರ್ ನ್ಯಾಯಾಲಯಕ್ಕೆ ಗೌರವ ಕೊಟ್ಟು ವಿಚಾರಣೆ ಹಾಜರಾಗಿದ್ದೆ. ನ್ಯಾಯಾಲಯವು ಕೆಲ ದಾಖಲೆಗಳನ್ನು ಇಡಿ ಅಧಿಕಾರಿಗಳ ಬಳಿ ಕೇಳಿದೆ. ಅವರು ದಾಖಲೆಗಳನ್ನು ಕೊಟ್ಟ ಬಳಿಕ ನಾನು ಪ್ರತಿಕ್ರಿಯಿಸುತ್ತೇನೆ. ಸದ್ಯಕ್ಕೆ ನ್ಯಾಯಾಲಯವು ವಿಚಾರಣೆಯನ್ನು ಸೆಪ್ಟೆಂಬರ್ 27ಕ್ಕೆ ಮುಂದೂಡಿದೆ ಎಂದು ಹೇಳಿದರು.
ಈ ದೇಶದ ಇತಿಹಾಸವನ್ನು ಬದಲಿಸಲು ಯಾರಿಗೂ ಸಾಧ್ಯವಿಲ್ಲ: ಡಿ.ಕೆ ಶಿವಕುಮಾರ್
ಡಿ.ಕೆ. ಶಿವಕುಮಾರ್ ಅವರ ಒಡೆತನಕ್ಕೆ ಸೇರಿದ ದೆಹಲಿ ಫ್ಲಾಟ್‌ನಲ್ಲಿ ಎಂಟು ಕೋಟಿ ರೂ. ಬೇನಾಮಿ ಹಣ ಪತ್ತೆಯಾಗಿತ್ತು. ಈ ಸಂಬಂಧ ದೆಹಲಿಯ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದರು. ಈ ಪ್ರಕರಣದಲ್ಲಿ ಇಡಿ ಅಧಿಕಾರಿಗಳು ಡಿ.ಕೆ. ಶಿವಕುಮಾರ್ ಅವರನ್ನು ಬಂಧಿಸಿತ್ತು. ಡಿ.ಕೆ. ಶಿವಕುಮಾರ್, ಅವರ ಆಪ್ತ ಸಚಿನ್ ನಾರಾಯಣ್, ಹನುಮಂತಪ್ಪ ಸೇರಿದಂತೆ ಹಲವರ ವಿರುದ್ಧ ಕೇಸು ದಾಖಲಿಸಿಕೊಂಡಿತ್ತು. ಪ್ರಕರಣ ಸಂಬಂಧ ತನಿಖೆ ಪೂರ್ಣಗೊಳಿಸಿದ್ದ ದೆಹಲಿಯ ಇಡಿ ಅಧಿಕಾರಿಗಳು ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದರು.
ಡಿಕೆಗೆ ಇಡಿ ಕೇಸ್ ಕಂಟಕ?: 2017 ರಲ್ಲಿ ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಗುಜರಾತ್‌ನ 44 ಕಾಂಗ್ರೆಸ್ ಶಾಸಕರನ್ನು ಬೆಂಗಳೂರಿನ ಹೊರವಲಯದ ರೆಸಾರ್ಟ್‌ನಲ್ಲಿ ಇಟ್ಟಿದ್ದರು. ಇವರನ್ನು ನೋಡಿಕೊಳ್ಳುವ ಉಸ್ತುವಾರಿ ಡಿ.ಕೆ. ಶಿವಕುಮಾರ್ ಅವರಿಗೆ ವಹಿಸಲಾಗಿತ್ತು. ಈ ವೇಳೆ ರೆಸಾರ್ಟ್ ಮೇಲೆ ದಾಳಿ ಮಾಡಿದ್ದ ಐಟಿ ಅಧಿಕಾರಿಗಳು ತೆರಿಗೆ ವಂಚನೆ ಸಂಬಂಧ ಹಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದರು. ಇದೇ ವೇಳೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸಹ ಹಣದ ಬೇನಾಮಿ ವಹಿವಾಟಿಗೆ ಸಂಬಂಧಿಸಿದಂತೆ ಡಿ.ಕೆ. ಶಿವಕುಮಾರ್ ವಿರುದ್ಧ ಪ್ರಕರಣ ದಾಖಲಿಸಿದ್ದರು.
ದೆಹಲಿಯ ಫ್ಲಾಟ್‌ನಲ್ಲಿ 8 ಕೋಟಿ ರೂ. ಹಣ ಪತ್ತೆಯಾದ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ್, ಅವರ ಅಪ್ತರ ವಿರುದ್ಧ ದೆಹಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಪ್ರಕರಣ ದಾಖಲಿಸಿ ಬಂಧಿಸಿದ್ದರು. ಕಾಂಗ್ರೆಸ್ ನಾಯಕರನ್ನು ರಕ್ಷಣೆ ಮಾಡಿದ್ದಕ್ಕೆ ನನ್ನ ಮೇಲೆ ಇಡಿ ದಾಳಿ ಮಾಡಲಾಗಿದೆ ಎಂದು ಡಿ.ಕೆ. ಶಿವಕುಮಾರ್ ಅರೋಪಿಸಿದ್ದರು.

ಈ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಡಿ.ಕೆ. ಶಿವಕುಮಾರ್ ಜಾಮೀನು ಮೇಲೆ ಬಿಡುಗಡೆಯಾಗಿದ್ದಾರೆ. ಇದೀಗ ಪ್ರಕರಣದ ತನಿಖೆ ಪೂರ್ಣಗೊಳಿಸಿ ದೆಹಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದಾರೆ. ಪ್ರಕರಣದ ವಿಚಾರಣೆ ಆರಂಭವಾಗಿದೆ. ಕರ್ನಾಟಕದಲ್ಲಿ 2023 ರಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಈ ಪ್ರಕರಣ ಡಿ.ಕೆ. ಶಿವಕುಮಾರ್ ಅವರ ಪಾಲಿಗೆ ಕಂಟಕವಾದರೂ ಅಚ್ಚರಿ ಪಡಬೇಕಿಲ್ಲ.