ಮಾ. 20ರಂದು ಸರ್ಕಾರಿ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆ
ಒಂದು ದಿನದ ವಿಶೇಷ ಸಾಂದರ್ಭಿಕ ರಜೆಯನ್ನು ಮಾರ್ಚ್ 20ರಂದು ಕರ್ನಾಟಕದ ಸರ್ಕಾರಿ ನೌಕರರಿಗೆ ಮಂಜೂರು ಮಾಡಲಾಗಿದೆ.
ಬೆಂಗಳೂರು, ಮಾರ್ಚ್ 17; ಕರ್ನಾಟಕದ ಸರ್ಕಾರಿ ನೌಕರರಿಗೆ ಮಾರ್ಚ್ 20ರಂದು ಒಂದು ದಿನದ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲಾಗಿದೆ. ವಿಧಾನಸೌಧದಲ್ಲಿ ನಡೆಯುವ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅನುಕೂಲವಾಗವಂತೆ ರಜೆಯನ್ನು ಮಂಜೂರು ಮಾಡಲಾಗಿದೆ.
ಶುಕ್ರವಾರ ಜಿ. ಸುಧಾ ಸರ್ಕಾರದ ಉಪ ಕಾರ್ಯದರ್ಶಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಆಡಳಿತ ಸುಧಾರಣೆ) ಈ ಕುರಿತು ಸುತ್ತೋಲೆ ಹೊರಡಿಸಿದ್ದಾರೆ. ಈ ಸುತ್ತೋಲೆಯನ್ನು ಆರ್ಥಿಕ ಇಲಾಖೆಯ ಹಿಂಬರಹ ಸಂಖ್ಯೆ: ಆಇ 239 ವೆಚ್ಚ 12/2023, ದಿನಾಂಕ 17/03/2023ರಲ್ಲಿ ನೀಡಿರುವ ಸಹಮತಿಯೊಂದಿಗೆ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.

ದಿನಾಂಕ 20/03/2023ರಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಕಾರ್ಯಕ್ರಮವನ್ನು ಬ್ಯಾಂಕ್ವೆಟ್ ಹಾಲ್, ವಿಧಾನಸೌಧ, ಬೆಂಗಳೂರು ಇಲ್ಲಿ ಆಚರಿಸಲು ನಿರ್ಧರಿಸಲಾಗಿದೆ.
ಈ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಬೆಂಗಳೂರು ನಗರ ವ್ಯಾಪ್ತಿಯ ಮಹಿಳಾ ಅಧಿಕಾರಿ/ ಸರ್ಕಾರಿ ನೌಕರರು ಕಡ್ಡಾಯವಾಗಿ ಹಾಜರಾತಿ ಪಮಾಣ ಪತ್ರವನ್ನು ಸಲ್ಲಿಸುವ ಷರತ್ತಿಗೊಳಪಟ್ಟು, ಭಾಗವಹಿಸಲು ಒಂದು ದಿನದ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲಾಗಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಸರ್ಕಾರಿ ನೌಕರರಿಗೆ ಸಿಹಿಸುದ್ದಿ; ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿದ್ದಂತೆ ಕರ್ನಾಟಕ ಸರ್ಕಾರ ಸರ್ಕಾರಿ ನೌಕರರ ಪರವಾದ ಹಲವು ತೀರ್ಮಾನಗಳನ್ನು ಕೈಗೊಳ್ಳುತ್ತಿದೆ. ಮಾರ್ಚ್ 1ರಂದು 7ನೇ ವೇತನ ಆಯೋಗದ ಶಿಫಾರಸು ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕದ ಸರ್ಕಾರಿ ನೌಕರರು ಅನಿರ್ಧಿಷ್ಟಾವಧಿ ಮುಷ್ಕರ ಆರಂಭಿಸಿದ್ದರು. ಆಗ ಮುಷ್ಕರಕ್ಕೆ ಕರೆ ನೀಡಿರುವ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತುಕತೆ ನಡೆಸಿದ್ದರು.

ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ. ಎಸ್. ಷಡಕ್ಷರಿ ನೇತೃತ್ವದಲ್ಲಿ ಹಲವು ಪದಾಧಿಕಾರಿಗಳು ಮುಖ್ಯಮಂತ್ರಿಗಳ ಜೊತೆ ನಡೆದ ಸಭೆಯಲ್ಲಿ ಪಾಲ್ಗೊಂಡಿದ್ದರು. ನೌಕರರ ಬೇಡಿಕೆ ಕುರಿತು ಮುಖ್ಯಮಂತ್ರಿಗಳು ನಿಯೋಗದ ಜೊತೆ ಸುದೀರ್ಘ ಮಾತುಕತೆಯನ್ನು ನಡೆಸಿದ್ದರು. ಬಳಿಕ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿಗಳು ಇಲಾಖೆಯ ಅಧಿಕಾರಿಗಳ ಜೊತೆ ನೌಕರರ ಬೇಡಿಕೆಗಳ ಕುರಿತು ಚರ್ಚೆ ನಡೆಸಿದ್ದರು.
ಬಳಿಕ ಮುಖ್ಯಮಂತ್ರಿಗಳು ಮಾತನಾಡಿ, "ಸರ್ಕಾರಿ ನೌಕರರಿಗೆ ಮಧ್ಯಂತರವಾಗಿ ಶೇ 17ರಷ್ಟು ವೇತನ ಹೆಚ್ಚಳ ಮಾಡುವ ತೀರ್ಮಾನ ಆಗಿದೆ. ಈ ಕುರಿತು ಶೀಘ್ರದಲ್ಲೇ ಅಧಿಕೃತ ಸರ್ಕಾರಿ ಆದೇಶ ಪ್ರಕಟವಾಗಲಿದೆ. ಎನ್‌ಪಿಎಸ್ ಬೇರೆ-ಬೇರೆ ರಾಜ್ಯಗಳಲ್ಲಿ ಏನು ಆಗಿದೆ ಎಂದು ಎರಡು ತಿಂಗಳಿನಲ್ಲಿ ಎಸಿಎಸ್ ನೇತೃತ್ವದಲ್ಲಿ ವರದಿ ತರಿಸಿಕೊಳ್ಳುತ್ತೇವೆ. ಸರ್ಕಾರಿ ನೌಕರರು ಮುಷ್ಕರ ಕೈ ಬಿಡುವ ವಿಶ್ವಾಸವಿದೆ" ಎಂದು ಹೇಳಿದ್ದರು. ಶೇ 17ರಷ್ಟು ಮಧ್ಯಂತರ ವೇತನ ಹೆಚ್ಚಳದ ಆದೇಶ ಪ್ರಕಟವಾದ ಬಳಿಕ ಸರ್ಕಾರಿ ನೌಕರರು ಮುಷ್ಕರ ಕೈ ಬಿಟ್ಟಿದ್ದರು.
ಶೇ 17ರಷ್ಟು ಮಧ್ಯಂತರ ವೇತನ ಹೆಚ್ಚಳದ ಬಳಿಕ ಮಾರ್ಚ್ 6ರಂದು ಕರ್ನಾಟಕ ಸರ್ಕಾರ ಸರ್ಕಾರಿ ನೌಕರರಿಗಾಗಿ 'ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ'ಯನ್ನು ಜಾರಿಗೊಳಿಸಲಿದೆ ಎಂದು ಘೋಷಣೆ ಮಾಡಲಾಯಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಯೋಜನೆಯನ್ನು ಶೀಘ್ರದಲ್ಲೇ ಉದ್ಘಾಟಿಸಲಿದ್ದಾರೆ. ಈಗಾಗಲೇ ರಾಜ್ಯಪತ್ರದಲ್ಲಿ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸುವ ಕಾರ್ಯನೀತಿ ಬಗ್ಗೆ ಕೆಲವು ಆರಂಭಿಕ ಸೂಚನೆಗಳನ್ನು ನೀಡಲಾಗಿದೆ. ಪ್ರಸ್ತುತ ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ಕರ್ನಾಟಕ ಸರ್ಕಾರಿ ನೌಕರರ (ವೈದ್ಯಕೀಯ ಹಾಜರಾತಿ) (1963ರ ನಿಯಮಗಳು) ವೈದ್ಯಕೀಯ ಚಿಕಿತ್ಸಾ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಇದರ ಹೊರತಾಗಿ ಈಗ ಹೊಸ ಯೋಜನೆ ಜಾರಿಗೊಳಿಸಲಾಗುತ್ತಿದೆ.












Click it and Unblock the Notifications