SSLC Exam; ಕೆಎಸ್ಆರ್‌ಟಿಸಿ ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸಿ
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ನಡೆಯುವ ಅವಧಿಯಲ್ಲಿ ಉಚಿತವಾಗಿ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಸಂಚಾರ ನಡೆಸಲು ಅವಕಾಶ ನೀಡಲಾಗಿದೆ.
ಬೆಂಗಳೂರು, ಮಾರ್ಚ್ 21; ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್‌ಟಿಸಿ) ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದೆ. ವಿದ್ಯಾರ್ಥಿಗಳು ಅಂತಿಮ ಪರೀಕ್ಷೆಗಾಗಿ ತಯಾರಿ ನಡೆಸುತ್ತಿದ್ದಾರೆ. 2023ನೇ ಸಾಲಿನ ಪರೀಕ್ಷೆಗಳು ಮಾರ್ಚ್ 31 ರಿಂದ ಏಪ್ರಿಲ್ 15 ವರೆಗೆ ನಡೆಯಲಿವೆ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಸಂಚಾರ ನಡೆಸಬಹುದಾಗಿದೆ.
ಮಂಗಳವಾರ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಸಿ ಮತ್ತು ಜಾ) ನಿರ್ದೇಶಕರು ಆದೇಶವೊಂದನ್ನು ಹೊರಡಿಸಿದ್ದಾರೆ. ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ನಡೆಯುವ ಅವಧಿಯಲ್ಲಿ ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪರೀಕ್ಷಾ ಕೇಂದ್ರಗಳವರೆಗೆ ನಿಗಮದ ವಾಹನಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿ ನೀಡುವ ಕುರಿತ ಆದೇಶ ಇದಾಗಿದೆ.

ಆದೇಶದಲ್ಲಿ 2022-23ನೇ ಸಾಲಿನ ಕರ್ನಾಟಕದ ಎಸ್‌ಎಸ್‌ಎಲ್‌ಸಿ ಅಂತಿಮ ಪರೀಕ್ಷೆಗಳನ್ನು ಸರ್ಕಾರದ ಆದೇಶದಂತೆ ದಿನಾಂಕ 31/3/2023 ರಿಂದ 15/4/2023ರವರೆಗೆ ನಡೆಸಲು ತೀರ್ಮಾನಿಸಿದ್ದು, ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ನಡೆಯುವ ಅವಧಿಯಲ್ಲಿ ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪರೀಕ್ಷಾ ಕೇಂದ್ರಗಳವರೆಗೆ ನಿಗಮದ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿ ನೀಡುವಂತೆ ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕೋರಿದ್ದರು ಎಂದು ಹೇಳಿದೆ.
ರಾಜ್ಯದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ, 2022-23ನೇ ಸಾಲಿನಲ್ಲಿ ಪರೀಕ್ಷೆ ನಡೆಯುವ ದಿನಾಂಕಗಳಲ್ಲಿ ಅಂದರೆ ದಿನಾಂಕ 31/3/2023 ರಿಂದ 15/4/2023 ರವರೆಗೆ ಪರೀಕ್ಷಾ ದಿನಗಳಂದು ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ, ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ತೆರಳಲು ಮತ್ತು ವಾಪಸ್ ಮರಳಲು ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿ ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಈ ಆದೇಶದ ಅನ್ವಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಅವಧಿಯಲ್ಲಿ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಹಾಗೂ ವಾಸಸ್ಥಳಕ್ಕೆ ಮರಳಲು ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಉಚಿತ ಪ್ರಯಾಣವನ್ನು ಅನುಮತಿಸಲು ನಿಗಮದ ಎಲ್ಲಾ ಚಾಲಕ/ ನಿರ್ವಾಹಕರುಗಳಿಗೆ ಸೂಕ್ತ ತಿಳುವಳಿಕೆ ನೀಡಲು ಸೂಚಿಸಲಾಗಿದೆ. ಪ್ರವೇಶ ಪತ್ರದ ಆಧಾರದ ಮೇಲೆ ಬಸ್ ಆಚರಣೆ ಮಾರ್ಗದಲ್ಲಿ ಪರೀಕ್ಷಾ ಕೇಂದ್ರಗಳಿಗೆ ತೆರಳಲು ವಿದ್ಯಾರ್ಥಿಗಳು ಬಸ್ ಹತ್ತುವವರಿದ್ದಲ್ಲಿ ಹಾಗೂ ಆಚರಣಾ ಮಾರ್ಗದಲ್ಲಿ ಪರೀಕ್ಷಾ ಕೇಂದ್ರಗಳಿದ್ದಲ್ಲಿ, ವಿದ್ಯಾರ್ಥಿಗಳು ಬಸ್ ಹತ್ತಲು/ ಇಳಿಯಲು ಅನುಕೂಲವಾಗುವಂತೆ ಕೋರಿಕೆ ನಿಲುಗಡೆ ನೀಡಲು ಚಾಲನಾ ಸಿಬ್ಬಂದಿಗಳಿಗೆ ತಿಳುವಳಿಕೆ ನೀಡಬೇಕು ಎಂದು ಸ್ಪಷ್ಟಪಡಿಸಲಾಗಿದೆ.
ಚಾಲನಾ ಸಿಬ್ಬಂದಿಗಳು ಮೇಲ್ಕಂಡ ನಿರ್ದೇಶನಗಳನ್ನು ತಪ್ಪದೇ ವಿದ್ಯಾರ್ಥಿಗಳಿಗೆ ಅನುಕೂಲಕರವಾಗುವಂತೆ ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಲಾಗಿದ್ದು, ಈ ಸುತ್ತೋಲೆಯನ್ನು ಎಲ್ಲಾ ಘಟಕಗಳ ಹಾಗೂ ಬಸ್ ನಿಲ್ದಾಣಗಳ ಸೂಚನಾ ಫಲಕಗಳಲ್ಲಿ ಪ್ರದರ್ಶಿಸಿ ಮೇಲ್ಕಂಡ ನಿರ್ದೇಶನಗಳನ್ನು ಜಾರಿಗೊಳಸಲು ಕ್ರಮ ವಹಿಸುವುದು ಎಂದು ಸಿಬ್ಬಂದಿಗೆ ಸೂಚನೆ ನೀಡಲಾಗಿದೆ. ಆದೇಶದ ಪ್ರತಿಯನ್ನು ವ್ಯವಸ್ಥಾಪಕ ನಿರ್ದೇಶಕರು, ಬೆಂಮಸಾಸಂಸ್ಥೆ, ವಾಕರಸಾಸಂಸ್ಥೆ, ಕಕರಸಾನಿಗಮ ಬೆಂಗಳೂರು/ ಹುಬ್ಬಳ್ಳಿ/ ಕಲಬುರಗಿ ಅವರಿಗೂ ಸಹ ಮಾಹಿತಿಗಾಗಿ ಕಳಿಸಲಾಗಿದೆ.
ವಿದ್ಯಾರ್ಥಿಗಳ ತಯಾರಿ; ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಿಗೆ ವಿದ್ಯಾರ್ಥಿಗಳು ತಯಾರಿ ನಡೆಸುತ್ತಿದ್ದಾರೆ. ಈ ಬಾರಿ ಕಳೆದ ವರ್ಷದಂತೆ ಶೇ 20ರಷ್ಟು ಪಠ್ಯ ಕಡಿತ ಇರುವುದಿಲ್ಲ. ಮುಖ್ಯ ಪರೀಕ್ಷೆಯು 2019ನೇ ಸಾಲಿನಲ್ಲಿ ನಡೆಸಿದ್ದ ಮಾದರಿಯಲ್ಲಿಯೇ ನಡೆಸಲಾಗುತ್ತದೆ. ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಎಸ್ಎಸ್‌ಎಲ್‌ಪಿ ಪರೀಕ್ಷಾ ಮಾರ್ಗಸೂಚಿಯಲ್ಲಿ ಈ ಕುರಿತು ಸ್ಪಷ್ಟವಾಗಿ ತಿಳಿಸಿದೆ. ಎರಡು ವರ್ಷಗಳ ಕಾಲ ಕೋವಿಡ್ ಕಾರಣದಿಂದ ತರಗತಿಗಳು ಸರಿಯಾಗಿ ನಡೆಯದ ಕಾರಣ ಬಹು ಆಯ್ಕೆ ಪ್ರಶ್ನೆ ಮಾದರಿ ಪ್ರಶ್ನೆ ಪತ್ರಿಕೆ ನೀಡಲಾಗಿತ್ತು. ಆದರೆ ಈ ಬಾರಿ ವಿಸ್ತ್ರತವಾಗಿ ಉತ್ತರ ಬರೆಯುವ ಪ್ರಶ್ನೆ ಪತ್ರಿಕೆ ಇರಲಿದೆ.












Click it and Unblock the Notifications