ಸಚಿವ ಬಿ. ನಾಗೇಂದ್ರ ರಾಜೀನಾಮೆ?, ಕಾಂಗ್ರೆಸ್ ಸರ್ಕಾರ ಮೊದಲ ವಿಕೆಟ್ ಪತನ
ಬೆಂಗಳೂರು, ಜೂನ್ 06: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮೊದಲ ವಿಕೆಟ್ ಪತನಗೊಂಡಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಒಂದು ವರ್ಷದಲ್ಲಿಯೇ ಹಗರಣದ ಆರೋಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದ ಸಚಿವರೊಬ್ಬರು ರಾಜೀನಾಮೆ ನೀಡಲಿದ್ದಾರೆ. ಸಂಜೆ 7.30ಕ್ಕೆ ಸಚಿವ ಬಿ. ನಾಗೇಂದ್ರ ರಾಜೀನಾಮೆ ನೀಡಲಿದ್ದಾರೆ.
ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿರುವ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಸುಮಾರು 94.73 ಕೋಟಿ ಹಣ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಚಿವ ಬಿ. ನಾಗೇಂದ್ರ ರಾಜೀನಾಮೆ ನೀಡಲಿದ್ದಾರೆ.
ಗುರುವಾರ ಸಂಜೆ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಬಿ. ನಾಗೇಂದ್ರ, "ನಾನು ಇನ್ನೂ ರಾಜೀನಾಮೆ ನೀಡಿಲ್ಲ. ಸಂಜೆ 7.30ಕ್ಕೆ ರಾಜೀನಾಮೆ ನೀಡುತ್ತೇನೆ" ಎಂದು ಘೋಷಣೆ ಮಾಡಿದರು.

ಗುರುವಾರ ಮಧ್ಯಾಹ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾದ ಪರಿಶಿಷ್ಟ ವರ್ಗಗಳ ಕಲ್ಯಾಣ ಖಾತೆ ಸಚಿವ ಬಿ. ನಾಗೇಂದ್ರ ರಾಜೀನಾಮೆ ನೀಡಿದ್ದಾರೆ ಎಂಬ ಮಾಹಿತಿ ಇತ್ತು. ಸಚಿವ ಬಿ. ನಾಗೇಂದ್ರಗೆ ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರವೇ ಸೂಚನೆ ನೀಡಿದ್ದರು.
ಕರ್ನಾಟಕದ ಪ್ರತಿಪಕ್ಷ ಬಿಜೆಪಿ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಪ್ರಕರಣದಲ್ಲಿ ಸಚಿವ ಬಿ. ನಾಗೇಂದ್ರ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಗುರುವಾರ ಬೃಹತ್ ಪ್ರತಿಭಟನೆ ನಡೆಸಿತು.
ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ನೇತೃತ್ವದ ನಿಯೋಗವು ವಿಧಾನಸೌಧದಿಂದ ರಾಜಭವನದವರೆಗೆ ಕಾಲ್ನಡಿಗೆ ಜಾಥಾ ನಡೆಸಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತ್ತು.
2023ರ ವಿಧಾನಸಭೆ ಚುನಾವಣೆಯಲ್ಲಿ ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ. ನಾಗೇಂದ್ರರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟಕ್ಕೆ ಸೇರಿಸಿಕೊಳ್ಳಲಾಗಿತ್ತು. ಪರಿಶಿಷ್ಟ ವರ್ಗಗಳ ಕಲ್ಯಾಣ ಖಾತೆಯ ಹೊಣೆಯನ್ನು ನೀಡಲಾಗಿತ್ತು.
ಡಿ. ಕೆ. ಶಿವಕುಮಾರ್ ಪ್ರತಿಕ್ರಿಯೆ: ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಪರಿಶಿಷ್ಟ ವರ್ಗಗಳ ಕಲ್ಯಾಣ ಖಾತೆಯ ಸಚಿವ ಬಿ. ನಾಗೇಂದ್ರ ರಾಜೀನಾಮೆ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. "ಪಕ್ಷಕ್ಕೆ ಮುಜುಗರ ಆಗಬಾರದು ಎಂಬ ಕಾರಣಕ್ಕೆ ನಾಗೇಂದ್ರ ಸ್ವಯಂ ಪ್ರೇರಿತವಾಗಿ ರಾಜೀನಾಮೆ ನೀಡಲಿದ್ದಾರೆ" ಎಂದು ಹೇಳಿದ್ದರು.
ಸಚಿವರಾಗಿದ್ದ ಬಿ. ನಾಗೇಂದ್ರ ಆಪ್ತ ನೆಕ್ಕಂಟಿ ನಾಗರಾಜ್ ಅವರನ್ನು ಬುಧವಾರ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಪ್ರಕರಣದಲ್ಲಿ ಬಂಧಿಸಲಾಗಿತ್ತು. ಕರ್ನಾಟಕ ಸರ್ಕಾರ ಈ ಪ್ರಕರಣದ ತನಿಖೆಗೆ ಸಿಐಡಿ ಪೊಲೀಸರ ಎಸ್ಐಟಿ ರಚನೆ ಮಾಡಿದೆ. ಮತ್ತೊಂದು ಕಡೆ ಸಿಬಿಐ ಸಹ ಎಫ್‌ಐಆರ್ ದಾಖಲು ಮಾಡಿಕೊಂಡಿದ್ದು, ತನಿಖೆ ಆರಂಭವಾಗಬೇಕಿದೆ.
ಮೇ 27ರಂದು ಶಿವಮೊಗ್ಗದ ನಿವಾಸದಲ್ಲಿ ಬೆಂಗಳೂರಿನಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಧೀಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದ ಚಂದ್ರಶೇಖರನ್ (50) ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರು ಬರೆದಿದ್ದ 6 ಪುಟದ ಡೆತ್‌ನೋಟ್‌ನಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಖಾತೆ ಅಡಿಯಲ್ಲಿ ಬರುವ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಪ್ರಕರಣದ ಕುರಿತು ಉಲ್ಲೇಖ ಮಾಡಿದ್ದರು. ಹಲವು ಅಧಿಕಾರಿಗಳ ಹೆಸರು ಪ್ರಸ್ತಾಪಿಸಿದ್ದರು.











Click it and Unblock the Notifications