ಕೊಲೆಯಾದ ಸಂತೋಷ್ ಬಿಜೆಪಿ ಕಾರ್ಯಕರ್ತನೇ ಅಲ್ಲ: ಸಿದ್ದರಾಮಯ್ಯ
ಬೆಂಗಳೂರು, ಫೆಬ್ರವರಿ 2: ಜೆಸಿ ನಗರದಲ್ಲಿ ಕೊಲೆಯಾದ 28 ವರ್ಷದ ಯುವಕ ಸಂತೋಷ್ ಬಿಜೆಪಿ ಕಾರ್ಯಕರ್ತ ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಸಂತೋಷ್ ಬಿಜೆಪಿ ಕಾರ್ಯಕರ್ತ ಎಂದು ವಾದಿಸುತ್ತಿರುವ ಕೇಸರಿ ಪಕ್ಷದ ನಾಯಕರು ರಾಜ್ಯದಾದ್ಯಂತ ಪ್ರತಿಭಟನೆಯಲ್ಲಿ ತೊಡಗಿರುವಾಗಲೇ ಸಿದ್ದರಾಮಯ್ಯ ಈ ಹೇಳಿಕೆ ನೀಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ 4 ಜನರನ್ನು ಬಂಧಿಸಿದ್ದಾರೆ. ಸಂತೋಷ್ ಹತ್ಯೆಗೆ ಸಂತಾಪ ಸೂಚಿಸಿರುವ ಮುಖ್ಯಮಂತ್ರಿಗಳು, ಪ್ರಕರಣವನ್ನು ಕೇಂದ್ರ ಅಪರಾಧ ವಿಭಾಗಕ್ಕೆ ಹಸ್ತಾಂತರಿಸಲಾಗಿದ್ದು ಅಪರಾಧಿಗಳನ್ನು ಪತ್ತೆ ಹಚ್ಚಲಾಗುವುದು ಎಂದು ಹೇಳಿದ್ದಾರೆ.

ಇದೇ ವೇಳೆ ಅವರು ಸಂತೋಷ್ ಬಿಜೆಪಿ ಕಾರ್ಯಕರ್ತ ಎಂಬ ವಾದವನ್ನು ತಳ್ಳಿ ಹಾಕಿದ್ದಾರೆ. "ಯಾರೆಲ್ಲಾ ಸಾಯುತ್ತಾರೋ ಅವರನ್ನೆಲ್ಲಾ ಅವರು (ಬಿಜೆಪಿ) ನಮ್ಮ ಕಾರ್ಯಕರ್ತರು ಎನ್ನುತ್ತಾರೆ. ಆತ (ಸಂತೋಷ್) ಬಿಜೆಪಿ ಸದಸ್ಯನಾಗಿರಲಿಲ್ಲ," ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
"ನಾವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಲಿದ್ದೇವೆ ಮತ್ತು ತಪ್ಪಿತಸ್ಥರಿಗೆ ಶಿಕ್ಷೆ ನೀಡಲಿದ್ದೇವೆ," ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಸಂತೋಷ್ ಹತ್ಯೆ ಖಂಡಿಸಿ ಬಿಜೆಪಿ ರಾಜ್ಯದಾದ್ಯಂತ ಪ್ರತಿಭಟನೆ ನಡೆಸುತ್ತಿರುವ ದಿನವೇ ಸಿದ್ದರಾಮಯ್ಯ ಈ ಹೇಳಿಕೆ ನೀಡಿದ್ದಾರೆ.
ಏತನ್ಮಧ್ಯೆ ಇಂದು ಸಂತೋಷ್ ನಿವಾಸಕ್ಕೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿಎಸ್ ಯಡಿಯೂರಪ್ಪ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.












Click it and Unblock the Notifications