ಸಿದ್ದರಾಮಯ್ಯ ಪ್ರಮಾಣವಚನ ಸಮಾರಂಭಕ್ಕೆ ಸ್ಟಾಲಿನ್, ಮಮತಾ, ಠಾಕ್ರೆ: ಮೋದಿಗೆ ನೇರ ಸಂದೇಶ ರವಾನೆ? ಇನ್‌ಸೈಡ್ ಸ್ಟೋರಿ
ಬೆಂಗಳೂರು, ಮೇ 19: ಸಿದ್ದರಾಮಯ್ಯ ಅವರನ್ನು ಕರ್ನಾಟಕದ ನೂತನ ಮುಖ್ಯಮಂತ್ರಿ ಎಂದು ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಶನಿವಾರ (ಮೇ 20) ನಡೆಯಲಿರುವ ಪ್ರಮಾಣ ವಚನ ಸಮಾರಂಭಕ್ಕೆ ಕಾಂಗ್ರೆಸ್ ಹಲವು ವಿರೋಧ ಪಕ್ಷದ ನಾಯಕರಿಗೆ ಆಹ್ವಾನ ಕಳುಹಿಸಿದೆ. ಹಾಲಿ ಕಾಂಗ್ರೆಸ್ ಮುಖ್ಯಮಂತ್ರಿಗಳಲ್ಲದೆ, ಸಮಾನ ಮನಸ್ಕ ಪಕ್ಷಗಳ ಪ್ರಮುಖ ನಾಯಕರನ್ನೂ ಸ್ವಾಗತಿಸಲಾಗಿದೆ. ಕಾಂಗ್ರೆಸ್ಸಿನ ಈ ನಡೆ ರಾಷ್ಟ್ರ ರಾಜಕಾರಣದಲ್ಲಿ ಹಲವು ಚರ್ಚೆಗಳನ್ನು ಹುಟ್ಟು ಹಾಕಿದೆ.
ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್, ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರಾವ್, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಮತ್ತು ಮಹಾರಾಷ್ಟ್ರ ಮಾಜಿ ಸಿಎಂ ಉದ್ಧವ್ ಠಾಕ್ರೆ ಅವರನ್ನು ಕಾಂಗ್ರೆಸ್ ಪಕ್ಷ ಆಹ್ವಾನಿಸಿದೆ.

ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್, ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಮತ್ತು ಒಡಿಶಾ ಸಿಎಂ ನವೀನ್ ಪಟ್ನಾಯಕ್ ಅವರನ್ನೂ ಆಹ್ವಾನಿಸಲಾಗಿದೆ.
ಕಾಂಗ್ರೆಸ್‌ನಿಂದ ಛತ್ತೀಸ್‌ಗಢ ಸಿಎಂ ಭೂಪೇಶ್ ಬಾಘೇಲ್, ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಮತ್ತು ಹಿಮಾಚಲ ಪ್ರದೇಶ ಸಿಎಂ ಸುಖವಿಂದರ್ ಸಿಂಗ್ ಸುಖು ಅವರನ್ನು ಪಕ್ಷ ಆಹ್ವಾನಿಸಿದೆ. ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಆಹ್ವಾನಿಸಿದೆ.

ಹಲವು ದಿನಗಳ ತೀವ್ರ ಚರ್ಚೆಗಳ ನಂತರ ಕಾಂಗ್ರೆಸ್ ಗುರುವಾರ ಸಿದ್ದರಾಮಯ್ಯ ಅವರನ್ನು ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಮತ್ತು ಡಿಕೆ ಶಿವಕುಮಾರ್ ಅವರನ್ನು ಉಪ ಮುಖ್ಯಮಂತ್ರಿ ಎಂದು ಘೋಷಿಸಿದೆ. ಶಿವಕುಮಾರ್ ಅವರು ಮುಂದಿನ ಸಾರ್ವತ್ರಿಕ ಚುನಾವಣೆಯವರೆಗೆ ಕರ್ನಾಟಕ ಕಾಂಗ್ರೆಸ್ ಮುಖ್ಯಸ್ಥರಾಗಿರುತ್ತಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್‌ಗೆ ಭಾರೀ ಗೆಲುವು ಸಿಕ್ಕ ನಂತರ, ಟಿಎಂಸಿ ವರಿಷ್ಠೆ ಮಮತಾ ಬ್ಯಾನರ್ಜಿ ಅವರು ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬೆಂಬಲ ನೀಡಲು ಸಿದ್ಧ ಎಂದು ಹೇಳಿದ್ದಾರೆ. ಒಂದು ವೇಳೆ ಸಮಾನ ಮನಸ್ಕ ಪಕ್ಷಗಳ ಒಕ್ಕೂಟವನ್ನು ಕಟ್ಟುವುದಾದರೆ, ಕಾಂಗ್ರೆಸ್ ಪ್ರಬಲವಾಗಿರುವ ಎಲ್ಲ ಪಕ್ಷಗಳನ್ನು ಬೆಂಬಲಿಸಬೇಕಿದೆ. ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ, ಬಿಹಾರದಲ್ಲಿ ಆರ್‌ಜೆಡಿ-ಜೆಡಿಯು ಮತ್ತು ಪಶ್ಚಿಮ ಬಂಗಾಳದಲ್ಲಿ ಟಿಎಂಸಿಯಂತಹ ಪ್ರಾದೇಶಿಕ ಪಕ್ಷಗಳನ್ನು ಬೆಂಬಲಿಸಬೇಕು ಎಂದು ಅವರು ಹೇಳಿದ್ದಾರೆ.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಯನ್ನು ಎದುರಿಸಲು 2024 ರ ಮುಂದಿನ ಲೋಕಸಭೆ ಚುನಾವಣೆಗೆ ಮುನ್ನ ಪ್ರಮುಖ ವಿರೋಧ ಪಕ್ಷದ ನಾಯಕರ ಮೈತ್ರಿಯನ್ನು ಬೆಸೆಯುವ ಕಾರ್ಯಾಚರಣೆಯಲ್ಲಿದ್ದಾರೆ. ಇತ್ತೀಚೆಗೆ, ಅವರು ಭುವನೇಶ್ವರದಲ್ಲಿ ನವೀನ್ ಪಟ್ನಾಯಕ್ ಅವರನ್ನು ಭೇಟಿಯಾಗಿದ್ದರು. ನಂತರ ಅವರು ಉದ್ಧವ್ ಠಾಕ್ರೆ ಮತ್ತು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು.
ಮೋದಿಗೆ ನೇರ ಸಂದೇಶ ರವಾನೆ
ಈ ಎಲ್ಲ ನಾಯಕರು ನಾಳೆ ಬೆಂಗಳೂರಿನಲ್ಲಿ ಹಾಜರಿರಲಿದ್ದಾರೆ. ಸಿದ್ದರಾಮಯ್ಯನವರ ಪ್ರಮಾಣವಚನ ಸಮಾರಂಭಕ್ಕೆ ಸಾಕ್ಷಿಯಾಗಲಿದ್ದಾರೆ. ಪ್ರಧಾನಿ ಮೋದಿ ಹಾಗೂ ಬಿಜೆಪಿ ಈ ಮೂಲಕ ನೇರ ಸಂದೇಶವೊಂದನ್ನು ರವಾನಿಸಲಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಲು ನಾವೆಲ್ಲರೂ ಒಂದಾಗಲಿದ್ದೇವೆ ಎಂಬುದನ್ನು ಪರೋಕ್ಷವಾಗಿ ಹೇಳಲಿದ್ದಾರೆ ಎಂಬ ಚರ್ಚೆಗಳು ಹುಟ್ಟಿಕೊಂಡಿವೆ.
ತೆಲಂಗಾಣ ಮುಖ್ಯಮಂತ್ರಿ ಮತ್ತು ಬಿಆರ್‌ಎಸ್ ನಾಯಕ ಕೆ ಚಂದ್ರಶೇಖರ್ ರಾವ್, ಒಡಿಶಾ ಮುಖ್ಯಮಂತ್ರಿ ಮತ್ತು ಬಿಜೆಡಿ ನಾಯಕ ನವೀನ್ ಪಟ್ನಾಯಕ್, ಆಂಧ್ರಪ್ರದೇಶ ಮುಖ್ಯಮಂತ್ರಿ ಮತ್ತು ವೈಎಸ್‌ಆರ್‌ಸಿಪಿ ನಾಯಕ ವೈಎಸ್ ಜಗನ್ ಮೋಹನ್ ರೆಡ್ಡಿ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಯಾವುದೇ ಆಹ್ವಾನ ಕಳುಹಿಸಲಾಗಿಲ್ಲ ಎಂದು ಮೂಲಗಳು ತಿಳಿಸಿವೆ. ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಅವರಿಗೂ ಯಾವುದೇ ಆಹ್ವಾನವನ್ನು ಕಳುಹಿಸಲಾಗಿಲ್ಲ ಎಂದು ಮೂಲಗಳು ಹೇಳಿವೆ.












Click it and Unblock the Notifications