7th Pay Commission: ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಇಂದು ಮಹತ್ವದ ಸಚಿವ ಸಂಪುಟ ಸಭೆ
ಬೆಂಗಳೂರು, ಜುಲೈ 04: ಕರ್ನಾಟಕದ ಸರ್ಕಾರಿ ನೌಕರರ ಸುದೀರ್ಘ ಹೋರಾಟಕ್ಕೆ ಕೊನೆಗೂ ಜಯ ಸಿಗುವ ಸಾಧ್ಯತೆ ಇದೆ. ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಬಹುತೇಕ ಖಚಿತವಾಗಿದ್ದು, 7ನೇ ವೇತನ ಆಯೋಗದ ಶಿಫಾರಸು ಜಾರಿಗೆ ಸರ್ಕಾರ ಮುಂದಾಗಿದೆ.
ಹೌದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಇಂದು(ಗುರುವಾರ) ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ರಾಜ್ಯ ಸರ್ಕಾರ ನೌಕರರು ಕಾತುರದಿಂದ ನಿರೀಕ್ಷಿಸುತ್ತಿರುವ 7ನೇ ವೇತನ ಆಯೋಗದ ವರದಿ ಶಿಫಾರಸುಗಳ ಅನುಷ್ಠಾನ ಕುರಿತು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ಕೆಲ ದಿನಗಳ ಹಿಂದೆಯಷ್ಟೇ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಹಾಗೂ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಎಲ್. ಬೈರಪ್ಪ ನೇತೃತ್ವದಲ್ಲಿ ನಿಯೋಗ ಭೇಟಿಯಾಗಿ ಮನವಿ ಮಾಡಿತ್ತು. ಈ ಸಂದರ್ಭದಲ್ಲಿ ಮುಂದಿನ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳುವ ಭರವಸೆಯನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ್ದರು. ಅದರಂತೆ ಇಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ 7ನೇ ವೇತನ ಆಯೋಗದ ವರದಿ ಜಾರಿ ಕುರಿತು ಚರ್ಚೆಯಾಗಲಿದೆ.
ರಾಜ್ಯದ 7ನೇ ವೇತನ ಆಯೋಗವು ವರದಿಯಲ್ಲಿ ಮೂಲವೇತನದ ಶೇಕಡ 27.5 ರಷ್ಟು ಹೆಚ್ಚಳ ಮಾಡಲು ಶಿಫಾರಸು ಮಾಡಿದೆ. ವರದಿಯನ್ನು ಪರಿಶೀಲಿಸಿ ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳಬೇಕಿದೆ. ಈ ಹಿಂದೆ ನಡೆದ ಎರಡು ಸಚಿವ ಸಂಪುಟ ಸಭೆಯಲ್ಲಿ ವರದಿ ಕುರಿತು ಸಚಿವರ ಅಭಿಪ್ರಾಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಗ್ರಹ ಮಾಡಿದ್ದಾರೆ. ಇಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳುವ ನಿರೀಕ್ಷೆ ಇದೆ.
ಕಳೆದ ಸಚಿವ ಸಂಪುಟ ಸಭೆಯಲ್ಲಿ 25% ರಷ್ಟು ವೇತನ ಹೆಚ್ಚಳಕ್ಕೆ ಕೆಲ ಸಚಿವರು ಸಲಹೆ ನೀಡಿದರೆ, 27% ವೇತನ ಹೆಚ್ಚಳಕ್ಕೆ ಕೆಲ ಸಚಿವರು ಸಲಹೆ ನೀಡಿದ್ದು, 27% ವೇತನ ಹೆಚ್ಚಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಒಲವು ತೋರಿದ್ದಾರೆ ಎನ್ನಲಾಗಿದೆ. ಆದರೆ ಅಂತಿಮವಾಗಿ ವೇತನ ಆಯೋಗ ಜಾರಿ ಜವಾಬ್ದಾರಿಯನ್ನು ಸಿಎಂಗೆ ನೀಡಿದ್ದು, ಇಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಬಳಿಕ ರಾಜ್ಯ ಸರ್ಕಾರ ಅಧಿಕೃತ ಘೋಷಣೆ ಮಾಡಲಿದೆ ಎಂದು ಹೇಳಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಂತಿಮ ವರದಿ ಸಲ್ಲಿಸಿದ್ದ ಆಯೋಗ, ಕರ್ನಾಟಕ ಸರ್ಕಾರಿ ನೌಕರರಿಗೆ 27.5% ವೇತನವನ್ನು ಹೆಚ್ಚಿಸಲು ಶಿಫಾರಸು ಮಾಡಿತ್ತು. ಒಂದು ವೇಳೆ ಸರ್ಕಾರ ಅಂತಿಮ ವರದಿಯನ್ನೇ ಯಥಾವತ್ತಾಗಿ ಜಾರಿಗೊಳಿಸಿದರೆ ಮಾತ್ರ ಸರ್ಕಾರಿ ನೌಕರರ ಕನಿಷ್ಠ ವೇತನವು ತಿಂಗಳಿಗೆ 17,000 ರಿಂದ 27,000ಕ್ಕೆ ಏರುತ್ತದೆ. ಒಟ್ನಾಲಿ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರಿ ನೌಕರರ ಬಹುದಿನದ ಬೇಡಿಕೆ ಕುರಿತು ಚರ್ಚೆ ನಡೆಯಲಿದ್ದು, ಅಂತಿಮ ನಿರ್ಧಾರ ಸದ್ಯದಲ್ಲೇ ಹೊರ ಬೀಳಲಿದೆ.












Click it and Unblock the Notifications