Karnataka Government: ಸರ್ಕಾರಿ ಕಚೇರಿ ಕೆಲಸದ ವೇಳೆ ಬದಲಾವಣೆ: ಸರ್ಕಾರದಿಂದ ಮಹತ್ವದ ಆದೇಶ
ಬೆಂಗಳೂರು, ಏಪ್ರಿಲ್ 03: ಕರ್ನಾಟಕದಲ್ಲಿ ಬೇಸಿಗೆ ಬಿಸಿಲ ಅಬ್ಬರ ಶುರುವಾಗಿದೆ. ಹೆಚ್ಚು, ಬಿಸಿಲಿನಿಂದ ಜನತೆ ರೋಸಿ ಹೋಗಿದ್ದಾರೆ. ಮುಂದಿನ ದಿನಗಳಲ್ಲಿ ನೀರಿನ ಹಾಹಾಕಾರವೂ ಶುರುವಾಗಬಹುದು,, ಈಗಿನ ಬಿಸಿಲು ನೋಡುತ್ತಿದ್ದರೆ, ಮುಂದಿನ ಎರಡು ತಿಂಗಳೂ ಹೇಗಪ್ಪ ಬದುಕು ಸಾಗಿಸೋದು ಅನ್ನೋ ಚಿಂತೆ ಕಾಡುತ್ತಿದೆ. ದಿನೇ ದಿನೇ ರಾಜ್ಯದಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದೆ. ಈ ಹಿನ್ನಲೆಯಲ್ಲಿ ರಾಜ್ಯದ ಕೆಲ ಜಿಲ್ಲೆಗಳಲ್ಲಿನ ಸರ್ಕಾರಿ ಕಚೇರಿ ಕೆಲಸದ ವೇಳೆಯಲ್ಲಿ ಬದಲಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.
ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ರಾಜ್ಯಾಧ್ಯಕ್ಷರು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು ರವರು ಬೆಳಗಾವಿ ವಿಭಾಗದ ವಿಜಯಪುರ, ಬಾಗಲಕೋಟೆ ಹಾಗೂ ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿರುವುದಿಂದ ನೌಕರರು ಕರ್ತವ್ಯ ನಿರ್ವಹಿಸುವಲ್ಲಿ ಎದುರಿಸುತ್ತಿರುವ ತೊಂದರೆಯನ್ನು ಮಾನವೀಯತೆ ದೃಷ್ಟಿಯಿಂದ ಪರಿಗಣಿಸಿ, ಏಪ್ರಿಲ್ ಮತ್ತು ಮೇ ಮಾಹೆಗಳಲ್ಲಿ ಕಚೇರಿ ಕೆಲಸದ ಸಮಯವನ್ನು ಬೆಳಿಗ್ಗೆ 8.00 ರಿಂದ 1.30 ರವರೆಗೆ ನಿಗದಿಪಡಿಸಿ ಆದೇಶ ಹೊರಡಿಸುವಂತೆ ಕೋರಿರುತ್ತಾರೆ ಎಂದು ತಿಳಿಸಿದ್ದಾರೆ.

ಪುಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, 2025 ನೇ ಸಾಲಿನ ಏಪ್ರಿಲ್ ಮತ್ತು ಮೇ ಮಾಹೆಗಳಲ್ಲಿ ಹೆಚ್ಚಿನ ಬಿಸಿಲಿನ ತಾಪಮಾನದ ಹಿನ್ನೆಲೆಯಲ್ಲಿ ಬೆಳಗಾವಿ ವಿಭಾಗದ ವಿಜಯಪುರ ಮತ್ತು ಬಾಗಲಕೋಟೆ ಹಾಗೂ ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳಿಗೆ ಪ್ರಸ್ತುತ ಜಾರಿಯಲ್ಲಿರುವ ಸರ್ಕಾರಿ ಕಚೇರಿಗಳ ವೇಳಾಪಟ್ಟಿಯ ಬದಲಾಗಿ ಏಪ್ರಿಲ್ ಮತ್ತು ಮೇ ತಿಂಗಳುಗಳಲ್ಲಿ ಬೆಳಿಗ್ಗೆ 8.00 ಗಂಟೆಯಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಬದಲಾಯಿಸಿ ಆದೇಶಿಸಿದ್ದಾರೆ.
ಈ ಜಿಲ್ಲೆಗಳಲ್ಲಿನ ಸರ್ಕಾರಿ ನೌಕರರು ಬದಲಾದ ಸಮಯದಲ್ಲಿ ತಮ್ಮ ಕರ್ತವ್ಯವನ್ನು ಎಂದಿನಂತೆ ಯಾವುದೇ ಲೋಪ/ಅಡೆತಡೆಯಿಲ್ಲದೆ ಕರ್ತವ್ಯ ನಿರ್ವಹಿಸತಕ್ಕದ್ದು, ಸಾರ್ವಜನಿಕರಿಗೆ ಯಾವುದೇ ರೀತಿ ಅನಾನುಕೂಲತೆಯಾಗದಂತೆ ಮತ್ತು ಜಿಲ್ಲಾಧಿಕಾರಿಗಳು/ ಜಿಲ್ಲಾ ಪಂಚಾಯತ್‌ನ ಕಾರ್ಯನಿರ್ವಾಹಕ ಅಧಿಕಾರಿಗಳು ತುರ್ತು ಸಂದರ್ಭದಲ್ಲಿ ಯಾವುದೇ ಕಾರ್ಯವನ್ನು ನಿರ್ವಹಿಸಲು ನಿರ್ದೇಶಿಸಿದಲ್ಲಿ ಸಮಯದ ಪರಿಮಿತಿಯಿಲ್ಲದ ಕರ್ತವ್ಯ ನಿರ್ವಹಿಸತಕ್ಕದ್ದು ಎಂಬುದಾಗಿ ತಿಳಿಸಿದ್ದಾರೆ.
ಡಾ. ಜಗಜೀವನ ರಾಂ ಜನ್ಮ ದಿನ ಆಚರಣೆ ಕಡ್ಡಾಯ
2025-26 ನೇ ಸಾಲಿನಲ್ಲಿ ಹಸಿರು ಕ್ರಾತಿಯ ಹರಿಕಾರ ಹಾಗೂ ಭಾರತದ ಉಪಪ್ರಧಾನಿ ಡಾ. ಜಗಜೀವನ ರಾಂ ರವರ 118ನೇ ಜನ್ಮ ದಿನಾಚರಣೆ ಕಾರ್ಯಕ್ರಮಗಳನ್ನು ಸರ್ಕಾರದಿಂದ ಏಪ್ರಿಲ್ 5, 2025 ರಂದು ಆಚರಿಸಲಾಗುತ್ತಿದೆ. ಅದರಂತೆ ಈ ವರ್ಷವೂ ಸಹ ಜನ್ಮ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಅದ್ದೂರಿಯಾಗಿ ಸದರಿ ಜಯಂತಿಯನ್ನು ಏಪ್ರಿಲ್ 5, 2025 ರಂದು ಬೆಳಿಗ್ಗೆ 8 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಹಾಜರಿದ್ದು ಮೆರವಣಿಗೆಯಲ್ಲಿ ಪಾಲ್ಗೊಳ್ಳುವುದು ಹಾಗೂ ಜಿಲ್ಲೆಯ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಏಪ್ರಿಲ್ 5, 2025 ರಂದು ಬೆಳಿಗ್ಗೆ 10 ಗಂಟೆಗೆ ತಮ್ಮ ಅಧೀನದಲ್ಲಿ ಬರುವ ಎಲ್ಲಾ ಕಚೇರಿ, ಸಂಸ್ಥೆಗಳಲ್ಲಿ ಹಸಿರು ಕ್ರಾಂತಿಯ ಹರಿಕಾರ ಹಾಗೂ ಭಾರತದ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ ರಾಂ ಅವರ ಜಯಂತಿಯನ್ನು ಕಡ್ಡಾಯವಾಗಿ ಆಚರಿಸಲು ನಿರ್ಧರಿಸಲಾಗಿದೆ.
ಪ್ರಯುಕ್ತ ಏಪ್ರಿಲ್ 5, 2025 ರಂದು ಜ್ಯುಬ್ಲಿ ವೃತ್ತದಲ್ಲಿರುವ ಭಾರತ ರತ್ನ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ ಅವರ ಪುತ್ಥಳಿಗೆ ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ ಮತ್ತು ಸಮಾಜ ಕಲ್ಯಾಣ ಇಲಾಖೆಯಿಂದ ಭಾರತ ರತ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಗುವುದು, ನಂತರ ಡಾ. ಪಾಟೀಲ ಪುಟ್ಟಪ್ಪ ಸಭಾಭವನ (ಕರ್ನಾಟಕ ವಿದ್ಯಾವರ್ಧಕ ಸಂಘ) ದಲ್ಲಿ ಬೆಳಿಗ್ಗೆ 11 ಗಂಟೆಗೆ ಜರುಗುವ ಮುಖ್ಯ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.












Click it and Unblock the Notifications