ಗಡಿ ವಿವಾದ: ರಾಜ್ಯದ ನೀತಿಯನ್ನ ಸ್ಪಷ್ಟವಾಗಿ ಪ್ರಕಟಿಸಲಾಗಿದೆ: ಬಸವರಾಜ ಬೊಮ್ಮಾಯಿ
ಬೆಂಗಳೂರು, ಡಿಸೆಂಬರ್ 8: ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕದ ನೀತಿಯನು ಸ್ಪಷ್ಟವಾಗಿ ಪ್ರಕಟಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ವಿಧಾನಸೌಧದಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಕನ್ನಡಿಗರ ರಕ್ಷಣೆ, ಅಲ್ಲಿನ ಆಸ್ತಿ ಪಾಸ್ತಿ ರಕ್ಷಣೆ ಮಾಡುವ ಸಲುವಾಗಿ ಕ್ರಮವಹಿಸಿದ್ದು, ಮಹಾರಾಷ್ಟ್ರ ಡಿಜಿಪಿ ಹಾಗೂ ಮುಖ್ಯ ಕಾರ್ಯದರ್ಶಿಗಳೊಂದಿಗೆ ಮಾತನಾಡಿದ್ದೇವೆ. ಕರ್ನಾಟಕದಲ್ಲಿಯೂ ಕೂಡ ಸಂಪುರ್ಣ ಬಂದೋಬಸ್ತು ಮಾಡಲಾಗಿದೆ.
ನಾನೂ ಕೂಡ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರೊಂದಿಗೆ ಮಾತನಾಡಿದ್ದು, ಕನ್ನಡ ನಾಡಿನ ನಿಲುವನ್ನು ಸ್ಪಷ್ಟಪಡಿಸಲಾಗಿದೆ. ಮಹಾರಾಷ್ಟ್ರ ಮುಖ್ಯಮಂತ್ರಿಗಳಿಗೆ ಕರೆ ಮಾಡಿ ಎರಡೂ ಕಡೆ ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ಹೇಳಿದ್ದಾರೆ. ನಿಮ್ಮ ಭಾಗದಲ್ಲಿ ಶಾಂತಿ ಸೌಹಾರ್ದತೆಯನ್ನು ನೀವು ಕಾಪಾಡಿಕೊಳ್ಳಿ, ನಮ್ಮ ಭಾಗದಲ್ಲಿ ನಾವು ನೋಡಿಕೊಳ್ಳುತ್ತೇವೆ ಎಂದು ತಿಳಿಸಲಾಗಿದೆ. ಯಾವುದೇ ಕಾರಣಕ್ಕೂ ಆ ಕಡೆಯಿಂದ ಪ್ರಚೋದನೆಯಾಗಕೂಡದು ಎಂದು ಆಗ್ರಹಿಸಲಾಗಿದೆ. ಅಮಿತ್ ಶಾ, ಅವರಾಗಲಿ ಬೇರ್ಯಾರೂ ನನ್ನ ಬಳಿ ಈ ಕುರಿತು ಮಾತನಾಡಿಲ್ಲ ಎಂದು ತಿಳಿಸಿದರು.

ಮಹಾರಾಷ್ಟ್ರದ ಕನ್ನಡಿಗರಿಗೆ ಸೂಕ್ತ ರಕ್ಷಣೆ ನೀಡಿ ಎಂದು ಸಿದ್ದರಾಮಯ್ಯ ಆಗ್ರಹ
ಗಡಿ ವಿವಾದಗಳನ್ನು ಬೆಳೆಯಲು ಬಿಟ್ಟು ರಾಜಕೀಯಕ್ಕೆ ಬಳಸುವುದು ಬಿಜೆಪಿಯ ಹುಟ್ಟುಗುಣ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟರ್ ಮೂಲಕ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಸಂಧಾನದ ಮೂಲಕ ಪರಿಹರಿಸಬೇಕಿದ್ದ ಬೆಳಗಾವಿ ಗಡಿ ವಿವಾದವನ್ನು ಬೆಳೆಯಲು ಬಿಟ್ಟು ರಾಜ್ಯ ಸರ್ಕಾರ ಚಂದ ನೋಡುತ್ತಾ ಕೂತಿದೆ. ಬೆಳಗಾವಿ-ಮಹಾರಾಷ್ಟ್ರ ನಡುವಿನ ಬಸ್ ಸಂಚಾರ ಸ್ಥಗಿತಗೊಂಡಿರುವ ಕಾರಣ ಜನ ಪರದಾಡುವಂತಾಗಿದೆ. ಎರಡೂ ಕಡೆಗಳಲ್ಲಿ ಜನ ಉದ್ರಿಕ್ತರಾಗಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಿ ಶಾಂತಿ ಕಾಪಾಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಮಹಾರಾಷ್ಟ್ರದಲ್ಲಿರುವ ಕನ್ನಡಿಗರ ವಿರುದ್ಧ ಅಲ್ಲಿನ ಸರ್ಕಾರ ಅತಿರೇಕದ ಕ್ರಮಗಳಿಗೆ ಮುಂದಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆ ರಾಜ್ಯದ ಮುಖ್ಯಮಂತ್ರಿಗಳನ್ನು ಸಂಪರ್ಕಿಸಿ ಮಹಾರಾಷ್ಟ್ರದ ಕನ್ನಡಿಗರಿಗೆ ಸೂಕ್ತ ರಕ್ಷಣೆ ನೀಡಬೇಕು. ಡಬಲ್ ಎಂಜಿನ್ ಸರ್ಕಾರ ಎಂದು ಎದೆ ಬಡಿದುಕೊಂಡರೆ ಸಾಲದು. ಆ ಅವಕಾಶವನ್ನು ಬಳಸಿಕೊಂಡು ಎರಡು ರಾಜ್ಯಗಳಿಗೆ ಸಂಬಂಧಿಸಿದ ವಿವಾದಗಳನ್ನು ಬಗೆಹರಿಸಿಕೊಳ್ಳಲು ಕೇಂದ್ರ ಬಿಜೆಪಿ ಸರ್ಕಾರದ ನೆರವನ್ನು ಪಡೆಯಬೇಕು ಎಂದು ಹೇಳಿದ್ದಾರೆ.












Click it and Unblock the Notifications