Sting Operation: ಕಾಂಗ್ರೆಸ್ ನಾಯಕಿ ಕೃಪಾ ಆಳ್ವಾ ಬಂಧನ ಬೆನ್ನಲ್ಲೇ ಜಿ.ಪರಮೇಶ್ವರ ಮಹತ್ವದ ಮಾಹಿತಿ
ಬೆಂಗಳೂರು: ಮಾಜಿ ಸಿದ್ದರಾಮಯ್ಯರನ್ನು ಸಂಬಂಧಿಸಿದ್ದು ಎನ್ನಲಾದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಕೃಪಾ ಆಳ್ವಾ ಶರಣಾಗತಿ ಬೆನ್ನಲ್ಲೆ ರಾಜ್ಯದ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. ಸ್ಟಿಂಗ್ ಪ್ರಕರಣ, ಹೈಕಮಾಂಡ್ ಮಧ್ಯಪ್ರವೇಶ, ಮುಜುಗರ ಹಾಗೂ ರಾಜಕೀಯ ಪರಿಸ್ಥಿತಿ ಕುರಿತು ಮಾತನಾಡಿದ್ದಾರೆ.
ಬೆಂಗಳೂರಿನ ಸದಾಶಿವನಗರ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಟಿಂಗ್ ಪ್ರಕರಣದಿಂದ ಸರ್ಕಾರ ಮತ್ತು ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಹೈಕಮಾಂಡ್ ಮಧ್ಯಪ್ರವೇಶಿಸಬೇಕೆಂಬ ಒತ್ತಾಯ ಕೇಳಿ ಬಂದಿದೆ. ಇದಕ್ಕೆ ಉತ್ತರಿಸಿದ ಡಿಸಿಎಂ, ಈ ವಿಚಾರದಲ್ಲಿ ತಕ್ಷಣವೇ ಹೈಕಮಾಂಡ್ ಮಧ್ಯಪ್ರವೇಶಿಸಬೇಕೆಂದು ಹೇಳುವ ಅಗತ್ಯವಿಲ್ಲ. ಮುಖ್ಯಮಂತ್ರಿ ಹಾಗೂ ಪಕ್ಷದ ಅಧ್ಯಕ್ಷರು ಕುಳಿತು ಚರ್ಚಿಸಿ, ಸರ್ಕಾರ ಅಥವಾ ಪಕ್ಷಕ್ಕೆ ಮುಜುಗರವಾಗದ ರೀತಿಯಲ್ಲಿ ಸ್ಥಳೀಯವಾಗಿಯೇ ಸಮಸ್ಯೆ ಬಗೆಹರಿಸಿಕೊಳ್ಳಬೇಕಿದೆ ಎಂದು ತಿಳಿಸಿದರು.

ಹೈಕಮಾಂಡ್ ಮಧ್ಯಪ್ರವೇಶದಿಂದ ಸಮಸ್ಯೆ ಬಗೆಹರಿಯಲ್ಲ
ಪಕ್ಷದ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿಗಳೂ ಇದ್ದಾರೆ. ಪ್ರತಿಯೊಂದು ವಿಚಾರಕ್ಕೂ ಹೈಕಮಾಂಡ್ ಮಧ್ಯಪ್ರವೇಶವನ್ನು ನಿರೀಕ್ಷಿಸುತ್ತಾ ಕುಳಿತರೆ ಸಮಸ್ಯೆ ಬಗೆಹರಿಯುವುದಿಲ್ಲ. ಹಿರಿಯ ನಾಯಕರ ತಂಡವನ್ನು ಕಳುಹಿಸಲಾಗುತ್ತದೆ ಎಂಬ ಚರ್ಚೆಗಳ ಕುರಿತು ಕೇಳಿದ ಪ್ರಶ್ನೆಗೆ, ಆ ಬಗ್ಗೆ ತಮಗೆ ಮಾಹಿತಿ ಇಲ್ಲ ಎಂದು ಹೇಳಿದರು.
ಸರ್ಕಾರದ ಕೆಲಸಗಳಿಗಿಂತ ಸ್ಟಿಂಗ್ ಪ್ರಕರಣವೇ ಹೆಚ್ಚು ಚರ್ಚೆ, ದುರದೃಷ್ಟಕರ
ಸ್ಟಿಂಗ್ ಪ್ರಕರಣದ ವಿಚಾರವಾಗಿ ಸರ್ಕಾರದ ಕೆಲಸ ಕಾರ್ಯಗಳಿಗಿಂತ ವಿವಾದಗಳೇ ಹೆಚ್ಚು ಮುನ್ನೆಲೆಗೆ ಬರುತ್ತಿವೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಇದು ದುರದೃಷ್ಟಕರ. ಸರ್ಕಾರ ಆಡಳಿತ ನಡೆಸುತ್ತಿದ್ದರೆ, ವಿರೋಧ ಪಕ್ಷವು ತನ್ನ ಜವಾಬ್ದಾರಿ ನಿರ್ವಹಿಸುತ್ತಿದೆ. ಆದರೆ, ಒಂದೇ ವಿಚಾರವನ್ನು ಪ್ರಮುಖವಾಗಿ ಚರ್ಚಿಸುತ್ತಾ ಕುಳಿತರೆ ಜನರ ಸಮಸ್ಯೆಗಳು ಮತ್ತು ಸರ್ಕಾರದ ಅಭಿವೃದ್ಧಿ ಕಾರ್ಯಗಳು ಹಿನ್ನೆಲೆಗೆ ಸರಿಯುತ್ತವೆ ಎಂದು ಬೇಸರ ವ್ಯಕ್ತಪಡಿಸಿದರು.
ಪ್ರಕರಣದ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಆದರೆ, ಪ್ರತಿದಿನ ಪತ್ರಿಕೆಗಳು ಮತ್ತು ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ಇದೇ ವಿಚಾರವನ್ನು ಜನರು ನೋಡುತ್ತಿದ್ದರೆ ಅವರಿಗೆ ಬೇಸರವಾಗುವುದಿಲ್ಲವೇ? ಜನರ ನಿರೀಕ್ಷೆ ಏನು ಎಂಬುದನ್ನು ಅರ್ಥಮಾಡಿಕೊಳ್ಳಬೇಕು. ಸರ್ಕಾರದ ಕೆಲಸಗಳು, ಜನರ ಸಮಸ್ಯೆಗಳು ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆಯೂ ಚರ್ಚೆಯಾಗಬೇಕು ಎಂದರು..
ಶೇ.80ರಷ್ಟು ಬೆಳೆ ನಷ್ಟ, ಪರಿಹಾರಕ್ಕೆ ಕೇಂದ್ರಕ್ಕೆ ಒತ್ತಾಯ
ರಾಜ್ಯದಲ್ಲಿ ಕೆಲವು ಪ್ರದೇಶಗಳಲ್ಲಿ ಶೇ. 80ರಷ್ಟು ಬೆಳೆ ನಷ್ಟವಾಗಿದೆ. ಮುಂದಿನ ದಿನಗಳಲ್ಲಿ ಆಹಾರ ಧಾನ್ಯಗಳ ಉತ್ಪಾದನೆಯ ಮೇಲೂ ಇದರ ಪರಿಣಾಮ ಉಂಟಾಗುವ ಸಾಧ್ಯತೆಯಿದೆ. ಸದ್ಯಕ್ಕೆ ರಾಜ್ಯದಲ್ಲಿ ಆಹಾರ ಧಾನ್ಯಗಳ ದಾಸ್ತಾನು ಲಭ್ಯವಿದ್ದು, ಮುಂದಿನ ದಿನಗಳಲ್ಲಿ ಉತ್ಪಾದನೆಯಲ್ಲಿ ಕೊರತೆ ಎದುರಾದರೆ ಅದರ ಪರಿಣಾಮಗಳ ಬಗ್ಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಬೇಕಾಗುತ್ತದೆ. ಕೇಂದ್ರ ಸರ್ಕಾರದಲ್ಲಿರುವ ರಾಜ್ಯದ ಸಂಸದರು ಮತ್ತು ಸಚಿವರು ಪಕ್ಷಭೇದ ಮರೆತು ಬರ ಪರಿಸ್ಥಿತಿಯನ್ನು ಎದುರಿಸಲು ನೆರವಾಗಬೇಕು ಎಂದು ಉಪಮುಖ್ಯಮಂತ್ರಿಗಳಾದ ಡಾ. ಜಿ. ಪರಮೇಶ್ವರ ತಿಳಿಸಿದರು.
ಬೆಂಗಳೂರಿನ ಸದಾಶಿವನಗರ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪರಿಹಾರ ಬಿಡುಗಡೆಗೆ ಸಂಬಂಧಿಸಿದಂತೆ ಆದೇಶ ಹೊರಡಿಸಲಾಗಿದೆ. ನಿಗದಿತ ಮಾನದಂಡಗಳ ಪ್ರಕಾರ ಪ್ರಕ್ರಿಯೆ ನಡೆಯುತ್ತಿದ್ದು, ಹಣ ಬಿಡುಗಡೆಯಾದ ಕೂಡಲೇ ಜಿಲ್ಲಾಧಿಕಾರಿಗಳ ಮೂಲಕ ರೈತರಿಗೆ ತಲುಪಿಸಲಾಗುವುದು ಎಂದು ಹೇಳಿದರು.
ಪರಿಹಾರ ಬಿಡುಗಡೆ ವಿಳಂಬವಾಗದಂತೆ ತಾವು ಕೂಡ ಕಂದಾಯ ಸಚಿವನಾಗಿ ಹಣಕಾಸು ಇಲಾಖೆಗೆ ಒತ್ತಾಯಿಸುತ್ತಿದ್ದೇನೆ. ಹಣಕಾಸು ಇಲಾಖೆಯಿಂದ ಅನುಮೋದನೆ ದೊರೆತಿದೆ. ಶೀಘ್ರ ಹಣ ಬಿಡುಗಡೆಯಾಗಬೇಕು ಎಂದು ಒತ್ತಾಯಿಸಲಾಗುವುದು. ಸರ್ವಪಕ್ಷದ ನಿಯೋಗದ ಪ್ರಸ್ತಾವನೆ ಕೈಬಿಟ್ಟಿಲ್ಲ. ಈ ಸಂಬಂಧ ಕೇಂದ್ರದವರ ಬಳಿ ಸಮಯ ಕೇಳುತ್ತಿದ್ದೇವೆ ಆದರೆ, ಇನ್ನೂ ಸಮಯ ನೀಡಿಲ್ಲ ಎಂದು ತಿಳಿಸಿದರು.
ರಾಜ್ಯ ಸರ್ಕಾರ ₹1,250 ಕೋಟಿ
ರಾಜ್ಯ ಸರ್ಕಾರ ತನ್ನ ಪಾಲಿನ ಜವಾಬ್ದಾರಿಯನ್ನು ನಿರ್ವಹಿಸಿದೆ. ಕೇಂದ್ರ ಸರ್ಕಾರವೂ ತನ್ನ ಪಾಲಿನ ಜವಾಬ್ದಾರಿಯನ್ನು ನಿರ್ವಹಿಸಬೇಕು. ರಾಜ್ಯ ಸರ್ಕಾರ ₹1,250 ಕೋಟಿ ಘೋಷಿಸಿರುವುದಾದರೂ ಯಾವ ವ್ಯವಸ್ಥೆಯಡಿ ಘೋಷಿಸಿದೆ ಎಂಬುದನ್ನು ಗಮನಿಸಬೇಕು. ಕೇಂದ್ರ ಸರ್ಕಾರ ಎನ್‌ಡಿಆರ್‌ಎಫ್ ಅಡಿಯಲ್ಲಿ ಪರಿಹಾರ ನೀಡದಿರುವುದರ ಬಗ್ಗೆಯೂ ಪ್ರಶ್ನೆಗಳಿವೆ. ಪರಸ್ಪರ ಆರೋಪ-ಪ್ರತ್ಯಾರೋಪ ಮಾಡುತ್ತಾ ಕುಳಿತರೆ ಸಂಕಷ್ಟ ಅನುಭವಿಸುವುದು ರೈತರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಮ್ಮ ತಮ್ಮ ಜವಾಬ್ದಾರಿಗಳ ಬಗ್ಗೆ ಚರ್ಚಿಸುತ್ತಾ ಕಾಲ ಕಳೆಯುವ ಬದಲು ರೈತರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಹೇಳಿದರು.
ಬರ ಪರಿಸ್ಥಿತಿಯ ಪರಿಣಾಮವಾಗಿ ಮುಂದಿನ ದಿನಗಳಲ್ಲಿ ಆಹಾರ ಧಾನ್ಯಗಳ ಉತ್ಪಾದನೆ ನಿರೀಕ್ಷಿತ ಮಟ್ಟದಲ್ಲಿ ಆಗದಿದ್ದರೆ ಅದರ ಪರಿಣಾಮ ಸಹಜವಾಗಿಯೇ ಎದುರಾಗುತ್ತದೆ. ಸದ್ಯಕ್ಕೆ ರಾಜ್ಯದಲ್ಲಿ ಆಹಾರ ಧಾನ್ಯಗಳ ದಾಸ್ತಾನು ಲಭ್ಯವಿದೆ. ಆದರೆ, ಉತ್ಪಾದನೆಯಲ್ಲಿ ಕೊರತೆ ಎದುರಾದರೆ ಆಹಾರ ಧಾನ್ಯಗಳ ಲಭ್ಯತೆ ಕುರಿತು ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು. ಕೇಂದ್ರ ಸರ್ಕಾರದಲ್ಲಿ ಸಚಿವರಾಗಿರುವ ಎಚ್.ಡಿ. ಕುಮಾರಸ್ವಾಮಿ ಸೇರಿದಂತೆ ರಾಜ್ಯದ ಸಂಸದರು ಹಾಗೂ ಸಚಿವರು ಬರ ಪರಿಸ್ಥಿತಿಯನ್ನು ಎದುರಿಸಲು ನೆರವಾಗಬೇಕು. ಒಬ್ಬರನ್ನೇ ಹೊಣೆಗಾರರನ್ನಾಗಿ ಮಾಡದೆ, ಕೇಂದ್ರದಲ್ಲಿ ಜವಾಬ್ದಾರಿ ಹೊಂದಿರುವ ಎಲ್ಲರೂ ಒಟ್ಟಾಗಿ ಈ ಬಗ್ಗೆ ಚಿಂತಿಸಬೇಕು ಎಂದರು.
ಶಿಕ್ಷಕರ ಕ್ಷೇತ್ರದ ಚುನಾವಣೆ: ಚುನಾವಣಾ ಆಯೋಗದ ಸೂಚನೆ ಪಾಲನೆ
ತುಮಕೂರಿನಲ್ಲಿ ಕಳೆದ ಬಾರಿ ಸಂಬಂಧಪಟ್ಟ ಕಾರ್ಯಕ್ರಮಕ್ಕೆ ಅನುಮತಿ ನೀಡಲಾಗಿತ್ತು. ಈ ಬಾರಿಯೂ ಅರ್ಜಿ ಸಲ್ಲಿಸಿದರೆ ಅನುಮತಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೆ. ಪಥ ಸಂಚಲನ ಕಾರ್ಯಕ್ರಮವು ಕೇವಲ ಒಂದು ಗಂಟೆ ನಡೆಯಲಿದೆ ಎಂದು ತಿಳಿಸಲಾಗಿತ್ತು. ಈ ಹಿಂದೆ ಯಾವುದೇ ದೂರುಗಳು ಬಂದಿರದ ಹಿನ್ನೆಲೆಯಲ್ಲಿ ಅನುಮತಿ ನೀಡಬಹುದು ಎಂದು ಹೇಳಿದ್ದೆ.
ಕಳೆದ ಬಾರಿ ತಾವೇ ಗೃಹ ಸಚಿವರಾಗಿದ್ದ ಸಂದರ್ಭದಲ್ಲಿ ಯಾವುದೇ ತೊಂದರೆ ಇರಲಿಲ್ಲ ಮತ್ತು ಅನುಮತಿ ನೀಡಲಾಗಿತ್ತು. ಈ ಬಾರಿಯೂ ಅರ್ಜಿ ಸಲ್ಲಿಸಿದರೆ ಅನುಮತಿ ನೀಡುವಂತೆ ಹೇಳಿದ್ದೆ. ಆದರೆ, ಚುನಾವಣಾ ಆಯೋಗವು ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಅನುಮತಿ ನೀಡಬಾರದು ಎಂದು ಪತ್ರ ಬರೆದಿರುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಚುನಾವಣಾ ಆಯೋಗದ ಸೂಚನೆಯನ್ನು ಮೀರಿ ಜಿಲ್ಲಾ ಆಡಳಿತ ಅನುಮತಿ ನೀಡಲು ಸಾಧ್ಯವಿಲ್ಲ. ಆಯೋಗದ ನಿರ್ದೇಶನ ಉಲ್ಲಂಘಿಸಿ ಅನುಮತಿ ನೀಡಿದರೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ. ತಾವು ಅನುಮತಿ ನೀಡುವಂತೆ ಮಾತ್ರ ಹೇಳಿದ್ದೆನೇ ಹೊರತು ಯಾವುದೇ ವಿವಾದ ಸೃಷ್ಟಿಸುವ ಉದ್ದೇಶ ಇರಲಿಲ್ಲ ಎಂದ ಅವರು, ಮುಂದಿನ ವಿಧಾನಸಭಾ ಚುನಾವಣೆ ಸಮೀಕ್ಷೆಗಳ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳುವುದಿಲ್ಲ ಎಂದು ತಿಳಿಸಿದರು.
ರೈತರ ಪರಿಹಾರ ಬಿಡುಗಡೆಗೆ ಹಣಕಾಸು ಇಲಾಖೆಗೆ ಒತ್ತಾಯ
ಬರ ಪರಿಹಾರ ಘೋಷಣೆಯಾಗಿ ಒಂದು ತಿಂಗಳು ಕಳೆದಿದ್ದರೂ ರೈತರಿಗೆ ಹಣ ತಲುಪದಿರುವ ಕುರಿತು ಮತ್ತೊಮ್ಮೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಪರಿಹಾರ ಬಿಡುಗಡೆಗೆ ಆದೇಶ ಹೊರಡಿಸಲಾಗಿದೆ. ನಿಗದಿತ ಮಾನದಂಡಗಳ ಪ್ರಕಾರ ಪ್ರಕ್ರಿಯೆ ನಡೆಯುತ್ತಿದೆ. ತಾವು ಕಂದಾಯ ಸಚಿವರಾಗಿಯೂ ಹಣವನ್ನು ಶೀಘ್ರ ಬಿಡುಗಡೆ ಮಾಡುವಂತೆ ಒತ್ತಾಯಿಸುತ್ತಿದ್ದೇನೆ. ಹಣಕಾಸು ಇಲಾಖೆಗೆ ತ್ವರಿತವಾಗಿ ಹಣ ಬಿಡುಗಡೆ ಮಾಡುವಂತೆ ಹೇಳಲಾಗುವುದು. ಹಣ ಬಿಡುಗಡೆಯಾದ ಬಳಿಕ ಜಿಲ್ಲಾಧಿಕಾರಿಗಳ ಮೂಲಕ ರೈತರಿಗೆ ತಲುಪಿಸಲಾಗುವುದು ಎಂದರು.


Click it and Unblock the Notifications
