Sukri Bommagowda: ಜಾನಪದ ಗಾಯಕಿ ಸುಕ್ರಿ ಬೊಮ್ಮಗೌಡ ಅವರ ನಿಧನಕ್ಕೆ ರಾಜಕೀಯ ಗಣ್ಯರ ಸಂತಾಪ
ಬೆಂಗಳೂರು, ಫೆಬ್ರವರಿ 13: ಪದ್ಮಶ್ರೀ ಪುರಸ್ಕೃತೆ 88 ವರ್ಷದ ಸುಕ್ರಿ ಬೊಮ್ಮು ಗೌಡ ಇಂದು (ಗುರುವಾರ) ಬೆಳಗಿನ ಜಾವ ಸುಮಾರು 3.30ಕ್ಕೆ ನಿಧನರಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬಡಗೇರಿ ಗ್ರಾಮದಲ್ಲಿ ವಿಧಿವಶರಾಗಿದ್ದಾರೆ. ಸುಕ್ರಜ್ಜಿ ಅಂತಾನೇ ಸುಕ್ರಿ ಬೊಮ್ಮಗೌಡ ಜನಪ್ರಿಯರಾಗಿದ್ದರು. ಸುಕ್ರಜ್ಜಿ ಅವರಿಗೆ ಸುಮಾರು 5000 ಕ್ಕೂ ಹೆಚ್ಚು ಹಾಲಕ್ಕಿ ಹಾಡು ಕಂಠಪಾಠ ಇತ್ತು ಹಾಲಕ್ಕಿ ಹಾಡುಗಳ ಕೋಗಿಲೆ ಎಂದು ಪ್ರಸಿದ್ಧರಾಗಗಿದ್ದರು.
2017ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಸುಕ್ರಿ ಬೊಮ್ಮು ಗೌಡ ಅವರನ್ನು ಗೌರವಿಸಲಾಗಿತ್ತು. ಹಾಲಕ್ಕಿ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಡಿಕೆ ಹಾಗೂ ಜಿಲ್ಲೆಯ ಅಭಿವೃದ್ಧಿ ಸಂಬಂಧಿಸಿದ ವಿವಿಧ ಹೋರಾಟಗಳಲ್ಲಿ ಸುಕ್ರಜ್ಜಿ ಭಾಗಿಯಾಗಿದ್ದರು. ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮು ಗೌಡ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದು, ಪ್ರಖ್ಯಾತ ಜಾನಪದ ಗಾಯಕಿ ಸುಕ್ರಿ ಬೊಮ್ಮಗೌಡ ಅವರ ನಿಧನದಿಂದ ಸಾಂಸ್ಕೃತಿಕ ಲೋಕಕ್ಕೆ ಆಗಿರುವ ನಷ್ಟ ತುಂಬಲು ಸಾಧ್ಯವಿಲ್ಲ. ಅವರೊಬ್ಬರು ಹುಟ್ಟು ಕಲಾವಿದೆ. ಹಾಲಕ್ಕಿ ಜಾನಪದ ಹಾಡುಗಳ ಮೂಲಕವೇ ಲೋಕಪ್ರಸಿದ್ಧರಾಗಿದ್ದ "ಸುಕ್ರಜ್ಜಿ'' ಅವರಿಗೆ ಸಂಗೀತವೇ ಬದುಕಾಗಿತ್ತು. ಸಂಗೀತದ ಜೊತೆಯಲ್ಲಿ ಮಧ್ಯಪಾನ ವಿರೋಧಿ ಆಂದೋಲನದಲ್ಲಿಯೂ ಸಕ್ರಿಯರಾಗಿದ್ದ ಸುಕ್ರಿ ಬೊಮ್ಮಗೌಡ ಅವರ ಬದುಕು ಮತ್ತು ಸಾಧನೆ ಆದರ್ಶಪ್ರಾಯವಾದುದು.
ಸಂಗೀತ ಕಲಾಸೇವೆಗಾಗಿ ಪದ್ಮಶ್ರೀ ಪ್ರಶಸ್ತಿ ಗಳಿಸಿದ್ದ ಸುಕ್ರಜ್ಜಿ ಅವರು ಹಂಪಿ ವಿಶ್ವವಿದ್ಯಾಲಯ ನೀಡುವ ನಾಡೋಜ ಪ್ರಶಸ್ತಿಯೂ ಸೇರಿದಂತೆ ಹಲವಾರು ಪ್ರಶಸ್ತಿಗಳಿಂದ ಪುರಸ್ಕೃತರಾಗಿದ್ದರು. ಸುಕ್ರಿ ಬೊಮ್ಮಗೌಡ ಅವರನ್ನು ಕಳೆದುಕೊಂಡಿರುವ ಬಂಧು ಮಿತ್ರರ ದು:ಖದಲ್ಲಿ ನಾನೂ ಪಾಲ್ಗೊಂಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ.
ಇನ್ನೂ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರಾದ ಹೆಚ್ ಡಿ ಕುಮಾರಸ್ವಾಮಿ ಅವರು ಸಂತಾಪ ಸೂಚಿಸಿದ್ದು, ಹಾಲಕ್ಕಿ ಹಾಡುಗಳ ಕೋಗಿಲೆ, ಪದ್ಮಶ್ರೀ ಪುರಸ್ಕೃತರು ಹಾಗೂ ಸುಕ್ರಜ್ಜಿ ಎಂದೇ ಜನಜನಿತರಾಗಿದ್ದ ಸುಕ್ರಿ ಬೊಮ್ಮಗೌಡ ಅವರ ನಿಧನದ ಸುದ್ದಿ ಕೇಳಿ ಬಹಳ ದುಃಖವಾಯಿತು.ಮದ್ಯಪಾನ ವಿರೋಧಿ ಹೋರಾಟ ಸೇರಿ ಅನೇಕ ಜನಪರ ವಿಷಯಗಳ ಬಗ್ಗೆ ಜಾಗೃತಿ ಮೂಡಿಸಿದ್ದ ಅವರ ನಾಲಗೆಯ ಮೇಲೆ ಐದು ಸಾವಿರಕ್ಕೂ ಹೆಚ್ಚು ಹಾಲಕ್ಕಿ ಹಾಡುಗಳು ನಲಿದಾಡುತ್ತಿದ್ದವು ಎಂದು ಕೇಳಿದ್ದೇನೆ. ಅವರ ಅಗಲಿಕೆ ರಾಜ್ಯದ ಸಾಂಸ್ಕೃತಿಕ, ಜನಪದ ಲೋಕಕ್ಕೆ ಬಹುದೊಡ್ಡ ನಷ್ಟ. ಅವರಿಗೆ ಸದ್ಗತಿ ಸಿಗಲಿ ಹಾಗೂ ದುಃಖ ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.
ಸುಕ್ರಿ ಬೊಮ್ಮಗೌಡ ಅವರ ನಿಧನಕ್ಕೆ ವಿಜಯೇಂದ್ರ ಸಂತಾಪ
ಕಾರವಾರ ಜಿಲ್ಲೆಯ 'ಹಾಡುಹಕ್ಕಿ', ಪದ್ಮಶ್ರೀ ಪುರಸ್ಕøತೆ ಸುಕ್ರಿ ಬೊಮ್ಮಗೌಡ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಸುಕ್ರಿ ಬೊಮ್ಮಗೌಡ ಅವರು ಬಾಲ್ಯದಲ್ಲಿದ್ದಾಗ ತಮ್ಮ ತಾಯಿ ಮೂಲಕ ಜಾನಪದ ಹಾಡುಗಳನ್ನು ಕಲಿತಿದ್ದರು. ಜಾನಪದ ಹಾಡು, ಹಾಲಕ್ಕಿ ಒಕ್ಕಲಿಗ ಬುಡಕಟ್ಟಿನ ಸಾಂಪ್ರದಾಯಿಕ ಸಂಗೀತ ಹಾಡುಗಳನ್ನು ಸಂರಕ್ಷಿಸಿಕೊಂಡು ಹೋಗುವಲ್ಲಿ ಶ್ರಮಿಸಿದ್ದರು. ಹಾಡುಗಳು ಮಾತ್ರವಲ್ಲದೇ ವಿವಿಧ ಸಾಮಾಜಿಕ ಹೋರಾಟಗಳಲ್ಲಿಯೂ ಮುಂಚೂಣಿಯಲ್ಲಿದ್ದರು ಎಂದು ತಿಳಿಸಿದ್ದಾರೆ.
ಅವರಲ್ಲಿದ್ದ ಅದ್ಭುತ ಹಾಡುಗಾರಿಕೆ ಕಲೆಯನ್ನು ಗುರುತಿಸಿದ್ದ ಭಾರತ ಸರ್ಕಾರ, ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು. ಸ್ಥಳೀಯ ಬುಡಕಟ್ಟು ಜನಾಂಗದ ಸಂಸ್ಕೃತಿಯನ್ನು ಸಂರಕ್ಷಿಸಿದ್ದಕ್ಕಾಗಿ ಕರ್ನಾಟಕ ಸರ್ಕಾರದಿಂದ ಪ್ರಶಸ್ತಿ, 'ಜಾನಪದ ಶ್ರೀ' ಪ್ರಶಸ್ತಿ, ಕನ್ನಡ ವಿಶ್ವವಿದ್ಯಾಲಯದಿಂದ ನೀಡಲಾಗುವ 'ನಾಡೋಜ' ಗೌರವ ಹಾಗೂ 2009ರಲ್ಲಿ ಸಂದೇಶ ಕಲಾ ಪ್ರಶಸ್ತಿ, ಆಳ್ವಾಸ್ ನುಡಿಸಿ ಪ್ರಶಸ್ತಿ ಸೇರಿದಂತೆ ಅನೇಕ ಗೌರವಗಳು ಇವರಿಗೆ ಲಭಿಸಿದ್ದವು ಎಂದು ತಿಳಿಸಿದ್ದಾರೆ. ಅವರ ಕುಟುಂಬ ವರ್ಗದವರಿಗೆ ಈ ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.











Click it and Unblock the Notifications