Breaking; ಹಿಜಾಬ್ ವಿವಾದ; ಸುಪ್ರೀಂನಲ್ಲಿ 2 ದಿನದಲ್ಲಿ ವಿಚಾರಣೆ ಆರಂಭ
ನವದೆಹಲಿ, ಏಪ್ರಿಲ್ 26; ಹಿಜಾಬ್ ವಿವಾದದ ಕುರಿತು ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಗೆ ಸುಪ್ರೀಂಕೋರ್ಟ್ ಒಪ್ಪಿಗೆ ನೀಡಿದೆ. ಎರಡು ದಿನದಲ್ಲಿ ಅರ್ಜಿಗಳ ವಿಚಾರಣೆಗೆ ಲಿಸ್ಟ್ ಮಾಡಲಾಗುತ್ತದೆ ಎಂದು ಕೋರ್ಟ್ ಹೇಳಿದೆ.
ಮಂಗಳವಾರ ಸುಪ್ರೀಂಕೋರ್ಟ್ ಕಲಾಪದ ವೇಳೆ ಹಿರಿಯ ವಕೀಲೆ ಮೀನಾಕ್ಷಿ ಅರೋರ ಹಿಜಾಬ್ ವಿಚಾರದಲ್ಲಿ ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ನಡೆಸಬೇಕು ಎಂದು ಮನವಿ ಸಲ್ಲಿಸಿದರು.
ಮುಖ್ಯ ನ್ಯಾಯಮೂರ್ತಿ ಎನ್. ವಿ. ರಮಣ ಎರಡು ದಿನ ಕಾಯಿರಿ. ಅರ್ಜಿಗಳ ವಿಚಾರಣೆಗೆ ಲಿಸ್ಟ್ ಮಾಡಲಾಗುತ್ತದೆ ಎಂದು ಹೇಳಿದರು. ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಹಲವಾರು ಅರ್ಜಿಗಳು ಸಲ್ಲಿಕೆಯಾಗಿವೆ.

ಹಿಜಾಬ್ ಧರಿಸಲು ಅನುಮತಿ ಕೋರಿದ್ದ ಉಡುಪಿಯ ವಿದ್ಯಾರ್ಥಿಗಳ ಅರ್ಜಿ ಮತ್ತು ಇದೇ ವಿಚಾರದಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ನಡೆಸಿದ್ದ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ ನೇತೃತ್ವದ ವಿಶೇಷ ಪೀಠ ಹಿಜಾಬ್ ಧರಿಸಲು ಅವಕಾಶವಿಲ್ಲ ಎಂದು ತೀರ್ಪು ನೀಡಿತ್ತು.
ನ್ಯಾಯಮೂರ್ತಿ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್, ನ್ಯಾಯಮೂರ್ತಿ ಖಾಜಿ ಜೈಬುನ್ನಿಸಾ ಮೊಹಿದ್ದೀನ್ ಪೀಠ ನೀಡಿದ್ದ ತೀರ್ಪನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಲಾಗಿದೆ.
ಹಿಜಾಬ್ ವಿಚಾರದಲ್ಲಿ ಸಲ್ಲಿಕೆಯಾಗಿರುವ ಎಲ್ಲಾ ಅರ್ಜಿಗಳ ವಿಚಾರಣೆ ನಡೆಸಿದ್ದ ಕರ್ನಾಟಕ ಹೈಕೋರ್ಟ್ ಹಿಜಾಬ್ ಧರಿಸುವುದು ಅಗತ್ಯ ಧಾರ್ಮಿಕ ಆಚರಣೆ ಅಲ್ಲ ಎಂದು ತೀರ್ಪು ನೀಡಿತ್ತು. ಸರ್ಕಾರದ ಸಮವಸ್ತ್ರ ಸಂಹಿತೆ ಆದೇಶವನ್ನು ಪ್ರಶ್ನಿಸುವಂತಿಲ್ಲ ಎಂದು ಹೇಳಿತ್ತು.
ಹೈಕೋರ್ಟ್ ಆದೇಶದ ಬಳಿಕ ಸುಪ್ರೀಂಕೋರ್ಟ್ ಮೊರೆ ಹೋಗಲಾಗಿತ್ತು. ಅರ್ಜಿಗಳ ತುರ್ತು ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಲಾಗಿತ್ತು. ಆದರೆ ಕೋರ್ಟ್ ಅರ್ಜಿಗಳ ತುರ್ತು ವಿಚಾರಣೆಗೆ ನಿರಾಕರಿಸಿತ್ತು.












Click it and Unblock the Notifications