DK Shivakumar: ಸಿಎಂ ಸ್ಥಾನ ಕಿತ್ತಾಟದ ಮಧ್ಯೆ ಡಿಕೆ ಶಿವಕುಮಾರ್‌ಗೆ ರಿಲೀಫ್ ನೀಡಿದ ಸುಪ್ರೀಂ ಕೋರ್ಟ್
2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ 135 ಸ್ಥಾನಗಳನ್ನು ಗೆದ್ದಿರುವ ಕಾಂಗ್ರೆಸ್‌ಗೆ ಇದೀಗ ಮುಖ್ಯಮಂತ್ರಿ ಆಯ್ಕೆ ವಿಚಾರವೇ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಸಿಎಂ ಆಯ್ಕೆ ಕಗ್ಗಂಟು ಕ್ಷಣಕ್ಕೊಂದು ತಿರುವು ಪಡೆಯುತ್ತಿದೆ.
ಫಲಿತಾಂಶ ಬಂದು ನಾಲ್ಕು ದಿನಗಳು ಕಳೆದರೂ ನೂತನ ಸಿಎಂ ನೇಮಕವಾಗದೇ ಜನರಿಗೆ ಬೇಸರ ಮೂಡಿರುವುದಂತೂ ಸತ್ಯ. ಮುಖ್ಯಮಂತ್ರಿ ಸ್ಥಾನಕ್ಕಾಗಿ ಕಾಂಗ್ರೆಸ್‌ನ ನಾಯಕರಾದ ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ತೀವ್ರ ಪೈಪೋಟಿ ನಡೆಸುತ್ತಿದ್ದು, ಇಬ್ಬರಲ್ಲಿ ಒಬ್ಬರೂ ಹಿಂದಕ್ಕೆ ಸರಿಯದೇ ಬಿಗಿಪಟ್ಟು ಮುಂದುವರೆಸಿದ್ದಾರೆ.

ಒಂದು ಕಡೆ ಮಾಜಿ ಸಿಎಂ ಸಿದ್ದರಾಮಯ್ಯ ತಮಗೇ ಸಿಎಂ ಸ್ಥಾನ ನೀಡಬೇಕು ಎಂದು ಒತ್ತಡ ಹೇರುತ್ತಿದ್ದರೆ, ಮತ್ತೊಂದೆಡೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಈ ಬಾರಿ ಸಿಎಂ ಸ್ಥಾನವನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲವೆಂದು ಹೇಳಿದ್ದಾರೆ.
ಮುಖ್ಯಮಂತ್ರಿ ಸ್ಥಾನ ವಿಚಾರವಾಗಿ ರಾಷ್ಟ್ರ ರಾಜಧಾನಿಯಲ್ಲಿ ಗುದ್ದಾಟ ನಡೆಯುತ್ತಿದ್ದರೆ, ಇತ್ತ ಡಿಕೆ ಶಿವಕುಮಾರ್ ಅವರು ಖುಷಿಪಡುವ ಸುದ್ದಿಯೊಂದು ಹೊರಬಂದಿದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ದಾಖಲಾಗಿದ್ದ ಸಿಬಿಐ ಪ್ರಕರಣದ ತನಿಖೆಗೆ ತಡೆಯಾಜ್ಞೆ ತೆರವು ಕೋರಿ ಸಿಬಿಐ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಬುಧವಾರ ನಡೆಸಿತು.

ಈ ವೇಳೆ ತನಿಖೆ ತಡೆಯಾಜ್ಞೆ ತೆರವಿಗೆ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಹೇಳಿರುವ ಸುಪ್ರೀಂ ಕೋರ್ಟ್, ಮೇ 17ರಂದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಮಧ್ಯಂತರ ಆದೇಶವನ್ನು ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ ಮಾಡಿದೆ.
ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯ್ ಮತ್ತು ಸಂಜಯ್ ಕರೋಲ್ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ನ್ಯಾಯಪೀಠ, ಬುಧವಾರದಂದು ಸಿಬಿಐ ಪ್ರಕರಣದ ಅರ್ಜಿಯನ್ನು ಕೈಗೆತ್ತಿಕೊಂಡಿತು. ಡಿ.ಕೆ. ಶಿವಕುಮಾರ್ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿ, ಈ ಪ್ರಕರಣವು ಮೇ 23ರಂದು ಕರ್ನಾಟಕ ಹೈಕೋರ್ಟ್‌ನಲ್ಲಿ ವಿಚಾರಣೆಗೆ ಬರಲಿದೆ ಎಂದು ಮಾಹಿತಿ ನೀಡಿದರು.
ವಿಚಾರಣೆ ಜುಲೈಗೆ ಮುಂದೂಡಿಕೆ
ಡಿ.ಕೆ. ಶಿವಕುಮಾರ್ ವಿರುದ್ಧ ತನಿಖೆಗೆ ತಡೆಯಾಜ್ಞೆ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ವಿಚಾರಣೆಯನ್ನು ಜುಲೈ ತಿಂಗಳಿಗೆ ಮುಂದೂಡಿರುವ ಸುಪ್ರೀಂ ಕೋರ್ಟ್, ತಡೆಯಾಜ್ಞೆ ತೆರವಿಗೆ ಹೈಕೋರ್ಟ್‌ನಲ್ಲೇ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದೆ.
ಸದ್ಯ ರಾಜ್ಯದ ಮುಖ್ಯಮಂತ್ರಿ ಹುದ್ದೆಗಾಗಿ ಕಾಂಗ್ರೆಸ್ ಹೈಕಮಾಂಡ್ ಎದುರು ಬಿಗಿಪಟ್ಟು ಹಿಡಿದು ಕುಳಿತಿರುವ ಡಿಕೆ ಶಿವಕುಮಾರ್ ಅವರಿಗೆ ನಿಟ್ಟುಸಿರುವ ಬೊಇಡುವ ಸುದ್ದಿಯೊಂದು ಬಂದಿದ್ದು, ತನ್ನ ವಿರುದ್ಧದ ಪ್ರಕರಣದಲ್ಲಿ ತಾತ್ಕಾಲಿಕವಾಗಿ ರಿಲೀಫ್ ಸಿಕ್ಕಂತಾಗಿದೆ.
ಈ ಹಿಂದೆ ಕರ್ನಾಟಕ ಹೈಕೋರ್ಟ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದ ಸಿಬಿಐ ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ಈ ತಡೆಯಾಜ್ಞೆಯನ್ನು ತೆರವು ಮಾಡುವಂತೆ ಸಿಬಿಐ ಅಧಿಕಾರಿಗಳು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲಾಗಿತ್ತು.
ಈ ಅರ್ಜಿಯ ವಿಚಾರಣೆ ನಡೆಸಿದ ಭಾರತದ ಸರ್ವೋಚ್ಚ ನ್ಯಾಯಾಲಯ, ಕರ್ನಾಟಕ ಹೈಕೋರ್ಟ್‌ನ ರಜೆ ಅವಧಿ ಮುಗಿಯಲಿರುವುದರಿಂದ ಅಲ್ಲೇ ವಿಚಾರಣೆಗೆ ಸೂಕ್ತ ಎಂದು ಬುಧವಾರ ಅಭಿಪ್ರಾಯಪಟ್ಟಿದೆ.












Click it and Unblock the Notifications