ಗುಡ್ ನ್ಯೂಸ್: ರಾಜ್ಯದಲ್ಲಿ 17 ಸಾವಿರ ಹುದ್ದೆಗಳ ಭರ್ತಿ: ಕಲ್ಯಾಣ ಕರ್ನಾಟಕಕ್ಕೆ 7,000 ಹುದ್ದೆ ಮೀಸಲು!
ಬೀದರ್: ರಾಜ್ಯದಲ್ಲಿ ಶಿಕ್ಷಕರ ಮೇಲಿನ ಕೆಲಸದ ಒತ್ತಡ ಕಡಿಮೆ ಮಾಡುವುದರ ಜೊತೆಗೆ, ಗುಣಮಟ್ಟದ ಶಿಕ್ಷಣ ಒದಗಿಸುವ ಉದ್ದೇಶದಿಂದ 17 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿದೆ. ಈ ಪೈಕಿ ಕಲ್ಯಾಣ ಕರ್ನಾಟಕ ಭಾಗದಲ್ಲಿ 7 ಸಾವಿರ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.
ಬೀದರ್‌ನಲ್ಲಿ ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಪರವಾಗಿ ಪ್ರಚಾರ ನಡೆಸಿದ ಅವರು, ಶಿಕ್ಷಕರ ಹಕ್ಕುಗಳು, ಹಿತಾಸಕ್ತಿ ಮತ್ತು ಶಿಕ್ಷಣ ಕ್ಷೇತ್ರದ ಅಭಿವೃದ್ಧಿ ಕುರಿತು ಮಹತ್ವದ ಮಾಹಿತಿಯನ್ನ ನೀಡಿದ್ದಾರೆ.

ಹೆಚ್ಚುವರಿಯಾಗಿ 5 ಸಾವಿರ ಶಿಕ್ಷಕರ ನೇಮಕಕ್ಕೆ ಮನವಿ
ರಾಜ್ಯದಲ್ಲಿ ಶಿಕ್ಷಕರ ಕೊರತೆ ನೀಗಿಸಲು ಹಾಗೂ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಸರ್ಕಾರ ಕ್ರಮ ಕೈಗೊಂಡಿದೆ. ಈಗಾಗಲೇ 17 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭವಾಗಿದ್ದು, ಕಲ್ಯಾಣ ಕರ್ನಾಟಕ ಭಾಗಕ್ಕೆ 7 ಸಾವಿರ ಹುದ್ದೆಗಳನ್ನು ಮೀಸಲಿಟ್ಟು ಭರ್ತಿ ಮಾಡಲಾಗುತ್ತಿದೆ ಎಂದು ಈಶ್ವರ್ ಖಂಡ್ರೆ ಹೇಳಿದರು.
ಇದಲ್ಲದೆ, ರಾಜ್ಯದಲ್ಲಿ ಶಿಕ್ಷಕರ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ಹೆಚ್ಚುವರಿಯಾಗಿ 5 ಸಾವಿರ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವಂತೆ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿರುವುದಾಗಿ ತಿಳಿಸಿದರು. ಶಿಕ್ಷಕರ ಸಂಖ್ಯೆ ಹೆಚ್ಚಳವಾಗುವುದರಿಂದ ಶಾಲೆಗಳಲ್ಲಿ ಬೋಧನಾ ಕಾರ್ಯ ಸುಗಮವಾಗುವುದರ ಜೊತೆಗೆ, ಶಿಕ್ಷಕರ ಮೇಲಿನ ಕೆಲಸದ ಒತ್ತಡ ಕಡಿಮೆಯಾಗಿ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡಲು ನೆರವಾಗಲಿದೆ ಎಂಬ ಆಶಯವನ್ನು ಅವರು ವ್ಯಕ್ತಪಡಿಸಿದರು.
ಕಲ್ಯಾಣ ಕರ್ನಾಟಕಕ್ಕೆ 371(ಜೆ) ವಿಶೇಷ ಸ್ಥಾನಮಾನ
ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿ ಹಾಗೂ ಅಲ್ಲಿನ ಜನರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ವಿಶೇಷ ಅವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ಸಂವಿಧಾನದ 371(ಜೆ) ವಿಧಿಗೆ ತಿದ್ದುಪಡಿ ತರಲಾಗಿದೆ ಎಂದು ಖಂಡ್ರೆ ಹೇಳಿದರು. ಈ ವಿಶೇಷ ಸ್ಥಾನಮಾನದಿಂದ ಕಲ್ಯಾಣ ಕರ್ನಾಟಕದ ಜನರಿಗೆ ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ಸೇರಿದಂತೆ ಹಲವು ಅವಕಾಶಗಳು ದೊರೆಯುತ್ತಿವೆ ಎಂದು ತಿಳಿಸಿದರು.
ಶಿಕ್ಷಕರ ಹಿತ ಕಾಯಲು ಕಾಂಗ್ರೆಸ್ ಬದ್ಧ
ಸ್ವಾತಂತ್ರ್ಯಾನಂತರ ಶಿಕ್ಷಕರಿಗೆ ಗೌರವ ಮತ್ತು ಸ್ಥಾನಮಾನ ಕಲ್ಪಿಸುವಲ್ಲಿ ಕಾಂಗ್ರೆಸ್ ಸರ್ಕಾರ ಮಹತ್ವದ ಪಾತ್ರ ವಹಿಸಿದೆ. ಶಿಕ್ಷಕರ ಹಕ್ಕುಗಳು ಮತ್ತು ಹಿತಾಸಕ್ತಿಗಳನ್ನು ಕಾಪಾಡಲು ಪಕ್ಷ ನಿರಂತರವಾಗಿ ಶ್ರಮಿಸುತ್ತಿದೆ ಎಂದು ಸಚಿವರು ಹೇಳಿದರು.
ಶ್ರೇಷ್ಠ ಶಿಕ್ಷಕ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರು ದೇಶದ ರಾಷ್ಟ್ರಪತಿಯಾಗುವ ಮೂಲಕ ಶಿಕ್ಷಕ ವೃತ್ತಿಯ ಘನತೆ ಹೆಚ್ಚಿಸಿದರು ಎಂದು ಉಲ್ಲೇಖಿಸಿದ ಖಂಡ್ರೆ, ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿ ಮತ್ತು ಶಿಕ್ಷಣದ ಗುಣಮಟ್ಟ ಸುಧಾರಣೆಗೆ ಕಾಂಗ್ರೆಸ್ ಶ್ರಮಿಸುತ್ತಿದೆ ಎಂದರು.
Teacher Recruitment: ಶರಣಪ್ಪ ಮಟ್ಟೂರು ಪರ ಮತಯಾಚನೆ
ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡುವಂತೆ ಶಿಕ್ಷಕರಲ್ಲಿ ಈಶ್ವರ ಖಂಡ್ರೆ ಮನವಿ ಮಾಡಿದರು. ಈ ಹಿಂದೆ ವಿಧಾನ ಪರಿಷತ್ತಿನಲ್ಲಿ ಶಿಕ್ಷಕರ ಪರವಾಗಿ ಧ್ವನಿ ಎತ್ತಿರುವ ಶರಣಪ್ಪ ಮಟ್ಟೂರು ಅವರು, ಮುಂದೆಯೂ ಶಿಕ್ಷಕರ ನ್ಯಾಯಸಮ್ಮತ ಬೇಡಿಕೆಗಳಿಗೆ ಸ್ಪಂದಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ರಹೀಂ ಖಾನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಮನ್ನಾನ್ ಸೇಠ್, ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಬಸವರಾಜ್ ಜಾಬಶೆಟ್ಟಿ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.


Click it and Unblock the Notifications
