ಶಿಕ್ಷಕರಿಗೆ ಸಿಹಿಸುದ್ದಿ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಧೀರ್ಘಾವದಿಯಿಂದ ನೆನೆಗುದಿಯಲ್ಲಿದ್ದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರ ಸಿಹಿಸುದ್ದಿ ನೀಡಿದೆ.
ಬೆಂಗಳೂರು, ಮಾರ್ಚ್ 20; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದ ಶಿಕ್ಷಕ ಸಮುದಾಯಕ್ಕೆ ಸಿಹಿಸುದ್ದಿಯನ್ನು ನೀಡಿದ್ದಾರೆ. ರಾಜ್ಯದಲ್ಲಿ ಚುನಾವಣಾ ದಿನಾಂಕ ಘೋಷಣೆಗೆ ಕೆಲವೇ ದಿನಗಳು ಬಾಕಿ ಇದ್ದರೂ ಚುನಾವಣಾ ಆಯೋಗದ ಅನುಮತಿ ಪಡೆದು ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯನ್ನು ಕೈಗೊಳ್ಳುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ. ಧೀರ್ಘಾವದಿಯಿಂದ ನೆನೆಗುದಿಯಲ್ಲಿದ್ದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ. ಎಸ್. ಷಡಾಕ್ಷರಿ ಹಾಗೂ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷರಾದ ಸಿದ್ದಬಸಪ್ಪ ಹಾಗೂ ಸಂಘದ ಪದಾಧಿಕಾರಿಗಳು ಮತ್ತು ಶಿಕ್ಷಕರು ನಿಕಟಪೂರ್ವ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಮ್ಮುಖದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯನ್ನು ಭೇಟಿ ಮಾಡಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಕುರಿತು ಚರ್ಚಿಸಿದ್ದರು.

ಈಗಾಗಲೇ ವರ್ಗಾವಣೆಗಾಗಿ ಈಗಾಗಲೇ 79 ಸಾವಿರಕ್ಕೂ ಹೆಚ್ಚು ಶಿಕ್ಷಕರು ಅರ್ಜಿ ಸಲ್ಲಿಸಿರುತ್ತಾರೆ. ಹೆಚ್ಚುವರಿ ಶಿಕ್ಷಕರ ವರ್ಗಾವಣೆಯನ್ನು ಆಯಾ ತಾಲ್ಲೂಕಿನ ಒಳಗಡೆ ವರ್ಗಾವಣೆ ಮಾಡುವುದು. ದೀರ್ಘಕಾಲದಿಂದ ನೆನೆಗುದಿಯಲ್ಲಿರುವ ಶಿಕ್ಷಕರ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆಯನ್ನು ಶೀಘ್ರವಾಗಿ ಕೈಗೊಳ್ಳುವಂತೆ ಬಸವರಾಜ ಬೊಮ್ಮಾಯಿಗೆ ಮನವಿ ಮಾಡಲಾಯಿತು. ಶಿಕ್ಷಕರ ಸಮಸ್ಯೆ ಹಾಗೂ ಸಂಘದ ಮನವಿಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು ಈಗಾಗಲೇ ಯಾವುದೇ ವರ್ಗಾವಣೆಗಳನ್ನು ಮಾಡಬೇಕಾಗಿದ್ದಲ್ಲಿ ರಾಜ್ಯ ಚುನಾವಣಾ ಆಯೋಗದ ಅನುಮತಿಯನ್ನು ಪಡೆಯುವಂತೆ ಸುತ್ತೋಲೆಯನ್ನು ಹೊರಡಿಸಿರುವುದರಿಂದ ರಾಜ್ಯ ಚುನಾವಣಾ ಆಯೋಗದ ಅನುಮತಿಯನ್ನು ಪಡೆದುಕೊಂಡು ಶಿಕ್ಷಕರ ವರ್ಗಾವಣೆ ಕಡತಕ್ಕೆ ಅನುಮೋದನೆ ನೀಡಿ ವರ್ಗಾವಣೆ ಪ್ರಕ್ರಿಯೆಗಳನ್ನು ಆರಂಭಿಸಲು ನಿರ್ದೇಶನ ನೀಡುವ ಭರವಸೆ ಕೊಟ್ಟಿದ್ದಾರೆ.
ಚುನಾವಣಾ ಆಯೋಗ ಒಪ್ಪಿಗೆ ನೀಡಿದಲ್ಲಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯನ್ನು ಶೀಘ್ರದಲ್ಲಿಯೇ ಆರಂಭಿಸಲಾಗುತ್ತದೆ. ತಾಲೂಕಿನ ಒಳಗೆ ಹೆಚ್ಚುವರಿ ಶಿಕ್ಷಕರ ವರ್ಗಾವಣೆಯಿಂದ ಚುನಾವಣಾ ಆಯೋಗಕ್ಕೆ ಸಹ ಚುನಾವಣಾ ಕಾರ್ಯಕ್ಕೆ ಯಾವುದೇ ಅಡ್ಡಿ ಉಂಟಾಗುವುದಿಲ್ಲ ಎಂದು ನಿರೀಕ್ಷಿಸಲಾಗಿದೆ. ಕೇಂದ್ರ ಚುನಾವಣಾ ಆಯೋಗ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ ಮಾಡಿ, ಚುನಾವಣಾ ನೀತಿ ಸಂಹಿತೆ ಜಾರಿಗೆ ಬರುವ ಮೊದಲೇ ವರ್ಗಾವಣೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ತೀರ್ಮಾನಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಭರವಸೆ ವರ್ಗಾವಣೆ ನಿರೀಕ್ಷಣೆಯಲ್ಲಿದ್ದ ಶಿಕ್ಷಕರಲ್ಲಿ ಸಂತಸವನ್ನು ಮೂಡಿಸಿದೆ, ರಾಜ್ಯ ಸರ್ಕಾರಿ ನೌಕರರ ಸಂಘವು ಮುಖ್ಯಮಂತ್ರಿಗಳ ನಿರ್ಧಾರಕ್ಕೆ ಸಂತಸ ವ್ಯಕ್ತಪಡಿಸಿದೆ.

ವಿಳಂಬವಾಗಲಿದೆ; ಒಂದು ವೇಳೆ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗಿ ಚುನಾವಣೆ ನೀತಿ ಸಂಹಿತೆ ಜಾರಿಯಾದಲ್ಲಿ ಮೇ ಮಧ್ಯಭಾಗದವರೆಗೆ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ವಿಳಂಬವಾಗಲಿದೆ. ಹೊಸ ಸರ್ಕಾರ ರಚನೆ ಪ್ರಕ್ರಿಯೆ ಕಾರಣ ವರ್ಗಾವಣೆ ಪ್ರಕ್ರಿಯೆಗೆ ತಕ್ಷಣ ಒಪ್ಪಿಗೆ ಸಿಗುವುದು ಕಷ್ಟವಾಗಲಿದೆ. ಆಗ ನೂತನ ಶೈಕ್ಷಣಿಕ ವರ್ಷ ಪ್ರಾರಂಭವಾದಲ್ಲಿ ವರ್ಗಾವಣೆ ಪ್ರಕ್ರಿಯೆ ಮತ್ತಷ್ಟು ವಿಳಂಬವಾಗುತ್ತದೆ. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ಅನುಮತಿ ಪಡೆದು ತಕ್ಷಣವೇ ಶಿಕ್ಷಕರ ವರ್ಗಾವಣೆ ನಡೆಸಲು ಸರ್ಕಾರಿ ನೌಕರರ ಸಂಘ, ಶಿಕ್ಷಕರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದರು.
ಚುನಾವಣಾ ಕಾರ್ಯಗಳು, ಸಿಬ್ಬಂದಿಗಳ ತರಬೇತಿ ಹಿನ್ನಲೆಯಲ್ಲಿ ಚುನಾವಣಾ ಆಯೋಗ ವಿವಿಧ ಇಲಾಖೆಗಳ ಅಧಿಕಾರಿಗಳ ವರ್ಗಾವಣೆಗೆ ತಡೆ ಹಾಕಿತ್ತು. ಈ ಕುರಿತು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರವನ್ನು ಸಹ ಬರೆಯಲಾಗಿತ್ತು. 2023ರ ಸಾರ್ವತ್ರಿಕ ಕರ್ನಾಟಕ ವಿಧಾನಸಭಾ ಚುನಾವಣಿಯು ಸನ್ನಿಹಿತವಾಗುತ್ತಿದ್ದು, ಭಾರತ ಚುನಾವಣಾ ಆಯೋಗವು ಸದ್ಯದಲ್ಲಿಯೇ ಮಾದರಿ ನೀತಿ ಸಂಹಿತೆಯನ್ನು ಜಾರಿಗೊಳಿಸಲಿದ್ದು, ಚುನಾವಣಾ ಕರ್ತವ್ಯ ನಿರತರಾದ ಅಧಿಕಾರಿ/ ಸಿಬ್ಬಂದಿಗಳನ್ನು ಮುಖ್ಯ ಚುನಾವಣಾಧಿಕಾರಿಗಳ ಸಹಮತಿ ಪಡೆಯದೇ ವರ್ಗಾವಣೆ ಮಾಡುತ್ತಿರುವುದು ಕಂಡು ಬಂದಿರುತ್ತದೆ ಎಂದು ಪತ್ರದಲ್ಲಿ ಹೇಳಿತ್ತು.
ಅಲ್ಲದೇ ಎಲ್ಲಾ ರೀತಿಯ ವರ್ಗಾವಣೆ ಪ್ರಕ್ರಿಯೆ ಕೈಗೊಳ್ಳುವ ಪೂರ್ವದಲ್ಲಿ ಮುಖ್ಯ ಚುನಾವಣಾಧಿಕಾರಿಯವರ ಸಹಮತಿ ಪಡೆದು, ನಂತರ ವರ್ಗಾವಣೆ ಆದೇಶಗಳನ್ನು ಹೊರಡಿಸುವಂತೆ ಎಲ್ಲಾ ಸಕ್ಷಮ ಪ್ರಾಧಿಕಾರಗಳಿಗೆ ಇಂದೇ ಸೂಕ್ತ ನಿರ್ದೇಶನ ನೀಡಬೇಕು ಎಂದು ಪತ್ರದಲ್ಲಿ ಸೂಚಿಸಲಾಗಿತ್ತು. ಇನ್ನು ಮುಂದೆ ಕಛೇರಿ ಸಹಮತಿ ಪಡೆಯದೇ ವರ್ಗಾವಣೆ ಪ್ರಕ್ರಿಯೆ ಕೈಗೊಂಡಲ್ಲಿ ಅಂತಹ ಅಂಶಗಳನ್ನು ಭಾರತ ಚುನಾವಣಾ ಆಯೋಗದ ಗಮನಕ್ಕೆ ತರಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪತ್ರದಲ್ಲಿ ವಿವರಣೆ ನೀಡಲಾಗಿತ್ತು.












Click it and Unblock the Notifications