D.K.Shivakumar: ಡಿ.ಕೆ.ಶಿವಕುಮಾರ್‌ಗೆ ಸುಪ್ರೀಂ ಕೋರ್ಟ್‌ನಿಂದ ಬಿಗ್ ರಿಲೀಫ್-ಯಾವ ಕೇಸ್‌ನಲ್ಲಿ?
D.K.Shivakumar: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ ತಾತ್ಕಾಲಿಕ ರಿಲೀಫ್ ನೀಡಿದೆ. ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಪ್ರಕರಣದ ತನಿಖೆಗೆ ಸಿಬಿಐ ಹಾಕಿದ್ದ ಅರ್ಜಿ ವಿಚಾರಣೆಯನ್ನು ಕೋರ್ಟ್ ಇಂದು (ನವೆಂಬರ್ 4) ನಾಲ್ಕು ವಾರಗಳ ಕಾಲ ಮುಂದೂಡಿಕೆ ಮಾಡಿದೆ. ಈ ಮೂಲಕ ಉಪ ಚುನಾವಣೆ ಪ್ರಚಾರದಲ್ಲಿರುವ ಅವರಿಗೆ ಸ್ವಲ್ಪ ಮಟ್ಟಿಗೆ ನಿರಾಳ ಆದಂತಾಗಿದೆ.
ಕರ್ನಾಟಕ ಹೈಕೋರ್ಟ್ ಆದೇಶದ ವಿರುದ್ಧ ಸಿಬಿಐ ಮೇಲ್ಮನವಿ ಸಲ್ಲಿಸಿದೆ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹೇಳಿದ ನಂತರ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು ಪ್ರಕರಣವನ್ನು ಮುಂದೂಡಿಕೆ ಮಾಡಿದೆ.

ಸಿಬಿಐ ತನಿಖೆಗೆ ನೀಡಿದ ಅನುಮತಿಯನ್ನು ಹಿಂಪಡೆಯುವ ವಿರುದ್ಧ ಅರ್ಜಿಯನ್ನು ತಿರಸ್ಕರಿಸಿ ಕರ್ನಾಟಕ ಹೈಕೋರ್ಟ್ ಆಗಸ್ಟ್ 29ರಂದು ಆದೇಶ ನೀಡಿತ್ತು. ಇದರ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯಾತ್ನಾಳ್ ಸಲ್ಲಿಸಿರುವ ಅರ್ಜಿಯನ್ನು ಸಹ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.
ಸಿಬಿಐ ಮೇಲ್ಮನವಿಯನ್ನು ಇನ್ನೂ ವಿಚಾರಣೆಗೆ ಪಟ್ಟಿ ಮಾಡಿಲ್ಲ ಎಂದು ಮೆಹ್ತಾ ನ್ಯಾಯಾಪೀಠಕ್ಕೆ ತಿಳಿಸಿದರು. ಆದರೆ, ಡಿಸಿಎಂ ಡಿ.ಕೆ.ಶಿವಕುಮಾರ್ ಪರ ವಾದ ಮಾಡಿದ ಹಿರಿಯ ವಕೀಲ ರಂಜಿತ್ ಕುಮಾರ್, ಈ ವಿಷಯದಲ್ಲಿ ಉತ್ತರವನ್ನು ಸಲ್ಲಿಸಲು ಸಮಯ ಕೋರಿದರು. ಡಿ.ಕೆ.ಶಿವಕುಮಾರ್ ಮತ್ತು ರಾಜ್ಯ ಸರ್ಕಾರದ ಮನವಿ ಮೇರೆಗೆ ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 17ರಂದು ನೋಟಿಸ್ ಜಾರಿ ಮಾಡಿತ್ತು.
ಡಿ.ಕೆ.ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಪ್ರಕರಣದ ತನಿಖೆಗೆ ಏಜೆನ್ಸಿಗೆ ಒಪ್ಪಿಗೆಯನ್ನು ಹಿಂತೆಗೆದುಕೊಳ್ಳುವ ಕರ್ನಾಟಕ ಕಾಂಗ್ರೆಸ್ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಿಬಿಐ ಸಲ್ಸಿಸಿದ ಅರ್ಜಿಯನ್ನು ಆಗಸ್ಟ್ 29ರಂದು ಹೈಕೋರ್ಟ್ ವಜಾಗೊಳಿಸಿತ್ತು. 74.93 ಕೋಟಿ ರೂಪಾಯಿ ಅಕ್ರಮ ಆಸ್ತಿ ಸಂಪಾದನೆ ಪ್ರಕರಣವನ್ನು ಲೋಕಾಯುಕ್ತ ತನಿಖೆಗೆ ಉಲ್ಲೇಖಿಸಿ ರಾಜ್ಯ ಸರ್ಕಾರ ನವೆಂಬರ್ 23, 2023ರಂದು ನೀಡಿದ್ದ ಆದೇಶ ಪ್ರಶ್ನಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿತ್ತು
ಡಿ.ಕೆ.ಶಿವಕುಮಾರ್ ಅವರು 2013 ಮತ್ತು 2018ರ ನಡುವೆ ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿದ್ದಾಗ ಆದಾಯಕ್ಕೂ ಮೀರಿ ಆಸ್ತಿಯನ್ನು ಗಳಿಸಿದ್ದಾರೆಂದು ಸಿಬಿಐ ಆರೋಪಿಸಿದೆ. ಬಿಜೆಪಿ ಅಧಿಕಾರಕ್ಕೆ ಬಂದಾಗ ಶಿವಕುಮಾರ್ ವಿರುದ್ಧ ಕಾನೂನು ಕ್ರಮ ಜರುಗಿಸಲು ಸಿಬಿಐಗೆ ಸರ್ಕಾರ ಅನುಮತಿ ನೀಡಿತ್ತು. ಸಿದ್ದರಾಮಯ್ಯ ನೇತೃತ್ವದ ಪ್ರಸ್ತುತದ ಸರ್ಕಾರ, ನವೆಂಬರ್ 23, 2023ರಂದು, ಶಿವಕುಮಾರ್ ವಿರುದ್ಧದ ಪ್ರಕರಣದ ತನಿಖೆಗೆ ಸಿಬಿಐಗೆ ನೀಡಿದ್ದ ಅನುಮತಿಯನ್ನು ಅಕ್ರಮವೆಂದು ಪರಿಗಣಿಸಿ ಅದನ್ನು ಹಿಂಪಡೆಯಲು ನಿರ್ಧರಿಸಿತು.












Click it and Unblock the Notifications