ಸಿದ್ದರಾಮಯ್ಯ ಅವರ ಕಾಲ ಗುಣದಲ್ಲಿ ಮಳೆ ಆಗಲ್ಲ ಎನ್ನುವವರಿಗೆ ಟಾಂಗ್ ಕೊಟ್ಟ ಸಿಎಂ
ರಾಮನಗರ, ಜುಲೈ 24: ಪ್ರಕೃತಿ ನಮ್ಮ ಪರವಾಗಿದೆ. ಆದ್ದರಿಂದ ರಾಜ್ಯದಲ್ಲಿ ಮಳೆ ಚೆನ್ನಾಗಿದೆ. ನನ್ನ ಕಾಲ ಗುಣದಿಂದಲೇ ಉತ್ತಮ ಮಳೆ ಆಗ್ತಿದೆ ಎಂದು ಹೇಳುವುದಿಲ್ಲ. ಇಂಥಾ ಮೌಡ್ಯದಲ್ಲಿ ನನಗೆ ನಂಬಿಕೆ ಇಲ್ಲ ಎಂದ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಅವರ ಕಾಲ ಗುಣದಿಂದ ರಾಜ್ಯದಲ್ಲಿ ಮಳೆ ಆಗಲ್ಲ ಎನ್ನುವವರಿಗೆ ಟಾಂಗ್ (ಅಣಕಿಸಿದರು) ಕೊಟ್ಟರು.
ರಾಮನಗರದ ತಾಯಿ ಚಾಮುಂಡೇಶ್ವರಿ ಕರಗ ಉತ್ಸವದಲ್ಲಿ ಪಾಲ್ಗೊಂಡು ಮೊದಲಿಗೆ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ತಾಯಿ ಚಾಮುಂಡೇಶ್ವರಿ ಆಶೀರ್ವಾದದಿಂದ ರಾಜ್ಯದಲ್ಲಿ ಒಳ್ಳೆ ಮಳೆಯಾಗಿ ಜಲಾಶಯಗಳೆಲ್ಲಾ ಭರ್ತಿಯಾಗಿವೆ ಎಂದು ಹೇಳಿದರು. ರಾಮನಗರ ಜಿಲ್ಲೆಯ ಅಭಿವೃದ್ಧಿಗೆ ಅಗತ್ಯ ಅನುದಾನವನ್ನು ನೀಡಲು ನಾನು ಬದ್ದವಾಗಿದ್ದೇನೆ. ರಾಜ್ಯದ ಏಳೂವರೆ ಕೋಟಿ ಜನರ ಅಭಿವೃದ್ಧಿ ನನ್ನ ಗುರಿ ಎಂದರು.

15 ನೇ ಹಣಕಾಸು ಆಯೋಗದ ಶಿಫಾರಸಿನಂತೆ ಪೆರಿಫೆರಲ್ ರಸ್ತೆ ನಿರ್ಮಾಣ, ಕೆರೆಗಳ ಅಭಿವೃದ್ಧಿ, ಬೆಂಗಳೂರು ನಗರಾಭಿವೃದ್ಧಿ ಯೋಜನೆಗಳಿಗೆ ಒಟ್ಟು 11,485 ಕೋಟಿ ರೂ. ಅನುದಾನವನ್ನು ನೀಡುವಂತೆ ಕೋರಲಾಗಿತ್ತು. ಜೊತೆಗೆ ಹಲವಾರು ವರ್ಷಗಳಿಂದ ರಾಯಚೂರಿನಲ್ಲಿ ಏಮ್ಸ್ ಸ್ಥಾಪಿಸುವಂತೆ ಬೇಡಿಕೆಯಿದ್ದು, ಬಜೆಟ್ ಪೂರ್ವಭಾವಿ ಸಭೆಯಲ್ಲಿಯೂ ಈ ಕುರಿತು ಬೇಡಿಕೆ ಸಲ್ಲಿಸಲಾಗಿತ್ತು. ಈ ಯಾವ ಮನವಿಗಳಿಗೂ ಕೇಂದ್ರ ಸರ್ಕಾರ ಮನ್ನಣೆ ನೀಡಿಲ್ಲ.
ಈ ಹಿಂದಿನ ಬಜೆಟ್‌ನಲ್ಲಿ ರಾಜ್ಯಕ್ಕೆ ಘೋಷಿಸಿದ್ದ ಯೋಜನೆಗಳಿಗೇ ಕೇಂದ್ರ ಸರ್ಕಾರ ಇನ್ನೂ ಯಾವುದೇ ಅನುದಾನ ಒದಗಿಸಿಲ್ಲ. ಹೀಗಾಗಿ ಈ ಬಾರಿ ಕೈಗಾರಿಕಾ ಕಾರಿಡಾರ್ ಬಗ್ಗೆ ಪ್ರಸ್ತಾಪಿಸಿರುವುದು ಕೇವಲ ಘೋಷಣೆಯಾಗಿ ಮಾತ್ರ ಉಳಿಯಲಿದೆ ಎಂದರು.
ಈ ಬಜೆಟ್ ಜನವಿರೋಧಿಯಾಗಿದ್ದು, ವಿಶೇಷವಾಗಿ ಬಡವರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದೆ. ಈ ಬಜೆಟ್ ನಲ್ಲಿ ರೈತರಿಗೆ ದೊಡ್ಡ ಅನ್ಯಾಯ ಮಾಡಿದ್ದಾರೆ. ರೈತರು 5 ವರ್ಷಗಳಿಂದ ಕನಿಷ್ಠ ಬೆಂಬಲ ಬೆಲೆ ಕಾಯ್ದೆ ರಚಿಸಬೇಕೆಂದು ಒತ್ತಾಯ ಮಾಡುತ್ತಿದ್ದಾರೆ. ಆದರೆ ಈ ಬಗ್ಗೆ ಬಜೆಟ್ ನಲ್ಲಿ ಚಕಾರವನ್ನೇ ಎತ್ತಿಲ್ಲ. ಸ್ವಾಮಿನಾಥನ್ ಆಯೋಗದ ಶಿಫಾರಸ್ಸುಗಳ ಜಾರಿ ಬಗ್ಗೆಯೂ ಯಾವುದೇ ಮಾತು ಆಡದೆ ರೈತರಿಗೆ ಪಂಗನಾಮ ಹಾಕಿದೆ ಎಂದು ಹೇಳಿದರು.
ಕೇಂದ್ರ ಸಂಪುಟದಲ್ಲಿ ರಾಜ್ಯದ ಐದು ಜನ ಸಚಿವರಾಗಿದ್ದರೂ, ರಾಜ್ಯಕ್ಕೆ ಯಾವುದೇ ಪ್ರಯೋಜನವಾಗಿಲ್ಲ, ಈ ಐದೂ ಮಂದಿ ರಾಜ್ಯಕ್ಕೆ ಅನುಕೂಲ ಮಾಡಿಸುವಲ್ಲಿ ವಿಫಲರಾಗಿದ್ದಾರೆ. ಆರೋಗ್ಯ, ರಕ್ಷಣೆ, ಆರೋಗ್ಯ, ಐಟಿ ಮತ್ತು ಸಂವಹನ ಕ್ಷೇತ್ರಗಳಿಗೆ ಕಳೆದ ಫೆಬ್ರವರಿಯಲ್ಲಿ ಮಂಡಿಸಲಾಗಿದ್ದ ಮಧ್ಯಂತರ ಬಜೆಟ್‌ನಲ್ಲಿ ಘೋಷಿಸಿದ್ದ ಅನುದಾನವನ್ನು ಈಗ ಕಡಿತಗೊಳಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಅಲ್ಪಸಂಖ್ಯಾತ ಅಭಿವೃದ್ಧಿಗೆ ಅನುದಾನದಲ್ಲೂ ಗಣನೀಯವಾಗಿ ಕಡಿತಗೊಳಿಸಿರುವುದು ಈ ಸಮುದಾಯಗಳಿಗೆ ಎಸಗಿರುವ ದ್ರೋಹವಾಗಿದೆ ಎಂದರು.
ಕೇಂದ್ರದ 16 ನೇ ಹಣಕಾಸು ಆಯೋಗವು ಆಗಸ್ಟ್ 28 ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದು, ಈ ಸಂದರ್ಭದಲ್ಲಿ ಹಿಂದಿನ ಬಾರಿ ರಾಜ್ಯಕ್ಕೆ ಆಗಿರುವ ಅನ್ಯಾಯ ಸರಿಪಡಿಸುವಂತೆ ಮನವಿ ಮಾಡಲಾಗುವುದು. ಈ ಕುರಿತು ಸಮರ್ಥವಾಗಿ ವಿಷಯ ಮಂಡಿಸಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.












Click it and Unblock the Notifications