ಗ್ಯಾರಂಟಿ ಯೋಜನೆಗಳು ರದ್ದು ಎಂದ ವಿಪಕ್ಷಗಳಿಗೆ ತಿರುಗೇಟು ಕೊಟ್ಟ ಕೈ ಶಾಸಕ
ದಾವಣಗೆರೆ, ಜುಲೈ 01: ಐದು ಗ್ಯಾರಂಟಿಗಳನ್ನು ಸರ್ಕಾರ ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಮಹಿಳೆಯರು ಪ್ರತಿಪಕ್ಷಗಳು ಹಬ್ಬಿಸುವ ವದಂತಿಗಳಿಗೆ ಕಿವಿಗೊಡಬೇಡಿ. ನಮ್ಮ ಸರ್ಕಾರ ನುಡಿದಂತೆ ನಡೆದುಕೊಳ್ಳುತ್ತದೆ ಎಂದು ಶಾಸಕ ಕೆ.ಎಸ್.ಬಸವಂತಪ್ಪ ಭರವಸೆ ನೀಡಿದರು.
ತಾಲೂಕಿನ ಆನಗೋಡು ಗ್ರಾಮದಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಎರಡು ತಿಂಗಳು ಕಳೆಯಿತು, ಸರ್ಕಾರ ಇನ್ನೂ ಗೃಹಲಕ್ಷ್ಮಿ ಹಣವನ್ನು ಮಹಿಳಾ ಫಲಾನುಭವಿಗಳ ಖಾತೆಗೆ ಹಾಕಲಿಲ್ಲ. ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದುಕೊಳ್ಳದೇ ವಚನ ಭ್ರಷ್ಟ ಸರ್ಕಾರವಾಗಿದೆ ಎಂದು ಪ್ರತಿಪಕ್ಷಗಳು ಆರೋಪಿಸುತ್ತಿವೆ.

ಯಾವುದೇ ಕಾರಣಕ್ಕೂ ಗೃಹಲಕ್ಷ್ಮಿ ಯೋಜನೆ ರದ್ದುಗೊಳಿಸುವುದಿಲ್ಲ. ಕೆಲವು ತಾಂತ್ರಿಕ ತೊಂದರೆಯಿಂದ ವಿಳಂಬವಾಗಿರಬಹುದು. ಸರ್ಕಾರ ಜಾರಿಗೊಳಿಸಿದ ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ. ಇನ್ನೆರಡು, ಮೂರು ದಿನಗಳಲ್ಲಿ ಮಹಿಳಾ ಫಲಾನುಭವಿಗಳ ಖಾತೆಗೆ ಗೃಹಲಕ್ಷ್ಮಿ ಹಣ ಹಾಕುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಹೀಗಾಗಿ ಮಾತೆಯರು ಆತಂಕಕ್ಕೆ ಒಳಗಾಗುವುದು ಬೇಡ ಎಂದರು.
ಆದಾಯಕ್ಕಿಂತ ಹೆಚ್ಚು ಆರ್ಥಿಕಾಭಿವೃದ್ಧಿ ಹೊಂದಿ ಉದಾರತೆ, ಮಾನವೀಯ ಕಳಕಳಿ ಹೊಂದಿದಂತಹ ಮಾತೆಯರು ಯೋಜನೆ ಆರಂಭದಲ್ಲಿಯೇ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಸರ್ಕಾರಕ್ಕೆ ಹಿಂದಿರುಗಿಸಿದ್ದಾರೆ. ಅದೇ ರೀತಿ ಇನ್ನೂ ಕೂಡ ಆದಾಯಕ್ಕಿಂತ ಹೆಚ್ಚು ಆದಾಯ ಹೊಂದಿದ ಮಾತೆಯರು ಸರ್ಕಾರಕ್ಕೆ ಹಿಂದಿರುಗಿಸಿದರೆ, ಬಡ ಮಹಿಳೆಯರಿಗೆ ಸಹಾಯವಾಗಲಿದೆ. ಇದು, ಒತ್ತಾಯವಲ್ಲ ಅಥವಾ ಅಧಿಕಾರಿಗಳು ಮನೆಗೆ ಹೋಗಿ ಇಸಿದುಕೊಂಡು ಬನ್ನಿ ಅಂತಹ ಹೇಳುವುದಿಲ್ಲ. ಉದಾರತೆ, ಮಾನವೀಯತೆ ಹೊಂದಿರುವ ಮಾತೆಯರು, ಸ್ವಹಿಚ್ಛೆಯಿಂದ ಗೃಹಲಕ್ಷ್ಮಿ ಹಣವನ್ನು ಸರ್ಕಾರಕ್ಕೆ ಹಿಂದಿರುಗಿಸಬಹುದು ಎಂದು ಮನವಿ ಮಾಡಿದರು.
ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ಗ್ರಾಮಗಳಲ್ಲಿ ಇರುವ ಸರ್ಕಾರಿ ಜಮೀನು ಗುರುತಿಸಿದರೆ, ವಸತಿ ರಹಿತರಿಗೆ ವಸತಿ ಸೌಲಭ್ಯ ಕಲ್ಪಿಸಲು ಅನುಕೂಲವಾಗುತ್ತದೆ. ಈ ನಿಟ್ಟಿನಲ್ಲಿ ಎಲ್ಲೆಲ್ಲಿ ಜಾಗ ಇದೆ, ಅವುಗಳನ್ನು ಗುರುತಿಸುವಂತೆ ಈಗಾಗಲೇ ತಹಸೀಲ್ದಾರ್ ಗೆ ಸೂಚನೆ ನೀಡಲಾಗಿದೆ. ಅಲ್ಲದೇ ಬಗರ್ ಹುಕುಂ ಸಾಗುವಳಿದಾರರಿಗೆ ಸಾಗುವಳಿ ಚೀಟಿ ನೀಡಲಾಗಿದೆ. ಆದರೆ ಆರ್ಥಿಕವಾಗಿ ಸಬಲರಾಗಿರುವಂತವರು ಹೆಚ್ಚು ಭೂಮಿ ಹೊಂದಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿವೆ. ತಹಸೀಲ್ದಾರ್ ಸಾಗುವಳಿ ಪಡೆದವರಲ್ಲಿ ಯಾರು ಹೆಚ್ಚಿನ ಭೂಮಿ ಹೊಂದಿದ್ದಾರೆ, ಅಂತಹವರನ್ನು ಪತ್ತೆ ಹಚ್ಚಿ ಭೂಮಿ ಇಲ್ಲದ ಬಡವನಿಗೆ ಭೂಮಿಯ ಹಕ್ಕು ನೀಡುವ ಕೆಲಸ ಮಾಡಬೇಕು ಎಂದು ತಹಸೀಲ್ದಾರ್ ಗೆ ಸೂಚಿಸಿದರು.
ಆನಗೋಡು ಗ್ರಾಮದಲ್ಲಿ ಲಿಡ್ಕರ್ ವಸತಿ ನಿರ್ಮಾಣಕ್ಕೆ ಮೀಸಲಿಟ್ಟಿರುವ ಜಾಗ ಕೆಲವು ತಾಂತ್ರಿಕ ತೊಂದರೆಯಿಂದ ವಸತಿ ನಿರ್ಮಿಸಲು ಆಗಿಲ್ಲ. ಕೂಡಲೇ ಜಿಲ್ಲಾಧಿಕಾರಿಗಳು, ಉಪ ವಿಭಾಗಾಧಿಕಾರಿಗಳು ಹಾಗೂ ತಹಸೀಲ್ದಾರ್ ಅವರೊಂದಿಗೆ ಚರ್ಚಿಸಿ ಲಿಡ್ಕರ್ ವಸತಿಗಳನ್ನು ನಿರ್ಮಾಣ ಮಾಡಲು ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು. ಜನರ ಮನೆ ಬಾಗಿಲಿಗೆ ಸರ್ಕಾರದ ಯೋಜನೆಗಳನ್ನು ತಲುಪಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಿದ್ದು, ಸಾರ್ವಜನಿಕರಿಂದ ದೂರುಗಳು ಬಾರದಂತೆ ಅಧಿಕಾರಿಗಳು ಅರ್ಹ ಫಲಾನುಭವಿಗಳನ್ನು ಗುರುತಿಸಿ ಸೌಲಭ್ಯ ಒದಗಿಸುವ ಕೆಲಸ ಮಾಡಬೇಕೆಂದು ಸೂಚನೆ ನೀಡಿದರು.
ಕಾರ್ಯಕ್ರಮ ತರಾತೂರಿ ಮಾಡಿರುವುದರಿಂದ ಜನರಿಗೆ ಅನಾನುಕೂಲವಾಗಿದೆ. ಮುಂದೆ ರೀತಿ ಆಗದಂತೆ ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮ ಆಯೋಜಿಸಿ ಜನರಿಗೆ ಸರ್ಕಾರದ ಸೌಲಭ್ಯ ಕಲ್ಪಿಸುವ ಕೆಲಸ ಅಧಿಕಾರಿಗಳು ಮಾಡಬೇಕೆಂದರು. ಕೆಲವು ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಿದರೆ, ಇನ್ನು ಕೆಲವು ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸದೆ ಅಸಡ್ಡೆಯಿಂದ ಕೆಲಸ ಮಾಡುವ ಬಗ್ಗೆ ದೂರುಗಳು ಬರುತ್ತಿವೆ. ಅಂತಹ ಅಧಿಕಾರಿಗಳಿಗೆ ಇಲ್ಲಿ ಜಾಗವಿಲ್ಲ. ನಿಷ್ಠೆಯಿಂದ ಕೆಲಸ ಮಾಡುವುದಾದರೆ ಇಲ್ಲಿ ಇರಬಹುದು, ಇಲ್ಲದಿದ್ದರೆ ಬೇರೆಡೆ ಹೋಗಬಹುದು ಎಂದು ಎಚ್ಚರಿಕೆ ನೀಡಿದರು.
ವಿಧವೆ ವೇತನ, ಗೃಹಲಕ್ಷ್ಮಿ ಹಣ ಸೇರಿದಂತೆ ವಿವಿಧ ಸೌಲಭ್ಯಗಳ ಹಣವನ್ನು ಬ್ಯಾಂಕ್ ಅಧಿಕಾರಿಗಳು ಸಾಲಕ್ಕೆ ಜಮಾ ಮಾಡಿಕೊಳ್ಳುತ್ತಿದ್ದು, ಯಾವುದೇ ಕಾರಣಕ್ಕೂ ಫಲಾನುಭವಿಗಳ ಹಣ ಸಾಲಕ್ಕೆ ಜಮಾ ಮಾಡಿಕೊಳ್ಳಬಾರದು ಎಂದು ಬ್ಯಾಂಕ್ ವ್ಯವಸ್ಥಾಪಕರಿಗೆ ಸೂಚನೆ ನೀಡಿದರು.
ಕ್ಷೇತ್ರದ ವ್ಯಾಪ್ತಿಯಲ್ಲಿ ನಕಾಸೆ ದಾರಿ ಒತ್ತುವರಿ ಪ್ರಕರಣಗಳು ಸಾಕಷ್ಟು ಬರುತ್ತಿವೆ. ಕೂಡಲೇ ನಕಾಸೆ ದಾರಿ ಒತ್ತುವರಿ ತೆರವುಗೊಳಿಸಿ ನಕಾಸೆ ದಾರಿ ಒತ್ತುವರಿ ಮುಕ್ತ ಕ್ಷೇತ್ರ ಮಾಡಬೇಕೆಂದು ನಿರ್ಧಾರ ಮಾಡಲಾಗಿದೆ. ಈ ನಿಟ್ಟಿನಲ್ಲಿ ತಹಸೀಲ್ದಾರ್, ಸಂಬಂಧಪಟ್ಟ ಅಧಿಕಾರಿಗಳು ತ್ವರಿತ ಕೆಲಸ ಮಾಡಬೇಕೆಂದು ಸೂಚನೆ ನೀಡಿದರು.












Click it and Unblock the Notifications