ಸಿಎಂ ಸಿದ್ದರಾಮಯ್ಯಗೆ ರಿಲೀಫ್, ಮುಡಾ ಕೇಸ್ ವಿಚಾರಣೆ ಮುಂದೂಡಿಕೆ
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ( ಮುಡಾ) ಬದಲಿ ನಿವೇಶನ ಹಂಚಿಕೆ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ತುಸು ನಿರಾಳವಾಗಿದೆ. ಈ ಕೇಸ್ ತನಿಖೆಯನ್ನು ಸಿಬಿಐಗೆ ವರ್ಗಾಯಿಸಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಡಿಸೆಂಬರ್ 10ಕ್ಕೆ ಮುಂದೂಡಿದೆ.
ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿದ್ದ ಮುಡಾ ಕೇಸ್ ಖುದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಸುತ್ತಿಕೊಂಡಿದೆ. ಇನ್ನು ರಾಜ್ಯಪಾಲರೇ ಈ ಕೇಸ್ ಸಂಬಂಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದು, ಹೈಕೋರ್ಟ್ ಕೂಡ ಈ ಕೇಸ್ ಸಂಬಂಧ ಲೋಕಾಯುಕ್ತಕ್ಕೆ ಮಹತ್ವದ ಸೂಚನೆ ನೀಡಿತ್ತು. ಇಂದು ಈ ಮುಡಾ ಕೇಸ್ ಸಂಬಂಧ ಲೋಕಾಯುಕ್ತ ಅಧಿಕಾರಿಗಳು ತನಿಖಾ ವರದಿಯನ್ನು ಹೈಕೋರ್ಟ್‌ಗೆ ಸಲ್ಲಿಕೆ ಮಾಡಲಿದ್ದಾರೆ ಎಂದು ಹೇಳಲಾಗಿತ್ತು.

ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಬದಲಿ ನಿವೇಶನ ಹಂಚಿಕೆ ಹಗರಣ ಕೇಸ್ ಸಂಬಂಧಿಸಿದಂತೆ ಇಂದು ಹೈಕೋರ್ಟ್‌ನಲ್ಲಿ ಮಹತ್ವದ ವಿಚಾರಣೆ ಕೂಡ ನಡೆಯಬೇಕಾಗಿತ್ತು. ಮುಡಾ ಕೇಸ್ ಅನ್ನು ಸಿಬಿಐ ತನಿಖೆಗೆ ನೀಡಬೇಕು ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮನವಿ ಮಾಡಿದ್ದರು. ಈ ಸಂಬಂಧ ಲೋಕಾಯುಕ್ತ ತನಿಖೆಗೆ ಹೈಕೋರ್ಟ್ ಸೂಚನೆ ನೀಡಿತ್ತು.
ಅದರಂತೆ ಪ್ರಕರಣದ ತನಿಖೆ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ಇಂದು ತನಿಖಾ ವರದಿಯನ್ನು ಹೈಕೋರ್ಟ್‌ಗೆ ಸಲ್ಲಿಕೆ ಮಾಡಲು ಸಿದ್ಧತೆ ನಡೆಸಿದ್ದರು. ಈ ಕೇಸ್ ಅನ್ನು ಸಿಬಿಐಗೆ ವರ್ಗಾಯಿಸುವ ಸಾಧ್ಯತೆಯೂ ಇದೆ ಎಂದು ಹೇಳಲಾಗಿತ್ತು. ಹೈಕೋರ್ಟ್ ಸೂಚನೆಯ ಮೇರೆಗೆ ಲೋಕಾಯುಕ್ತ ಅಧಿಕಾರಿಗಳು ಪ್ರಕರಣದ ಆರೋಪಿಗಳು ಎನ್ನಲಾದ ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಮಲ್ಲಿಕಾರ್ಜುನ ಸ್ವಾಮಿ, ದೇವರಾಜು ಅವರ ವಿಚಾರಣೆ ಈಗಾಗಲೇ ನಡೆಸಿದೆ.

ಮುಡಾ ಕೇಸ್ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮೈಸೂರು ಮುಡಾ ಕಚೇರಿ ಮೇಲೆ ದಾಳಿ ಮಾಡಿದ್ದರು. ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ನೀಡಿದ ದೂರಿನ ಮೇರೆಗೆ ಇಡಿ ಕೇಸ್ ದಾಖಲಿಸಿಕೊಂಡಿತ್ತು. ಕೇಸ್‌ನಲ್ಲಿ ನಾಲ್ಕನೇ ಆರೋಪಿ ಎನ್ನಲಾದ ದೇವರಾಜು ಮನೆ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದ್ದರು.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಅಕ್ರಮ ಸೈಟ್ ಹಂಚಿಕೆ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅವರ ಹೆಸರು ಪ್ರಮುಖವಾಗಿ ಕೇಳಿಬಂದಿದ್ದು, ಇದೇ ವಿಚಾರವಾಗಿ ಆರೋಪಿ ಸ್ಥಾನದಲ್ಲಿರುವ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ನಾಯಕರು ಆಗ್ರಹಿಸಿದ್ದರು. ಮುಡಾದಲ್ಲಿ ಅಕ್ರಮ ನಡೆದಿದೆ ಎಂದು ಸಿದ್ದರಾಮಯ್ಯ ವಿರುದ್ಧ ಸ್ನೇಹಮಯಿ ಕೃಷ್ಣ ಕೇಸ್ ದಾಖಲಿಸಿದ ಬೆನ್ನಲ್ಲೇ ಇಡಿ ಅಧಿಕಾರಿಗಳು ಮುಡಾ ಕಚೇರಿ ಮೇಲೆ ದಾಳಿ ನಡೆಸಿದ್ದರು.
ಅಲ್ಲದೆ ದಾಖಲಾದ ಎಫ್‌ಐಆರ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಎ1 ಆರೋಪಿ ಎಂದೇ ಉಲ್ಲೇಖಿಸಲಾಗಿತ್ತು. ಇವರ ಜೊತೆಗೆ ಸಿಎಂ ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಜಮೀನು ಮಾರಾಟ ಮಾಡಿದ್ದ ದೇವರಾಜು ಅವರ ಹೆಸರುಗಳು ಸಹ ಎಫ್‌ಐಆರ್‌ನಲ್ಲಿವೆ. ಮುಡಾ ಕೇಸ್ ಸಂಬಂಧ ಮಹತ್ವದ ವಿಚಾರಣೆ ಇಂದು ನಿಗದಿಯಾಗಿತ್ತು.
ಲೋಕಾಯುಕ್ತ ಅಧಿಕಾರಿಗಳು ಸಲ್ಲಿಸಲಿರುವ ತನಿಖಾ ಪ್ರಗತಿ ವರದಿ ಮೇರೆಗೆ ಸಿಎಂ ಸಿದ್ದರಾಮಯ್ಯ ಅವರ ಭವಿಷ್ಯ ನಿರ್ಧಾರವಾಗಲಿದ್ದು, ಮತ್ತೊಂದೆಡೆ ಸಿಬಿಐ ತನಿಖೆಗೂ ಈ ಕೇಸ್ ಅನ್ನು ಒಪ್ಪಿಸುವ ಸಾಧ್ಯತೆಯೂ ಇದೆ ಎಂದು ಹೇಳಲಾಗಿದೆ. ಸದ್ಯಕ್ಕೆ ವಿಚಾರಣೆ ಮುಂದೂಡಿರುವುದರಿಂದ ಸಿದ್ದರಾಮಯ್ಯ ರಿಲೀಫ್ ಆಗಿದ್ದಾರೆ.












Click it and Unblock the Notifications