ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್: ಏಕಾಕಾಲಕ್ಕೆ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ
ಬೆಂಗಳೂರು, ಅಕ್ಟೋಬರ್ 30: ವಾರದ ಮೊದಲ ದಿನ ಸೋಮವಾರ ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿಧ ಸರ್ಕಾರಿ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ.
ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪ ಮೇಲೆ ವಿವಿಧ ಇಲಾಖೆಗಳ ಅಧಿಕಾರಿಗಳ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ರಾಜ್ಯದ ಒಟ್ಟು 90 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಏಕಾಕಾಲಕ್ಕೆ ದಾಳಿ ಮಾಡಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಬೆಂಗಳೂರಿನ ಕೆ.ಆರ್.ಪುರಂ ಎಆರ್ಒಗೆ ಸೇರಿದ ಮೂರು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ. ಕಲಬುರಗಿಯಲ್ಲಿ ಎರಡು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ಬೀದರ ವಲಯ ಅರಣ್ಯಾಧಿಕಾರಿ ಹಾಗೂ ಕಬಿಜೆಎನ್‌ಎಲ್ ಅಧಿಕಾರಿಯ ಮನೆಗಳ ಮೇಲೆ ದಾಳಿಯಾಗಿದೆ.
ಹಿರಿಯೂರು: ಲೋಕಾಯುಕ್ತ ದಾಳಿಯಲ್ಲಿ ನಗದು ಚಿನ್ನಾಭರಣ ಪತ್ತೆ
ಹಿರಿಯೂರು ನಗರದ ಎಸಿಎಫ್ ನಾಗೇಂದ್ರ ನಾಯ್ಕ್ ಮನೆಯ ಮೇಲೆ ಲೋಕಾಯುಕ್ತರು ದಾಳಿ ನಡೆಸಿದ್ದು, ದಾಳಿಯಲ್ಲಿ ಅಪಾರ ಪ್ರಮಾಣದ ಚಿನ್ನ, ಬೆಳ್ಳಿ ಹಾಗೂ ನಗದು ಪತ್ತೆಯಾಗಿದೆ. ಸುಮಾರು 400ಗ್ರಾಂ ಚಿನ್ನ, ಬೆಳ್ಳಿ ಆಭರಣಗಳು ಸೇರಿದಂತೆ ಒಂದೂವರೆ ಲಕ್ಷ ನಗದು ಹಣ ಪತ್ತೆಯಾಗಿದ್ದು, ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಎಸಿಎಫ್ ನಾಗೇಂದ್ರ ನಾಯ್ಕ್ ಮನೆಯಲ್ಲಿ ಲೋಕಾಯುಕ್ತರು ಪರಿಶೀಲನೆ ಮುಂದುವರೆಸಿದ್ದಾರೆ.
ಹಾಸನ: ಕೆಪಿಟಿಸಿಎಲ್ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
ಹಾಸನದ ಕೆಪಿಟಿಸಿಎಲ್ ಜೂನಿಯರ್ ಇಂಜಿನಿಯರ್ ನಾರಾಯಣ ನಿವಾಸ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಹಾಸನ ಹೊರವಲಯದ ಬೊಮ್ಮನಾಯಕನಹಳ್ಳಿರುವ ನಾರಾಯಣ ನಿವಾಸ ಹಾಗೂ ಗೊರೂರಿನಲ್ಲಿರುವ ಕಚೇರಿ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತರು ದಾಖಲೆ ಪರಿಶೀಲನೆ ಮುಂದುವರಿಸಿದ್ದಾರೆ. ಲೋಕಾಯುಕ್ತ ಎಸ್‌ಪಿ ಮಲ್ಲಿಕ್, ಡಿವೈಎಸ್‌ಪಿ ತಿರುಮಲೇಶ್, ಪೊಲೀಸ್ ಇನ್ಸ್‌ಪೆಕ್ಟರ್‌ಗಳಾದ ಬಾಲು, ಶಿಲ್ಪಾ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
ಬೆಳ್ಳಂಬೆಳಗ್ಗೆ ಬಳ್ಳಾರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಾಳಿ
ಬಳ್ಳಾರಿ ಕಂದಾಯ ನಿರೀಕ್ಷಕ ಮಂಜುನಾಥ ಮನೆ ಮತ್ತು ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಳ್ಳಾರಿ ತಾಲೂಕು ಕಚೇರಿಯಲ್ಲಿ ಹಾಗೂ ಗುಗ್ಗರ ಹಟ್ಟಿಯ ನಿವಾಸದ ಮೇಲೆ ಚಿಕ್ಕಬಳ್ಳಾಪುರ ಮತ್ತು ಬಳ್ಳಾರಿ, ಹೊಸಪೇಟೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎಸ್‌ಪಿ ಎಂ.ಎನ್. ಶಶಿಧರ್ ಮತ್ತು ಹೊಸಪೇಟೆ ಸಿಪಿಐ ಸುರೇಶ್ ಬಾಬು ನೇತೃತ್ವದಲ್ಲಿ ದಾಖಲೆ ಪರಿಶೀಲನೆ ಮುಂದುವರಿದಿದೆ.












Click it and Unblock the Notifications