Namma Metro: ಹೆಬ್ಬಾಳ ಬಳಿ ಟನಲ್ ರಸ್ತೆ, ಮೆಟ್ರೋ: ಬಿಗ್ ಅಪ್‌ಡೇಟ್ ಕೊಟ್ಟ ಡಿಸಿಎಂ ಡಿ ಕೆ ಶಿವಕುಮಾರ್
ಬೆಂಗಳೂರು, ಮೇ 05: ಹೆಬ್ಬಾಳ ಜಂಕ್ಷನ್ ಬಹಳ ಮುಖ್ಯವಾದ ಜಾಗ. ಇಲ್ಲಿ ಮೆಟ್ರೋ ಹಾಗೂ ಟನಲ್ ರಸ್ತೆ ಅವಶ್ಯವಿದೆ. ಹೀಗಾಗಿ ನಾವು ಅಗತ್ಯವಿರುವ ಜಾಗವನ್ನು ತೆಗೆದುಕೊಳ್ಳುತ್ತೇವೆ. ಯಾವುದೇ ಕಾರಣಕ್ಕೂ ನಾವು ಯೋಜನೆ ಹಿಂಪಡೆಯಲು ಸಾಧ್ಯವಿಲ್ಲ. ಮೆಟ್ರೋ ಹಾಗೂ ಟನಲ್ ರಸ್ತೆ ಅಧಿಕಾರಿಗಳು ಸೇರಿ ಇದರ ವಿನ್ಯಾಸ ಸಿದ್ಧಪಡಿಸುವಂತೆ ಸೂಚಿಸಿದ್ದೇವೆ. ಇದಕ್ಕೆ ಅಗತ್ಯವಿರುವ ಮಿಲಿಟರಿ ಜಾಗ ಹಾಗೂ ಖಾಸಗಿ ಜಾಗ ಎಷ್ಟು ಬೇಕು ಎಂದು ನಾವು ಚರ್ಚೆ ಮಾಡಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದರು.
ಜಲ ಸಂಪನ್ಮೂಲ ಸಚಿವರೂ ಆದ ಶಿವಕುಮಾರ್ ಅವರು ವಿಧಾನಸೌಧದಲ್ಲಿ ಸೋಮವಾರ ಮಾಧ್ಯಮಗಳ ಜೊತೆಗೆ ಮಾತನಾಡಿ, ಟಿಡಿಆರ್ ಅಥವಾ ಎಫ್ ಎ ಆರ್ ಮೂಲಕ ಪರಿಹಾರ ನೀಡಲು ನಾವು ಬದ್ಧವಾಗಿದ್ದೇವೆ. ನಾವು ಈ ಜಾಗ ಬಿಟ್ಟು ಕೊಡಲು ಸಿದ್ದವಿಲ್ಲ. ಟನಲ್ ನಿರ್ಮಾಣಕ್ಕೆ ಟೆಂಡರ್ ಕರೆಯಬೇಕಾಗಿದ್ದು, ಇದಕ್ಕೆ ಅಗತ್ಯವಿರುವ ಜಾಗದ ವಿಚಾರವಾಗಿ ನಾವು ಸಭೆ ಮಾಡಿದ್ದೇವೆ ಎಂದು ಹೇಳಿದರು.

ಆಲಮಟ್ಟಿ ಅಣೆಕಟ್ಟು ಎತ್ತರವನ್ನು 524 ಮೀಟರ್ ಗಳಿಗೆ ಹೆಚ್ಚಿಸಿ, ನಮ್ಮ ಪಾಲಿನ ನೀರು ಬಳಸಿಕೊಳ್ಳಲು ರಾಜ್ಯ ಸರ್ಕಾರ ಬದ್ಧವಾಗಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. 2010ರಲ್ಲಿ ಕೃಷ್ಣಾ ಜಲ ನ್ಯಾಯಾಧಿಕರಣ ತೀರ್ಪಿನ ಅನ್ವಯ ಕೇಂದ್ರ ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಬೇಕಾಗಿದೆ. ಈ ಸಂಬಂಧ ಮೇ 7ರಂದು ಕೇಂದ್ರ ಜಲಶಕ್ತಿ ಸಚಿವಾಲಯವು ನಾಲ್ಕು ರಾಜ್ಯ ಸರಕಾರದ ಪ್ರತಿನಿಧಿಗಳ ಸಭೆ ಕರೆದಿದೆ. ಈ ವಿಚಾರವಾಗಿ ಸಂಬಂಧಪಟ್ಟ ಸಚಿವರನ್ನು ಕರೆಸಿ ಸಭೆ ಮಾಡಿ ಅಭಿಪ್ರಾಯ ಸಂಗ್ರಹಿಸಲಾಗಿದೆ. ಈ ವಿಚಾರವಾಗಿ ಕಾನೂನು ತಜ್ಞರ ಜತೆ ಚರ್ಚೆ ಮಾಡಿದ್ದು, 2 ದಿನಗಳಲ್ಲಿ ಅವರು ತಮ್ಮ ಅಭಿಪ್ರಾಯ ನೀಡಲಿದ್ದಾರೆ. ಇವುಗಳ ಆಧಾರದ ಮೇಲೆ ಕೇಂದ್ರ ಸಚಿವಾಲಯದ ಸಭೆಯಲ್ಲಿ ನಾವು ನಮ್ಮ ಬೇಡಿಕೆ ಪ್ರಸ್ತಾಪಿಸುತ್ತೇವೆ" ಎಂದು ತಿಳಿಸಿದರು. ಈ ಯೋಜನೆ ಜಾರಿಗೆ ಸರ್ಕಾರ ಈಗಾಗಲೇ ಭೂಸ್ವಾಧೀನ ಪ್ರಕ್ರಿಯೆ ಆರಂಭಿಸಿದ್ದು, ಇದಕ್ಕೆ ಅಗತ್ಯ ಹಣ ಮೀಸಲಿಡಲಾಗುವುದು ಎಂದರು.
ಆಂಧ್ರ ಹಾಗೂ ತೆಲಂಗಾಣಕ್ಕೆ 13 ಟಿಎಂಸಿ ನೀರು ಲಾಭವಾಗಲಿದೆ ಎಂದು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಅವರು, ಎಷ್ಟಾದರೂ ಲಾಭ ಆಗಲಿ, ನಷ್ಟ ಆಗಲಿ. ನಾವು ಅಣೆಕಟ್ಟನ್ನು 524 ಮೀಟರ್ ಗಳಿಗೆ ಎತ್ತರಿಸಬೇಕು. ಅದಕ್ಕೆ ಎಷ್ಟು ಬೇಕೋ ಅಷ್ಟು ಪ್ರಯತ್ನ ನಾವು ಮಾಡುತ್ತೇವೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಎಂದು ತಿಳಿಸಿದರು.
ಒಳ ಮೀಸಲಾತಿ ವಿಚಾರವಾಗಿ ಸಮೀಕ್ಷೆ ಆರಂಭವಾಗುತ್ತಿರುವ ಬಗ್ಗೆ ಕೇಳಿದಾಗ, "ಒಳ ಮೀಸಲಾತಿಗೆ ಸಮೀಕ್ಷೆ ಮಾಡಲು ಸಚಿವ ಸಂಪುಟ ತೀರ್ಮಾನ ಮಾಡಿದೆ. ಇದಕ್ಕಾಗಿ ಸಮಿತಿ ಮಾಡಿದ್ದು, ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ಯಾವುದೇ ಗೊಂದಲ ಇಲ್ಲದಂತೆ ಜನರು ತಮ್ಮ ಜಾತಿಗಳನ್ನು ಸ್ಪಷ್ಟವಾಗಿ ಮಾಹಿತಿ ನೀಡಬೇಕು ಎಂದು ಮುಕ್ತ ಅವಕಾಶ ಮಾಡಿಕೊಡಲಾಗಿದೆ" ಎಂದು ತಿಳಿಸಿದರು.
ಒಳ ಮೀಸಲಾತಿ ಬಗ್ಗೆ ಗೊಂದಲಗಳಿವೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಯಾವುದೇ ಗೊಂದಲ ಇಲ್ಲ. ಈ ವಿಚಾರವಾಗಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ನಮ್ಮ ಪಕ್ಷ ಪ್ರಣಾಳಿಕೆಯಲ್ಲಿ ಮಾತು ಕೊಟ್ಟಿದೆ. ಈ ಸಮುದಾಯಗಳಲ್ಲಿ ಕೆಲವು ಪಂಗಡಗಳು ಸರಿಯಾಗಿ ಮಾಹಿತಿ ನೀಡಿಲ್ಲ, ನಮ್ಮ ಸಂಖ್ಯೆ ಹೆಚ್ಚಿದೆ, ನಗರ ಪ್ರದೇಶದಲ್ಲಿ ಇರುವವರು ತಮ್ಮ ಸಮುದಾಯವನ್ನು ಬಹಿರಂಗಪಡಿಸಿಲ್ಲ. ಹೀಗಾಗಿ ಅವರಿಗೆ ಮುಕ್ತ ಅವಕಾಶ ಕಲ್ಪಿಸಿಕೊಡಲಾಗುತ್ತಿದೆ ಎಂದು ಹೇಳಿದರು.












Click it and Unblock the Notifications