ಮೂರು ಕ್ಷೇತ್ರದ ಉಪ ಚುನಾವಣೆ ಕಣ ಅಂತಿಮ: ಕಣದಲ್ಲಿ 45 ಅಭ್ಯರ್ಥಿಗಳು
ಬೆಂಗಳೂರು, ಅಕ್ಟೋಬರ್ 31: ಲೋಕಸಭೆ ಚುನಾವಣೆ 2024ರ ಫಲಿತಾಂಶದ ಬಳಿಕ ಶಾಸಕರ ರಾಜೀನಾಮೆಯಿಂದ ತೆರವಾದ ಮೂರು ಕ್ಷೇತ್ರಗಳಿಗೆ ನಡೆಯುವ ಉಪ ಚುನಾವಣೆ ಕಣ ಅಂತಿಮಗೊಂಡಿದೆ. ಉಪಚುನಾವಣೆ ಕಣದಲ್ಲಿ ಒಟ್ಟು 45 ಅಭ್ಯರ್ಥಿಗಳಿದ್ದಾರೆ. ನವೆಂಬರ್ 13ರಂದು ಮತದಾನ ನಡೆಯಲಿದ್ದು, ನವೆಂಬರ್ 23ರಂದು ಮತ ಎಣಿಕೆ ನಡೆಯಲಿದೆ. ರಾಜಕೀಯ ಪಕ್ಷಗಳ ಚುನಾವಣಾ ಪ್ರಚಾರ ಬಿರುಸು ಪಡೆದುಕೊಂಡಿದೆ.
ಬಳ್ಳಾರಿ ಜಿಲ್ಲೆಯ ಸಂಡೂರು, ರಾಮನಗರ ಜಿಲ್ಲೆಯ ಚನ್ನಪಟ್ಟಣ ಮತ್ತು ಹಾವೇರಿ ಜಿಲ್ಲೆಯ ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಅಕ್ಟೋಬರ್ 18ರಂದು ಅಧಿಸೂಚನೆ ಹೊರಡಿಸಲಾಗಿತ್ತು. ನಾಮಪತ್ರ ಸಲ್ಲಿಸಲು ಅಕ್ಟೋಬರ್ 25ರ ಶುಕ್ರವಾರ ಕೊನೆಯ ದಿನವಾಗಿತ್ತು.

ಅಕ್ಟೋಬರ್ 28ರ ಸೋಮವಾರ ನಾಮಪತ್ರಗಳ ಪರಿಶೀಲನೆ ನಡೆದಿತ್ತು. ಅಕ್ಟೋಬರ್ 30ರ ಬುಧವಾರ ನಾಮಪತ್ರಗಳನ್ನು ವಾಪಸ್ ಪಡೆಯಲು ಕೊನೆಯ ದಿನವಾಗಿತ್ತು. ನವೆಂಬರ್ 13ರ ಬುಧವಾರ ಮತದಾನ ನಡೆಯಲಿದ್ದು, ನವೆಂಬರ್ 23ರ ಶನಿವಾರ ಫಲಿತಾಂಶ ಘೋಷಣೆಯಾಗಲಿದೆ.
45 ಅಭ್ಯರ್ಥಿಗಳು ಕಣದಲ್ಲಿ: ನಾಮಪತ್ರಗಳನ್ನು ವಾಪಸ್ ಪಡೆಯಲು ಕೊನೆಯ ದಿನವಾದ ಬುಧವಾರ 19 ಅಭ್ಯರ್ಥಿಗಳು ನಾಮಪತ್ರಗಳನ್ನು ವಾಪಸ್ ಪಡೆದಿದ್ದಾರೆ. ಇದರಲ್ಲಿ ಪ್ರಮುಖವಾಗಿ ಶಿಗ್ಗಾವಿ ಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕ, ಮಾಜಿ ಶಾಸಕ ಸೈಯದ್ ಅಜ್ಜಂಪೀರ್ ಖಾದ್ರಿ ಪಕ್ಷೇತರ ಅಭ್ಯರ್ಥಿಯಾಗಿ ಸಲ್ಲಿಸಿದ್ದ ನಾಮಪತ್ರ ವಾಪಸ್ ಪಡೆದಿದ್ದಾರೆ. ಆದ್ದರಿಂದ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಅಹ್ಮದ್ ಖಾನ್ ಪಠಾಣ ನಿಟ್ಟುಸಿರು ಬಿಟ್ಟಿದ್ದಾರೆ.
ಶಿಗ್ಗಾವಿಯಲ್ಲಿ 8, ಸಂಡೂರು ಕ್ಷೇತ್ರದಲ್ಲಿ 6 ಮತ್ತು ಚನ್ನಪಟ್ಟಣದಲ್ಲಿ ಅತಿ ಹೆಚ್ಚು ಎಂದರೆ 31 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಚನ್ನಪಟ್ಟಣ ಕ್ಷೇತ್ರದಲ್ಲಿ ಅತಿ ಹೆಚ್ಚು ಎಂದರೆ 50 ಅಭ್ಯರ್ಥಿಗಳು ನಾಮಪತ್ರಗಳನ್ನು ಸಲ್ಲಿಕೆ ಮಾಡಿದ್ದಾರೆ. ಅಂತಿಮವಾಗಿ 31 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಈ. ಅನ್ನಪೂರ್ಣ, ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಬಂಗಾರ ಹನುಮಂತ ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳು. ಚನ್ನಪಟ್ಟಣದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ನಿಖಿಲ್ ಕುಮಾರಸ್ವಾಮಿ, ಕಾಂಗ್ರೆಸ್‌ನ ಸಿ. ಪಿ. ಯೋಗೇಶ್ವರ ಕಣದಲ್ಲಿರುವ ಪ್ರಮುಖರು. ಶಿಗ್ಗಾವಿಯಲ್ಲಿ ಕಾಂಗ್ರೆಸ್‌ನ ಯಾಸೀರ್ ಅಹ್ಮದ್ ಖಾನ್ ಪಠಾಣ ಮತ್ತು ಬಿಜೆಪಿ-ಜೆಡಿಎಸ್ ಅಭ್ಯರ್ಥಿ ಭರತ್ ಬೊಮ್ಮಾಯಿ ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳು.
ಉಪ ಚುನಾವಣೆ ನಡೆಯು ಮೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಈಗಾಗಲೇ ಮಾದರಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ. ಚುನಾವಣಾ ಕರ್ತವ್ಯ ನಿರತ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಭಂದಿಗಳಿಗೆ ರಜೆ ನಿರ್ಭಂಧಿಸಲಾಗಿದೆ. ಚುನಾವಣಾ ಪ್ರಕ್ರಿಯೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಯವರು ಸಕ್ರಿಯವಾಗಿ ಪಾಲ್ಗೊಳ್ಳಬೇಕಿರುವುದರಿಂದ, ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ಅಧೀನದಲ್ಲಿ ಬರುವ ತಾಲ್ಲೂಕು ಮಟ್ಟದ ಅಧಿಕಾರಿಗಳು, ಜಿಲ್ಲಾಧಿಕಾರಿಗಳ ಅನುಮತಿ ಇಲ್ಲದೇ ಕೇಂದ್ರಸ್ಥಾನ ಬಿಡುವಂತಿಲ್ಲ ಎಂದು ಆದೇಶಿಸಲಾಗಿದೆ.
ವಿಧಾನಸಭೆ ಉಪಚುನಾವಣೆ ಪ್ರಚಾರದ ಭರಾಟೆ ಜೋರಾಗಿದೆ. ಚುನಾವಣ ಕಣದಲ್ಲಿರುವ ಅಭ್ಯರ್ಥಿಗಳು ತಮ್ಮ ಚುನಾವಣಾ ವೆಚ್ಚಗಳ ಲೆಕ್ಕಪತ್ರಗಳನ್ನು ಚುನಾವಣಾ ವೆಚ್ಚ ವೀಕ್ಷಕರ ಮುಂದೆ ಪರಿಶೀಲನೆಗೆ ಮೂರು ಬಾರಿ ಹಾಜರುಪಡಿಸಲು ಚುನಾವಣಾ ವೀಕ್ಷಕರನ್ನು ನೇಮಕ ಮಾಡಲಾಗಿದೆ.
ಮೂರು ಕ್ಷೇತ್ರದ ಉಪ ಚುನಾವಣೆ ಫಲಿತಾಂಶ ರಾಜ್ಯ ಸರ್ಕಾರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಆದರೆ 2023ರ ಚುನಾವಣೆಯಲ್ಲಿ ತಾವು ಗೆದ್ದ ಕ್ಷೇತ್ರಗಳನ್ನು ಉಳಿಸಿಕೊಳ್ಳಬೇಕು ಎಂದು ಮೂರು ಪಕ್ಷಗಳು ಉಪ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿವೆ.
ಮೂರು ಕ್ಷೇತ್ರಗಳ ಪೈಕಿ ಚನ್ನಪಟ್ಟಣದ ಉಪ ಚುನಾವಣೆ ಕುತೂಹಲಕ್ಕೆ ಕಾರಣವಾಗಿದೆ. ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ನಿಖಿಲ್ ಕುಮಾರಸ್ವಾಮಿ ಗೆಲ್ಲಿಸಬೇಕು ಎಂದು ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಮತ್ತು ಬಿಜೆಪಿ ನಾಯಕರು ಪಣತೊಟ್ಟಿದ್ದಾರೆ. ಕಾಂಗ್ರೆಸ್‌ನ ಸಿ. ಪಿ. ಯೋಗೇಶ್ವರ ಗೆಲ್ಲಿಸಲು ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಕಾರ್ಯತಂತ್ರ ರೂಪಿಸಿದ್ದಾರೆ. ನವೆಂಬರ್ 13ರಂದು ಜನರು ತನ್ನ ತೀರ್ಪನ್ನು ಮತದಾನದ ಮೂಲಕ ನೀಡಲಿದ್ದಾರೆ.












Click it and Unblock the Notifications