ಕರ್ನಾಟಕವನ್ನು ಅಭಿವೃದ್ಧಿಯ ಶಿಖರಕ್ಕೆ ಕೊಂಡೊಯ್ಯೋಣ: ಸಿಎಂ ಡಿ.ಕೆ ಶಿವಕುಮಾರ್ ಭಾವನಾತ್ಮಕ ಸಂದೇಶ
ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಡಿ.ಕೆ ಶಿವಕುಮಾರ್ ಅವರು ಕನ್ನಡಿಗರಿಗೆ ಮಹತ್ವದ ಸಂದೇಶವನ್ನು ಹಂಚಿಕೊಂಡಿದ್ದಾರೆ. ಜನರಿಂದ, ಜನರಿಗಾಗಿ, ಜನರಿಗೋಸ್ಕರ ಎನ್ನುವ ಶೀರ್ಷಿಕೆಯೊಂದಿಗೆ ನನ್ನ ಬದುಕಿನ ಪ್ರತಿಯೊಂದು ಏಳುಬೀಳುಗಳಲ್ಲೂ ಧೈರ್ಯ ತುಂಬಿ, ನನ್ನನ್ನು ಹೆಗಲ ಮೇಲೆ ಹೊತ್ತು ಮುನ್ನಡೆಸಿದ ನನ್ನ ಪ್ರೀತಿಯ ಕರ್ನಾಟಕದ ಕೋಟ್ಯಂತರ ಜನತೆ ಹಾಗೂ ಕಾರ್ಯಕರ್ತ ಬಂಧುಗಳ ಆಶೀರ್ವಾದದಿಂದ ಲೋಕಭವನದಲ್ಲಿ ಇಂದು ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದೆ. ಈ ಕ್ಷಣದಲ್ಲಿ ನಾನು ನಿಮ್ಮೆಲ್ಲರ ಪ್ರೀತಿ ಹಾಗೂ ವಿಶ್ವಾಸಕ್ಕೆ ತಲೆಬಾಗುತ್ತೇನೆ ಎಂದು ಹೇಳಿದ್ದಾರೆ.
ಇಂದು ನನ್ನ ಹೆಗಲ ಮೇಲಿರುವುದು ಕೇವಲ ಮುಖ್ಯಮಂತ್ರಿಯ ಜವಾಬ್ದಾರಿಯಲ್ಲ, ಬದಲಿಗೆ ಕೋಟ್ಯಂತರ ಕನ್ನಡಿಗರ ಕನಸುಗಳನ್ನು ನನಸು ಮಾಡುವ ಪವಿತ್ರ ಕರ್ತವ್ಯ. ಈ ಅವಕಾಶವನ್ನು ನನಗೆ ಕರುಣಿಸಿದ ಹಿರಿಯರಿಗೆ, ಮಾರ್ಗದರ್ಶಕರಿಗೆ ಹಾಗೂ ನನ್ನ ಶಕ್ತಿಯಾಗಿ ನಿಂತ ಪ್ರತಿಯೊಬ್ಬರಿಗೂ ನನ್ನ ಹೃದಯಪೂರ್ವಕ ಕೃತಜ್ಞತೆಗಳು.

ವೇಗವಾಗಿ ಬದಲಾಗುತ್ತಿರುವ ಇಂದಿನ ತಂತ್ರಜ್ಞಾನದ ಯುಗದಲ್ಲಿ, ಹೊಸ ಆಲೋಚನೆಗಳೊಂದಿಗೆ ನಮ್ಮ ಹೆಮ್ಮೆಯ ಕರ್ನಾಟಕವನ್ನು ಅಭಿವೃದ್ಧಿಯ ಅತ್ಯುನ್ನತ ಶಿಖರಕ್ಕೆ ಕೊಂಡೊಯ್ಯಬೇಕಿದೆ. ಈ ಸರ್ವತೋಮುಖ ಪ್ರಗತಿಯ ದಾರಿಯಲ್ಲಿ ರೈತರು, ಶ್ರಮಿಕರು, ಮಹಿಳೆಯರು, ವಿದ್ಯಾರ್ಥಿಗಳು, ಯುವಜನರು ಹಾಗೂ ಪ್ರತಿಯೊಬ್ಬ ನಾಗರಿಕರ ಸಹಭಾಗಿತ್ವ ನಮಗೆ ಮುಖ್ಯ.
ಯಾವುದೇ ಒಬ್ಬ ವ್ಯಕ್ತಿಯಿಂದ ಬದಲಾವಣೆ ಸಾಧ್ಯವಿಲ್ಲ, ಆದರೆ ನಾವೆಲ್ಲರೂ ಕೈಜೋಡಿಸಿದರೆ ಅಸಾಧ್ಯವಾದುದು ಯಾವುದೂ ಇಲ್ಲ. ಬನ್ನಿ, ನಮ್ಮ ಭವಿಷ್ಯದ ಪೀಳಿಗೆ ಹೆಮ್ಮೆ ಪಡುವಂತಹ ಸುಂದರ, ಸಮೃದ್ಧ ಮತ್ತು ಪ್ರಗತಿಪರ ಕರ್ನಾಟಕವನ್ನು ಕಟ್ಟೋಣ ಎಂದು ಕರ್ನಾಟಕದ ನೂತನ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.
ಸಂವಿಧಾನದ ಪ್ರತಿ ಹಿಡಿದು ಪ್ರಮಾಣ ವಚನ ಸ್ವೀಕಾರ, ಸಾಷ್ಟಾಂಗ ನಮಸ್ಕಾರ
ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಭಾರತದ ಸಂವಿಧಾನ ಪ್ರತಿ ಹಿಡಿದು ವೀರ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸಿದರು. ಲೋಕಭವನದ ಗಾಜಿನ ಮನೆಯಲ್ಲಿ ಬುಧವಾರ ನಡೆದ ಸರಳ ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಥಾವರಚಂದ್ ಗೆಹಲೋಟ್ ಅವರು ಬೋಧಿಸಿದ ಗೌಪ್ಯತಾ ಪ್ರಮಾಣ ವಚನವನ್ನು ಶಿವಕುಮಾರ್ ಅವರು ಬುಧವಾರ ಸ್ವೀಕರಿಸಿದರು.
ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ, ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರಾದ ಸಿದ್ದರಾಮಯ್ಯ, ತೆಲಂಗಾಣ ಸಿಎಂ ರೇವಂತ್ ರೆಡ್ಡಿ, ಕೇರಳಂ ಸಿಎಂ ವಿ.ಡಿ. ಸತೀಶನ್, ಹಿಮಾಚಲ ಪ್ರದೇಶ ಸಿಎಂ ಸುಖ್ವಿಂದರ್ ಸಿಗ್ ಸುಖು, ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಅವರು ಉಪಸ್ಥಿತರಿದ್ದರು.
ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕರಿಸುವ ಮುನ್ನ, ವೀರ ಗಂಗಾಧರಯ್ಯ ಅಜ್ಜಯ್ಯನ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ನೆರೆದಿದ್ದ ಸಭಿಕರಿಗೆ ಅಡ್ಡಬಿದ್ದು ಸಾಷ್ಟಾಂಗ ನಮಸ್ಕಾರ ಅರ್ಪಿಸಿದರು. ಸಿಎಂ ಡಿ.ಕೆ. ಶಿವಕುಮಾರ್ ಅವರ ಜೊತೆಗೆ ಅವರ ಸಚಿವ ಸಂಪುಟದಲ್ಲಿ ಉಪಮುಖ್ಯಮಂತ್ರಿಯಾಗಿ ಡಾ.ಜಿ. ಪರಮೇಶ್ವರ್ ಅವರು, ಸಚಿವರಾಗಿ ಕೆ.ಎಚ್. ಮುನಿಯಪ್ಪ, ಕೆ.ಜೆ. ಜಾರ್ಜ್, ಎಂ.ಬಿ ಪಾಟೀಲ್, ರಾಮಲಿಂಗಾ ರೆಡ್ಡಿ, ಸತೀಶ್ ಜಾರಕಿಹೊಳಿ, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಯು.ಟಿ ಖಾದರ್, ಈಶ್ವರ್ ಖಂಡ್ರೆ, ಯತೀಂದ್ರ ಸಿದ್ದರಾಮಯ್ಯ, ಬೈರತಿ ಸುರೇಶ್, ಶರಣಪ್ರಕಾಶ್ ಪಾಟೀಲ್ ಅವರು ಪ್ರಮಾಣವಚನ ಸ್ವೀಕರಿಸಿದರು.












Click it and Unblock the Notifications