ಧಾರಾಕಾರ ಮಳೆ: ರಾಜ್ಯದ ಈ ಜಿಲ್ಲೆಯ ಸರ್ಕಾರಿ ನೌಕರರಿಗೆ ವಾರಾಂತ್ಯ ರಜೆ ಇಲ್ಲ!
ಕರ್ನಾಟಕದ ಕರಾವಳಿ ಹಾಗೂ ಉತ್ತರ ಕರ್ನಾಟಕ ಸೇರಿದಂತೆ ವಿವಿಧ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು. ಈ ಜಿಲ್ಲೆಯಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಮಹತ್ವದ ಸೂಚನೆಯನ್ನು ನೀಡಲಾಗಿದೆ. ಕರ್ನಾಟಕದಲ್ಲಿ ಮುಂಗಾರು ಚುರುಕು ಪಡೆದುಕೊಂಡಿದ್ದು ಧಾರಾಕಾರ ಮಳೆಯಾಗುತ್ತಿದೆ. ಭಾರೀ ಮಳೆ ಹಿನ್ನೆಲೆಯಲ್ಲಿ ರಾಜ್ಯದ ಸರ್ಕಾರಿ ನೌಕರರಿಗೆ ವಿಶೇಷ ಸೂಚನೆ ನೀಡಲಾಗಿದೆ. ಕರ್ನಾಟಕದ ಯಾವ ಜಿಲ್ಲೆಯಲ್ಲಿ ಸರ್ಕಾರಿ ನೌಕರರಿಗೆ ಯಾವ ಮುನ್ಸೂಚನೆ ನೀಡಲಾಗಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಧಾರವಾಡ ಜಿಲ್ಲೆಯಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಅಲರ್ಟ್ ಘೋಷಿಸಲಾಗಿದೆ. ಬಾರಿ ಮಳೆಯಿಂದ ನೆರೆಹಾವಳಿ, ಜನ ಜಾನುವಾರು, ಜೀವ ಹಾನಿ, ರಸ್ತೆ ಹಾನಿ, ಸೇತುವೆ ಹಾನಿ, ಸಾರ್ವಜನಿಕ ಆಸ್ತಿ ಹಾನಿಗಳಿಂದ ಹಾಗೂ ಸಾರ್ವಜನಿಕ ಮೂಲಭೂತ ಸೌಕರ್ಯಕ್ಕೆ ತೊಂದರೆ ಉಂಟಾಗದಂತೆ ಕ್ರಮ ವಹಿಸುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಕಡ್ಡಾಯವಾಗಿ ತಮ್ಮ ಸ್ಥಾನದಲ್ಲಿದ್ದು ಮಳೆ ಹಾನಿಯಿಂದ ತೊಂದರೆಗೀಡಾದ ಸಾರ್ವಜನಿಕರ ಮೂಲಭೂತ ಸೌಕರ್ಯಗಳನ್ನು ತುರ್ತಾಗಿ ಸರಿಪಡಿಸಿ ಕ್ರಮ ವಹಿಸುವುದು ಅವಶ್ಯಕತೆವಿರುತ್ತದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಆದೇಶ ಮಾಡಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಜಿಲ್ಲೆಯ ಎಲ್ಲಾ ಇಲಾಖೆಯ ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಅವರ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ಕಡ್ಡಾಯವಾಗಿ ತಮ್ಮ ಕೇಂದ್ರ ಸ್ಥಾನದಲ್ಲಿದ್ದು ತುರ್ತು ಸಂದರ್ಭದಲ್ಲಿ ಕಾರ್ಯನಿರ್ವಹಿಸುವುದು ಅತಿ ಅವಶ್ಯಕವಿರುವುದರಿಂದ ಎಲ್ಲಾ ಜಿಲ್ಲಾ ಮಟ್ಟದ, ತಾಲ್ಲೂಕು ಮಟ್ಟದ ಅಧಿಕಾರಿಗಳು ಅನಿವಾರ್ಯ ಪರಿಸ್ಥಿತಿಯಲ್ಲಿ ರಜೆಯ ಮೇಲೆ ತೆರಳಬೇಕಾದಲ್ಲಿ ಜಿಲ್ಲಾಧಿಕಾರಿಗಳ ಪೂರ್ವಾನುಮತಿ ಪಡೆದು ರಜೆಯ ಮೇಲೆ ತೆರಳಬೇಕು.
ಆದೇಶವನ್ನು ಉಲ್ಲಂಘಿಸಿದ್ದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ 2005 ರನ್ವಯ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲೆಯ ಜಲಪ್ರದೇಶಗಳಲ್ಲಿ ಅನಧಿಕೃತ ಪ್ರವೇಶ ನಿರ್ಬಂಧ
2025-26 ನೇ ಸಾಲಿನ ಮುಂಗಾರು ಅವಧಿಯಲ್ಲಿ ಬಿರುಸಿನ ಮಳೆಯಾಗುತ್ತಿದ್ದು, ಸಾರ್ವಜನಿಕರ ಹಿತದೃಷ್ಠಿಯಿಂದ ಧಾರವಾಡ ಜಿಲ್ಲೆಯಾದ್ಯಂತ ಇರುವ ಜಲಪಾತಗಳು, ಕೆರೆಗಳು, ಹಳ್ಳ-ಕೊಳ್ಳಗಳು, ಹೊಂಡಗಳು ಅಥವಾ ಅಪಾಯ ಮಟ್ಟಕ್ಕಿಂತ ಹೆಚ್ಚಾಗಿ ನೀರು ಸಂಗ್ರಹವಿರುವ ಪ್ರದೇಶಗಳಲ್ಲಿ ಸಾರ್ವಜನಿಕರು, ಪ್ರವಾಸಿಗರು ಅನಧಿಕೃತವಾಗಿ ಇಳಿಯುವುದು, ಸ್ನಾನ ಮಾಡುವುದು ಹಾಗೂ ಈಜುವುದು ಸೇರಿದಂತೆ ಯಾವುದೇ ತರಹದ ಸಾಹಸ ಚಟುವಟಿಕೆ ನಡೆಸುವುದು ಇತ್ಯಾದಿ ಚಟುವಟಿಕೆಗಳನ್ನು ಮುಂದಿನ ಆದೇಶದವರೆಗೆ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದ್ದಾರೆ.












Click it and Unblock the Notifications