Hassan: ಗಣೇಶ ಮೆರವಣಿಗೆಯಲ್ಲಿ ಕುಣಿಯುತ್ತಿದ್ದವರ ಮೇಲೆ ಟ್ರಕ್ ಹರಿದು ಹಲವರು ಸಾವು
ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ದಾರುಣ ಘಟನೆ ನಡೆದಿದೆ. ಹಾಸನ ತಾಲ್ಲೂಕಿನ ಮೊಸಳೆಹೊಸಳ್ಳಿಯಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಟ್ರಕ್ ಹರಿದು ಎಂಟಕ್ಕೂ ಹೆಚ್ಚು ಮಂದಿ ಭೀಕರವಾಗಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಮೆರವಣಿಯಲ್ಲಿ ಸಾವಿರಾರು ಮಂದಿ ಡಿಜೆ ಹಾಡಿಗೆ ಭರ್ಜರಿ ಸ್ಟೆಪ್ ಹಾಕುತ್ತಿದ್ದರು. ಈ ವೇಳೆ ಟ್ರಕ್ ವೇಗವಾಗಿ ಬಂದು ಜನರ ಮೇಲೆ ನುಗ್ಗಿದೆ. ಸೋಷಿಯಲ್ ಮೀಡಿಯಾದಲ್ಲಿ ಈ ವಿಡಿಯೋ ವೈರಲ್ ಆಗಿದೆ. 20ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿದ್ದು, ಸಿಎಂ ಸಿದ್ದರಾಮಯ್ಯ ಅವರು ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿ ಸಂತಾಪ ಸೂಚಿಸಿದ್ದಾರೆ.
ಹಾಸನ ಜಿಲ್ಲೆಯ ಮೊಸಳೆಹೊಸಳ್ಳಿಯಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಸಂಭವಿಸಿದ ಭೀಕರ ಅಪಘಾತ ಅತ್ಯಂತ ಆಘಾತಕಾರಿಯಾಗಿದ್ದು, ಈ ಘೋರ ದುರ್ಘಟನೆಯ ಬಗ್ಗೆ ಕೇಳಿ ತುಂಬಾ ದುಃಖವಾಗಿದೆ. ಮೃತರ ಕುಟುಂಬಕ್ಕೆ 5 ಲಕ್ಷ ರೂ. ಹಾಗೂ ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಭರಿಸಲಿದೆ. ಗಾಯಾಳುಗಳು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಡಿಕೆ ಶಿವಕುಮಾರ್ ಎಕ್ಸ್‌ನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ. ಈ ಭೀಕರ ಅಪಘಾತ ಸಂಭವಿಸಿ ಹಲವರು ಜೀವ ಕಳೆದುಕೊಂಡು, 20ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿರುವ ಸುದ್ದಿ ಕೇಳಿ ತೀವ್ರ ಆಘಾತ ಉಂಟಾಯಿತು. ಗಣಪತಿ ಮೆರವಣಿಗೆ ಹೋಗುತ್ತಿದ್ದವರ ಮೇಲೆ ಟ್ರಕ್ ಹರಿದು ಭಕ್ತರ ಸಾವುಂಟಾಗಿರುವುದು ನನಗೆ ಅತ್ಯಂತ ದುಃಖ ಉಂಟು ಮಾಡಿದೆ ಎಂದಿದ್ದಾರೆ.
ಇದು ಅತೀ ದುರ್ದೈವದ ಘಟನೆಯಾಗಿದ್ದು, ಮೃತರ ಆತ್ಮಕ್ಕೆ ಭಗವಂತ ಸದ್ಗತಿ ಕರುಣಿಸಲಿ ಹಾಗೂ ದುಃಖತಪ್ತ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿಯನ್ನು ಕರುಣಿಸಲಿ. ಎಲ್ಲಾ ಗಾಯಾಳುಗಳು ಅದಷ್ಟು ಬೇಗ ಚೇತರಿಸಿಕೊಳ್ಳಲಿ. ರಾಜ್ಯ ಸರ್ಕಾರ ಗಾಯಾಳುಗಳಿಗೆ ಉತ್ತಮ, ಉಚಿತ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಮೊಸಳೆ ಹೊಸಳ್ಳಿ ಗ್ರಾಮದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಭೀಕರ ಅಪಘಾತದಿಂದ 8 ಜನ ಮೃತಪಟ್ಟು, ಹಲವರು ಗಂಭೀರವಾಗಿ ಗಾಯಗೊಂಡ ಹೃದಯವಿದ್ರಾವಕ ಘಟನೆ ಮನಸ್ಸಿಗೆ ತೀವ್ರ ನೋವುಂಟುಮಾಡಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗು ಗಾಯಗೊಂಡಿರುವವರೆಲ್ಲರೂ ಶೀಘ್ರವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಈ ದುರ್ಘಟನೆಯಲ್ಲಿ ತಮ್ಮ ಕುಟುಂಬದವರನ್ನು ಕಳೆದುಕೊಂಡವರ ದುಃಖದಲ್ಲಿ ನಾನೂ ಭಾಗಿಯಾಗಿರುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಸಂತಾಪ ಸೂಚಿಸಿದ್ದಾರೆ.
ಮೃತರಿಗೆ 5 ಲಕ್ಷ ಪರಿಹಾರ ಘೋಷಣೆ
ಹಾಸನದಲ್ಲಿ ಗಣೇಶ ವಿಸರ್ಜನೆಗಾಗಿ ಮೆರವಣಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ಲಾರಿ ಹರಿದು ಹಲವರು ಸಾವಿಗೀಡಾಗಿ, ಸುಮಾರು 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡ ಸುದ್ದಿ ತಿಳಿದು ಅತೀವ ದುಃಖವಾಯಿತು. ಮೃತರ ಕುಟುಂಬಗಳಿಗೆ ಸರ್ಕಾರದ ವತಿಯಿಂದ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು. ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಇದು ಅತ್ಯಂತ ನೋವಿನ ಘಳಿಗೆ. ಅಪಘಾತ ಸಂತ್ರಸ್ತ ಕುಟುಂಬಗಳ ಜೊತೆ ನಾವೆಲ್ಲರೂ ನಿಲ್ಲೋಣ ಎಂದು ಭಾವುಕರಾಗಿದ್ದಾರೆ.












Click it and Unblock the Notifications