ಹಳೆ ಬಟ್ಟೆ-ಕೊಳಕು ಬಟ್ಟೆ ಹಾಕಿಕೊಂಡು ಬರುವವರನ್ನೂ ಮಾನವೀಯವಾಗಿ ನಡೆಸಿಕೊಳ್ಳಿ: ಸಿದ್ದರಾಮಯ್ಯ
ಬೆಂಗಳೂರು ನವೆಂಬರ್ 30: ಹಳೆ ಬಟ್ಟೆ-ಕೊಳಕು ಬಟ್ಟೆ ಹಾಕಿಕೊಂಡು ಬರುವವರನ್ನೂ ಮಾನವೀಯವಾಗಿ ನಡೆಸಿಕೊಂಡು ಆರೋಗ್ಯ ಸೇವೆ ನೀಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಮೇಲೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ 262 ಆಧುನಿಕ ಜೀವ ರಕ್ಷಕ ಆ್ಯಂಬುಲೆನ್ಸ್ ಗಳನ್ನು ಜನಸೇವೆಗೆ ಅರ್ಪಿಸಿ ಮಾತನಾಡಿದ ಅವರು, ಜಯದೇವ ಆಸ್ಪತ್ರೆಯಲ್ಲಿರುವ ಗುಣಮಟ್ಟದ ಆರೋಗ್ಯ ಸೇವೆ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲೂ ಸಿಗಬೇಕು ಎನ್ನುವುದು ಸರ್ಕಾರದ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ನಾಡಿನ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡಲು ಸರ್ಕಾರ ಬದ್ದವಾಗಿದೆ. ಚಿಕಿತ್ಸೆ ಸಿಗದೆ ಯಾರೂ ಪ್ರಾಣ ಕಳೆದುಕೊಳ್ಳುವಂಥಾಗಬಾರದು ಎನ್ನುವ ಕಾರಣಕ್ಕೇ ತುರ್ತು 108 ಆ್ಯಂಬುಲೆನ್ಸ್ ಗಳನ್ನು ಆರೋಗ್ಯ ಸೇವೆಗೆ ಒದಗಿಸಲಾಗಿದೆ. ರಾಜ್ಯದಲ್ಲಿ 840 ಕ್ಕೂ ಹೆಚ್ಚು ಆ್ಯಂಬುಲೆನ್ಸ್ ಗಳ ಅಗತ್ಯವಿದೆ. ಪ್ರತೀ ತಾಲ್ಲೂಕಿನಲ್ಲಿ 4 ಆ್ಯಂಬುಲೆನ್ಸ್ ಗಳು ಕಾರ್ಯನಿರ್ವಹಿಸುತ್ತಾ ಪ್ರತೀ ದಿನ ನೂರಾರು ಮಂದಿಗೆ ತುರ್ತು ಆರೋಗ್ಯ ಸೇವೆ ಒದಗಿಸುತ್ತಿವೆ. ಪ್ರಾಥಮಿಕ ತುರ್ತು ಚಿಕಿತ್ಸೆ ಪ್ರಾಣ ರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ ಎಂದು ವಿವರಿಸಿದರು.
ಪ್ರತೀ ಜಿಲ್ಲೆಯಲ್ಲಿ MRI ಸ್ಕ್ಯಾನಿಂಗ್ ಸೌಲಭ್ಯ ಇರಬೇಕು. ಖಾಸಗಿ ಡಯಾಗ್ನಸ್ಟಿಕ್ ಸೆಂಟರ್ ಗಳಲ್ಲಿ ಸೇವಾವೆಚ್ಚ ದುಬಾರಿ ಆಗಿರುವುದರಿಂದ ಬಡವರಿಗೆ ಬಹಳ ಕಷ್ಟ ಆಗುತ್ತಿದೆ. ಈ ಕಾರಣಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಗೆ ಸಾವಿರಾರು ಮಂದಿ ಬೇಡಿಕೆ ಅರ್ಜಿ ಕೊಡುತ್ತಿದ್ದಾರೆ. ಆದ್ದರಿಂದ ಸರ್ಕಾರಿ ಆಸ್ಪತ್ರೆಗಳಲ್ಲೇ ಉತ್ತಮಗುಣಮಟ್ಟದ ಚಿಕಿತ್ಸೆ ಸಿಗುತ್ತದೆ ಎನ್ನುವ ವಾತಾವರಣ ರಾಜ್ಯದಲ್ಲಿ ಸೃಷ್ಟಿ ಆಗುತ್ತಿದೆ. ಜಯದೇವ ಆಸ್ಪತ್ರೆಯಿಂದ ಉತ್ತಮಸೇವೆ ಸಾಧ್ಯ ಆಗಿರುವಾಗ ಉಳಿದ ಕಡೆಗಳಲ್ಲೂ ಅದೇ ಗುಣಮಟ್ಟದ ಸೇವೆ ಒದಗಿಸಲು ಸಾಧ್ಯವಿದೆ. ರಾಜ್ಯ ಸರ್ಕಾರ ಆ ದಿಕ್ಕಿನಲ್ಲಿ ಶ್ರಮಿಸುತ್ತಿದೆ ಎಂದು ಮೆಚ್ಚುಗೆ ಸೂಚಿಸಿ ಉತ್ತರ ಕರ್ನಾಟಕದ ಕಡೆ ಹೆಚ್ಚಿನಗಮನ ನೀಡಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಸಲಹೆ ನೀಡಿದರು.
ಈ ವೇಳೆ ಡಿ ಕೆ ಶಿವಕುಮಾರ್ ಮಾತನಾಡಿ, ಆರೋಗ್ಯ ಸೇವೆಯಲ್ಲಿ ಇಡೀ ದೇಶಕ್ಕೆ ಕರ್ನಾಟಕ ರಾಜ್ಯ ಪ್ರಥಮ ಸ್ಥಾನದಲ್ಲಿದೆ. ದೇಶದಲ್ಲಿ ನಮ್ಮ ರಾಜ್ಯದಲ್ಲಿರುವ ಆರೋಗ್ಯ ವ್ಯವಸ್ಥೆ ಹಾಗೂ ಮೆಡಿಕಲ್ ಕಾಲೇಜುಗಳ ಸಂಖ್ಯೆ ಬೇರೆಲ್ಲೂ ಇಲ್ಲ. ದೇಶಕ್ಕೆ ಹೆಚ್ಚು ವೈದ್ಯರನ್ನು ನೀಡುತ್ತಿರುವ ರಾಜ್ಯ ಕರ್ನಾಟಕ. ಈ ವಿಚಾರದಲ್ಲಿ ಕರ್ನಾಟಕ ದೇಶಕ್ಕೆ ಮಾದರಿಯಾಗಿದೆ.

70ಕ್ಕೂ ಹೆಚ್ಚು ಮೆಡಿಕಲ್ ಕಾಲೇಜುಗಳು ನಮ್ಮ ರಾಜ್ಯದಲ್ಲಿದ್ದು 10 ಸಾವಿರಕ್ಕೂ ಹೆಚ್ಚು ವೈದ್ಯರನ್ನು ತಯಾರು ಮಾಡುತ್ತಿದ್ದೇವೆ. ಇಡೀ ಪ್ರಪಂಚದ ವಿವಿಧ ಭಾಗಗಳಲ್ಲಿ ನಮ್ಮ ವೈದ್ಯರು ಸೇವೆ ಸಲ್ಲಿಸುತ್ತಿದ್ದಾರೆ. ಪ್ರತಿ ಜಿಲ್ಲೆಗಳಲ್ಲಿ ಮೆಡಿಕಲ್ ಕಾಲೇಜು ಇರುವ ನಮ್ಮ ವ್ಯವಸ್ಥೆಯನ್ನು ಪರಿಗಣಿಸಿ ಬೇರೆ ರಾಜ್ಯಗಳು ಅದನ್ನು ಅನುಕರಣೆ ಮಾಡುತ್ತಿವೆ. ಇದರ ಜತೆಗೆ ನಮ್ಮಲ್ಲಿ ಅತಿ ಹೆಚ್ಚು ಖಾಸಗಿ ಮೆಡಿಕಲ್ ಕಾಲೇಜುಗಳು ಇವೆ. ಮೆಡಿಕಲ್ ಕಾಲೇಜುಗಳ ಮಾದರಿಯಲ್ಲಿ ಪ್ಯಾರಾಮೆಡಿಕಲ್ ಮತ್ತು ನರ್ಸಿಂಗ್ ಕಾಲೇಜುಗಳು ನಮ್ಮ ರಾಜ್ಯದಲ್ಲೇ ಹೆಚ್ಚಾಗಿವೆ.
ಇಂದು 108 ಆಂಬ್ಯುಲೆನ್ಸ್ ಸೇವೆಗೆ ಹೊಸ ದಿಕ್ಕು ತೋರಲು ಆಧುನಿಕ ತಂತ್ರಜ್ಞಾನ ಅಳವಡಿಸಲು 262 ನೂತನ ಆಂಬ್ಯುಲೆನ್ಸ್ ಗಳನ್ನು ಲೋಕಾರ್ಪಣೆ ಮಾಡಲಾಗಿದೆ. ಈ ಸಂದರ್ಭದಲ್ಲಿ ಆರೋಗ್ಯ ಮಂತ್ರಿಗಳು ಹಾಗೂ ಕಾರ್ಯದರ್ಶಿಗಳಿಗೆ ಒಂದು ಮನವಿ ಮಾಡುತ್ತೇನೆ. 108 ಆಂಬ್ಯುಲೆನ್ಸ್ ಚಾಲಕರು ಖಾಸಗಿ ಆಶ್ಪತ್ರೆಗಳ ಜತೆ ಒಳ ಒಪ್ಪಂದ ಮಾಡಿಕೊಂಡು ನಮ್ಮ ಕನಕಪುರ, ಮಳವಳ್ಳಿ ಚಾಮರಾಜನಗರ ಭಾಗದಲ್ಲಿ ಯಾವುದೇ ಆಪಘಾತವಾದರೂ ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ತೆಗೆದುಕೊಂಡು ಹೋಗುತ್ತಾರೆ.
ನಮ್ಮ ಸರ್ಕಾರಿ ಆಸ್ಪತ್ರೆಗಳಲ್ಲಿ ಉತ್ತಮ ಚಿಕಿತ್ಸಾ ವ್ಯವಸ್ಥೆ ಇದ್ದರೂ ಖಾಸಗಿ ಆಸ್ಪತ್ರೆಗೆ ಕರೆದೊಯ್ಯುತ್ತಾರೆ. ನಂತರ ಅವರ ಬಿಲ್ ಗಳು ದುಬಾರಿಯಾಗಿ ಶಾಸಕರ ಬಳಿ ಸಹಾಯ ಕೇಳಿಕೊಂಡು ಬರುತ್ತಾರೆ. ನಾವು ಶಾಸಕರು ಮುಖ್ಯಮಂತ್ರಿಗಳ ಬಳಿ ಪರಿಹಾರ ಕೇಳಬೇಕಾಗುತ್ತದೆ. ನಾವು ನಮ್ಮ ಜೇಬಿನಿಂದಲೂ ಹಣ ನೀಡಬೇಕಾಗುತ್ತದೆ. ಕೆಲವೊಮ್ಮೆ ಈ ರೀತಿ ತಿಂಗಳಿಗೆ 20 ಲಕ್ಷದ ವರೆಗೂ ನೀಡಬೇಕಾಗುತ್ತದೆ.
ಹೀಗಾಗಿ ನೀವು ಯಾರಿಗೆ ಈ ಆಂಬ್ಯುಲೆನ್ಸ್ ಚಾಲಕರು ಹಾಗೂ ಇದರ ಗುತ್ತಿಗೆ ನೀಡಿರುತ್ತೀರಿ ಅವರಿಗೆ ಸರಿಯಾದ ತರಬೇತಿ ನೀಡಿ ಅವರು ಸರ್ಕಾರಿ ಆಸ್ಪತ್ರೆಗೆ ಗಾಯಾಳುಗಳನ್ನು ಕರೆದೊಯ್ಯುವಂತೆ ಮಾಡಬೇಕು. ಈ ಕಾರಣಕ್ಕೆ ನಾನು ಕನಕಪುರಕ್ಕೆ ಮೆಡಿಕಲ್ ಕಾಲೇಜು ನೀಡಿ ಎಂದು ಪದೇ ಪದೆ ಒತ್ತಾಯ ಮಾಡುತ್ತಿರುತ್ತೇನೆ.












Click it and Unblock the Notifications