
ಸಂತೋಷ್ ಆತ್ಮಹತ್ಯೆ: ಮಾಜಿ ಸಚಿವ ಕೆ.ಎಸ್. ಈಶ್ವರಪ್ಪಗೆ ಮತ್ತೆ ಸಂಕಷ್ಟ
ಬೆಂಗಳೂರು, ಆ. 23: ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ.
ಈಶ್ವರಪ್ಪಗೆ ಕ್ಲೀನ್‌ಚಿಟ್ ನೀಡಿರುವ ತನಿಖಾಧಿಕಾರಿಗಳ ಕ್ರಮ ಪ್ರಶ್ನಿಸಿ ಸಂತೋಷ್ ಪಾಟೀಲ್ ಕುಟುಂಬದವರು ವಿಶೇಷ ನ್ಯಾಯಾಲಯದ ಮುಂದೆ ಮಂಗಳವಾರ ಮೇಲ್ಮನವಿ ಸಲ್ಲಿಸಿದ್ದಾರೆ. ಬುಧವಾರ ನ್ಯಾಯಾಲಯದ ಮುಂದೆ ಅರ್ಜಿ ವಿಚಾರಣೆಗೆ ಬರಲಿದೆ.
ಪ್ರಕರಣದ ಸಂಬಂಧ ವಿಶೇಷ ತನಿಖಾ ತಂಡದ ಅಧಿಕಾರಿಗಳು ಸಲ್ಲಿಸಿರುವ ಬಿ-ವರದಿ ವಿರೋಧಿಸಿ ಮೃತ ಸಂತೋಷ್ ಪಾಟೀಲ್ ಸಹೋದರ ಪ್ರಶಾಂತ್ ಪಾಟೀಲ್ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
Breaking: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪಗೆ ಕ್ಲೀನ್ ಚಿಟ್
ಸಂತೋಷ್ ಪಾಟೀಲ್ ಆತ್ಮಹತ್ಯೆಯ ಹಿಂದೆ ಈಶ್ವರಪ್ಪ ಸೇರಿ ಹಲವು ಪ್ರಭಾವಿಗಳ ಕೈವಾಡವಿದೆ. ಎಸ್‌ಐಟಿ ಅಧಿಕಾರಿಗಳು ಸೂಕ್ತ ರೀತಿಯಲ್ಲಿ ತನಿಖೆ ನಡೆಸದೆ, ರಾಜಕೀಯ ಪ್ರಭಾವಕ್ಕೆ ಒಳಗಾಗಿ ಈಶ್ವರಪ್ಪ ಅವರನ್ನು ಆರೋಪಮುಕ್ತಗೊಳಿಸಿದ್ದಾರೆ. ಆದ್ದರಿಂದ, ಎಸ್‌ಐಟಿ ಸಲ್ಲಿಸಿರುವ ಬಿ-ರಿಪೋರ್ಟ್ ತಿರಸ್ಕರಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.
ಸಂತೋಷ್ ಪಾಟೀಲ್ ನಡೆಸಿರುವ ಕಾಮಗಾರಿಗಳು ಹಾಗೂ ಆ ಸಂಬಂಧ ಈಶ್ವರಪ್ಪ ಅವರೊಂದಿಗೆ ನಡೆಸಿರುವ ಮಾತುಕತೆಗೆ ಸಂಬಂಧಿಸಿದಂತೆ ಹಲವು ದಾಖಲೆಗಳಿವೆ. ಸಂತೋಷ್ ಆತ್ಮಹತ್ಯೆಗೆ ಈಶ್ವರಪ್ಪ ಅವರೇ ನೇರ ಕಾರಣ ಎಂಬುದನ್ನು ಸಾಬೀತುಪಡಿಸುವ ಹಲವು ಸಾಕ್ಷ್ಯಗಳು ಲಭ್ಯವಿದ್ದರೂ ಸಾಕ್ಷ್ಯಾಧಾರ ಕೊರತೆಯ ಕಾರಣ ನೀಡಿ ಬಿ-ವರದಿ ಸಲ್ಲಿಸಲಾಗಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.
ಏಪ್ರಿಲ್ 12 ರಂದು ಗುತ್ತಿಗೆದಾರ ಸಂತೋಷ್ ಉಡುಪಿಯ ಹೋಟೆಲ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಸಾವಿಗೂ ಮೊದಲು ಸಂತೋಷ್ ಸ್ನೇಹಿತರಿಗೆ ಸಂದೇಶ ಕಳಿಸಿದ್ದು, ನನ್ನ ಸಾವಿಗೆ ಈಶ್ವರಪ್ಪ ಕಾರಣ ಎಂದು ಸಂದೇಶ ಕಳುಹಿಸಿದ್ದರು. ಸಂದೇಶದಲ್ಲಿ ಈಶ್ವರಪ್ಪ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿಂತೆ ಉಡುಪಿ ಟೌನ್ ಪೊಲೀಸರು ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್‌ಗೆ ಬಿ ರಿಪೋರ್ಟ್ ಸಲ್ಲಿಕೆ ಮಾಡಿದ್ದಾರೆ. ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಪೊಲೀಸರು ಬಿ ರಿಪೋರ್ಟ್ ಸಲ್ಲಿಕೆ ಮಾಡಿದ್ದರು.
ಸಂತೋಷ ವ್ಯಕ್ತಪಡಿಸಿದ್ದ ಈಶ್ವರಪ್ಪ
ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಪೊಲೀಸರು ಬಿ ರಿಪೋರ್ಟ್ ಹಾಕಿರುವ ಸುದ್ದಿ ಕೇಳಿ ತುಂಬಾ ಸಂತೋಷವಾಗಿದೆ. ನಾನು ತಪ್ಪು ಮಾಡಿಲ್ಲವೆಂದು ಮನೆದೇವರು ಚೌಡೇಶ್ವರಿ ಮೇಲೆ ಆಣೆ ಮಾಡಿದ್ದೆ. ಚೌಡೇಶ್ವರಿ ದೇವಿಯ ಆಶೀರ್ವಾದದಿಂದ ಪ್ರಕರಣದಲ್ಲಿ ಖುಲಾಸೆ ಆಗಿರುವೆ. ಆರೋಪದಿಂದ ಮುಕ್ತನಾಗುವ ವಿಶ್ವಾಸ ನನಗೆ ಇತ್ತು ಎಂದು ಕೆ.ಎಸ್.ಈಶ್ವರಪ್ಪ ಹೇಳಿಕೊಂಡಿದ್ದರು.
ಹಿಂದೆ ಸರಿದ ಜಡ್ಜ್ :
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸಿರುವ ಜಾತಿ ಗಣತಿ (ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕ ಸಮೀಕ್ಷೆ ) ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲು ಆಯೋಗಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಹಿಂದೆ ಸರಿದ್ದಾರೆ.
ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಗೌರವಾಧ್ಯಕ್ಷ ನಟ ಡಾ. ಮುಖ್ಯಮಂತ್ರಿ ಚಂದ್ರು ಸೇರಿ 13 ವಿವಿಧ ಹಿಂದುಳಿದ ವರ್ಗಗಳ ಸಂಘ-ಸಂಸ್ಥೆಗಳು ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದವು.
ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ಮತ್ತು ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅವರನ್ನು ಒಳಗೊಂಡ ವಿಭಾಗೀಯ ಪೀಠದ ಮುಂದೆ ಆ ಅರ್ಜಿಗಳು ವಿಚಾರಣೆಗೆ ಬಂದವು.'
ಆಗ ನ್ಯಾಯಪೀಠದಲ್ಲಿದ್ದ ನ್ಯಾ.ವಿಶ್ವಜಿತ್ ಶೆಟ್ಟಿ, ಅರ್ಜಿಯಲ್ಲಿ ಪ್ರತಿವಾದಿಯಲ್ಲಿ ಒಬ್ಬರಾದ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಹಾಲಿ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ತಮಗೆ ಪರಿಚಯ ಇರುವ ಕಾರಣ ಅರ್ಜಿ ವಿಚಾರಣೆಯಿಂದ ತಾವು ಹಿಂದೆ ಸರಿಯುತ್ತಿರುವುದಾಗಿ ತಿಳಿಸಿದರು.
Recommended Video
ಅದನ್ನು ಪರಿಗಣಿಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ಅವರು, ನ್ಯಾ.ವಿಶ್ವಜಿತ್ ಶೆಟ್ಟಿ ಅವರನ್ನು ಒಳಗೊಂಡಿರದ ವಿಭಾಗೀಯ ನ್ಯಾಯಪೀಠದ ಮುಂದೆ ಅರ್ಜಿಯನ್ನು ವಿಚಾರಣೆಗೆ ನಿಗದಿಪಡಿಸುವಂತೆ ರಿಜಿಸ್ಟ್ರಿಗೆ ನಿರ್ದೇಶಿಸಿ ಅರ್ಜಿ ವಿಚಾರಣೆ ಮುಂದೂಡಿದರು.