Government employee: ಸರ್ಕಾರಿ ನೌಕರರಿಗೆ 2 ದಿನದ ವಿಶೇಷ ರಜೆ
ಬೆಂಗಳೂರು, ಫೆಬ್ರವರಿ 14: ಕರ್ನಾಟಕ ಸರ್ಕಾರ ರಾಜ್ಯ ಸರ್ಕಾರಿ ನೌಕರರಿಗೆ ಫೆಬ್ರವರಿ ಅಂತ್ಯದಲ್ಲಿ ಎರಡು ದಿನದ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಿ ಆದೇಶಿಸಿದೆ. ಈ ಕುರಿತು ಅಧಿಕೃತ ಸುತ್ತೋಲೆ ಹೊರಡಿಸಲಾಗಿದೆ.
ಈ ಕುರಿತು ಬುಧವಾರ ವಿಮಲಾಕ್ಷಿ. ಬಿ ಸರ್ಕಾರದ ಅಧೀನ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಆಸು-ತಪಾಸಣೆ-ಸ್ವೀಮರ) ಸುತ್ತೋಲೆಯನ್ನು ಹೊರಡಿಸಿದ್ದಾರೆ. ಸರ್ಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು/ ಪ್ರಧಾನ ಕಾರ್ಯದರ್ಶಿಗಳು/ ಕಾರ್ಯದರ್ಶಿಗಳಿಗೆ ಸುತ್ತೋಲೆ ಕಳಿಸಲಾಗಿದೆ.

ಸುತ್ತೋಲೆಯ ವಿವರ; ಈ ಸುತ್ತೋಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ದಿನಾಂಕ 27/02/2024 ರಂದು ಬೆಂಗಳೂರು ನಗರದ ಅರಮನೆ ಆವರಣದಲ್ಲಿ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ಮತ್ತು ಆಡಳಿತದಲ್ಲಿ ಕಾರ್ಯಕ್ಷಮತೆ ಕಾರ್ಯಾಗಾರವನ್ನು ಆಯೋಜಿಸಿದೆ ಎಂದು ಹೇಳಿದೆ.
ಸದರಿ ಸಮ್ಮೇಳನ ಹಾಗೂ ಆಡಳಿತದಲ್ಲಿ ಕಾರ್ಯಕ್ಷಮತೆ ಕಾರ್ಯಾಗಾರದಲ್ಲಿ ಭಾಗವಹಿಸುವ ರಾಜ್ಯ ಸರ್ಕಾರಿ ನೌಕರರಿಗೆ ಮಾತ್ರ ಸೀಮಿತಗೊಳಿಸಿ ಬೆಂಗಳೂರು ನಗರ ಜಿಲ್ಲೆಯ ಅಧಿಕಾರಿ/ ನೌಕರರಿಗೆ ದಿನಾಂಕ 27/02/2024ರಂದು ಒಂದು ದಿನ ಹಾಗೂ ಇತರ ಜಿಲ್ಲೆಗಳ ಅಧಿಕಾರಿ/ ನೌಕರರಿಗೆ ಪ್ರಯಾಣ ದಿನಗಳೂ ಸೇರಿದಂತೆ ದಿನಾಂಕ 27/02/2024 ಮತ್ತು 28/02/2024 ರಂದು 2 ದಿನಗಳ ವಿಶೇಷ ಸಾಂದರ್ಭಿಕ ರಜೆಯನ್ನು ಷರತ್ತಿಗೊಳಪಟ್ಟು ಮಂಜೂರು ಮಾಡಲಾಗಿದೆ ಎಂದು ತಿಳಿಸಿದೆ.
ಈ ಸಮ್ಮೇಳನದಲ್ಲಿ ಭಾಗವಹಿಸಲು ಇಚ್ಛಿಸುವ ಸರ್ಕಾರಿ ನೌಕರರು ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಬೇಕು. ಸದರಿ ಸಮ್ಮೇಳನದಲ್ಲಿ ಭಾಗವಹಿಸಿದ ಬಗ್ಗೆ ಅಧಿಕೃತ ಹಾಜರಾತಿ ಪತ್ರವನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ಅಥವಾ ಇವರಿಂದ ನಾಮನಿರ್ದೇಶನ ಹೊಂದಿದ ಅಧಿಕಾರಿಗಳಿಂದ ಪಡೆದು ಒದಗಿಸಬೇಕು. ಈ ಆಧಾರದ ಮೇಲೆ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲು ಅಧಿಕಾರವುಳ್ಳ ಅಧಿಕಾರಿಗಳು ಮಂಜೂರು ಮಾಡತಕ್ಕದ್ದು ಎಂದು ಸುತ್ತೋಲೆ ಹೇಳಿದೆ.
ಮುಖ್ಯಮಂತ್ರಿಗಳಿಗೆ ಆಹ್ವಾನ; ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ಫೆಬ್ರವರಿ 27ರಂದು ಬೆಂಗಳೂರಿನಲ್ಲಿ ನಡೆಯುತ್ತಿದೆ. ಈ ಸಮ್ಮೇಳನಕ್ಕೆ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಧಿಕೃತವಾಗಿ ಆಹ್ವಾನಿಸಲಾಗಿದೆ.
ಫೆಬ್ರವರಿ 27ರ ಮಂಗಳವಾರ ಬೆಳಗ್ಗೆ 10.30ಕ್ಕೆ ಅರಮನೆ ಮೈದಾನದ, ಕೃಷ್ಣ ವಿಹಾರದಲ್ಲಿ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ನಡೆಯಲಿದೆ. ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು, ಹಲವಾರು ಸಚಿವರು ಈ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ.
ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನದ ಪೂರ್ವಭಾವಿಯಾಗಿ ಫೆಬ್ರವರಿ 14ರಂದು ರಾಜ್ಯ ಸರ್ಕಾರಿ ನೌಕರರ ಸಂಘ ಸಭೆಯೊಂದನ್ನು ಕರೆದಿದೆ. ರಾಜ್ಯದ ವಿವಿಧ ಇಲಾಖೆಗಳ ವೃಂದ ಸಂಘಗಳ ಹಾಗೂ ಸೇವಾ ಸಂಘಗಳ ಅಧ್ಯಕ್ಷರುಗಳು ಸಭೆಯಲ್ಲಿ ಪಾಲ್ಗೊಂಡು ಸಲಹೆ-ಸೂಚನೆಗಳನ್ನು ನೀಡಿ ಸಭೆಯನ್ನು ಯಶಸ್ವಿಗೊಳಿಸಲು ಮನವಿ ಮಾಡಲಾಗಿದೆ.
ಕರ್ನಾಟಕದ ಸರ್ಕಾರಿ ನೌಕರರು ಸರ್ಕಾರದ ಮುಂದೆ ಮೂರು ಪ್ರಮುಖ ಬೇಡಿಕೆಗಳನ್ನು ಇಟ್ಟಿದ್ದಾರೆ. ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ಉದ್ಘಾಟನೆ ಮಾಡಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮೇಳನದಲ್ಲಿ ಯಾವ ಘೋಷಣೆ ಮಾಡಲಿದ್ದಾರೆ ಎಂದು ಕಾದು ನೋಡಬೇಕಿದೆ.
ಕರ್ನಾಟಕದ ಕಾಂಗ್ರೆಸ್ ಸರ್ಕಾರ ಕೆ. ಸುಧಾಕರ್ ನೇತೃತ್ವದ 7ನೇ ವೇತನ ಆಯೋಗದ ಆಯೋಗದ ಅವಧಿಯನ್ನು 15/3/2024ರ ತನಕ ವಿಸ್ತರಣೆ ಮಾಡಿದೆ. ಆದರೆ ವರದಿ ನೀಡುವ ಸಮಯಕ್ಕೆ ಲೋಕಸಭೆ ಚುನಾವಣೆ ನೀತಿ ಸಂಹಿತೆ ಎದುರಾಗುವ ನಿರೀಕ್ಷೆ ಇದೆ. ಆದ್ದರಿಂದ
7ನೇ ವೇತನ ಆಯೋಗದಿಂದ ಶೀಘ್ರ ವರದಿ ಪಡೆದು ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳನ್ನು ಪೂರ್ಣ ಪ್ರಮಾಣದಲ್ಲಿ ಪರಿಷ್ಕರಿಸಿ ಆದೇಶ ಹೊರಡಿಸಬೇಕು ಎಂದು ನೌಕರರು ಬೇಡಿಕೆ ಇಟ್ಟಿದ್ದಾರೆ.
ರಾಜ್ಯದ 7ನೇ ವೇತನ ಆಯೋಗದಿಂದ ಶೀಘ್ರವಾಗಿ ವರದಿಯನ್ನು ಪಡೆದು ಸರ್ಕಾರ ಈಗಾಗಲೇ ನೀಡಿರುವ ಶೇಕಡ 17ರಷ್ಟು ಮಧ್ಯಂತರ ಪರಿಹಾರ ಭತ್ಯೆಯು ಸೇರಿದಂತೆ 40ರಷ್ಟು ಫಿಟ್ ಮೆಂಟ್ ಸೌಲಭ್ಯವನ್ನು ರಾಜ್ಯ ಸರ್ಕಾರಿ ನೌಕರರು ಹಾಗೂ ಸರ್ಕಾರದ ಅಧೀನಕ್ಕೊಳಪಡುವ ನೌಕರರಿಗೆ ದಿನಾಂಕ 1/7/2022 ರಿಂದ ಜಾರಿಗೆ ಬರುವಂತೆ ಸರ್ಕಾರಿ ಆದೇಶ ಹೊರಡಿಸಬೇಕು ಎಂಬುದು ಪ್ರಮುಖ ಬೇಡಿಕೆ.












Click it and Unblock the Notifications