ರಾಜ್ಯದಲ್ಲಿ ಇನ್ನೂ ಎರಡು ದಿನ ಗುಡುಗು, ಮಳೆಯ ಮನ್ಸೂಚನೆ
ಬೆಂಗಳೂರು, ಏಪ್ರಿಲ್ 21 : ಬೆಂಗಳೂರು ನಗರ ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಇನ್ನೂ ಎರಡು ದಿನ ಗುಡುಗು ಸಹಿತ ಮಳೆಯಾಗಲಿದೆ. ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ಶನಿವಾರ ಸಂಜೆಯೂ ಮಳೆಯಾಗಿತ್ತು.
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮಳೆಯ ಕುರಿತು ಮುನ್ಸೂಚನೆ ನೀಡಿದೆ. ಬೆಂಗಳೂರು, ದಕ್ಷಿಣ ಒಳನಾಡು, ಮಲೆನಾಡು ಭಾಗದಲ್ಲಿ ಎರಡು ದಿನ ಮಳೆ ಮುಂದುವರೆಯಲಿದೆ ಎಂದು ತಿಳಿಸಿದೆ.
ಈ ವಾರ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗಿದೆ. ಶನಿವಾರ ಮೈಸೂರು, ಬೆಂಗಳೂರು, ಮಂಡ್ಯ, ಚಾಮರಾಜನಗರ, ಕೋಲಾರ, ರಾಮನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ವಿವಿಧ ಜಿಲ್ಲೆಗಳ ಅಲ್ಲಲ್ಲಿ ಮಳೆಯಾಗಿದೆ.

ಒಂದು ವಾರದಿಂದ ರಾಜ್ಯದ ವಿವಿಧ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ. ಆದರೆ, ಉಷ್ಣಾಂಶ ಮಾತ್ರ ಕಡಿಮೆಯಾಗಿಲ್ಲ. ದಕ್ಷಿಣ ಒಳನಾಡು, ಮಲೆನಾಡಿನಲ್ಲಿ 32 ರಿಂದ 36 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.
ಉತ್ತರ ಒಳನಾಡು ಭಾಗದಲ್ಲಿ ಸರಾಸರಿ 40 ರಿಂದ 44 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಪೂರ್ವ ಮುಂಗಾರಿನ ಈ ಅವಧಿಯಲ್ಲಿ ಉಷ್ಣಾಂಶ ಇಳಿಕೆಯಾದರೆ ಮುಂಗಾರು ಮಳೆಯ ಮೇಲೆ ಪ್ರಭಾವ ಉಂಟಾಗಲಿದೆ.
ಭಾರತೀಯ ಹವಾಮಾನ ಇಲಾಖೆ ಈ ಬಾರಿಯ ಮುಂಗಾರಿನ ಕುರಿತು ಈಗಾಗಲೇ ಮುನ್ಸೂಚನೆ ನೀಡಿದೆ. ಸಾಮಾನ್ಯ ಮುಂಗಾರು ಇರಲಿದ್ದು, ದೇಶದ ಎಲ್ಲಾ ಭಾಗಗಳಲ್ಲೂ ಸಾಮಾನ್ಯ ಮಳೆಯಾಗಲಿದೆ ಎಂದು ಹೇಳಿದೆ. ಮೇ ಅಂತ್ಯದ ವೇಳೆಗೆ ಮುಂಗಾರು ಮಳೆ ಆರಂಭವಾಗುವ ನಿರೀಕ್ಷೆ ಇದೆ.












Click it and Unblock the Notifications