Udyoga Nidhi: ಕರ್ನಾಟಕದಲ್ಲಿ 1 ಲಕ್ಷ ಉದ್ಯೋಗ ಸೃಷ್ಟಿಗೆ ‘ಉದ್ಯೋಗ ನಿಧಿ’: 11 ಜಿಲ್ಲೆಗಳಿಗೆ ಸರ್ಕಾರದಿಂದ ಮಹತ್ವದ ಯೋಜನೆ ಘೋಷಣೆ!
ಕರ್ನಾಟಕದಲ್ಲಿ ಸಮತೋಲಿತ ಪ್ರಾದೇಶಿಕ ಅಭಿವೃದ್ಧಿಗೆ ಮತ್ತೊಂದು ಮಹತ್ವದ ಹೆಜ್ಜೆಯಾಗಿ, ಕಡಿಮೆ ಅಭಿವೃದ್ಧಿ ಹೊಂದಿರುವ 11 ಜಿಲ್ಲೆಗಳಲ್ಲಿ 1 ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸುವ ಉದ್ದೇಶದಿಂದ 'ಉದ್ಯೋಗ ನಿಧಿ' ಯೋಜನೆ ಪ್ರಸ್ತಾಪಿಸಲಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಹೇಳಿದ್ದಾರೆ.
ಈ ಯೋಜನೆಯಡಿ ಅರ್ಹ MSMEಗಳು ಹಾಗೂ ಕೈಗಾರಿಕಾ ಸಂಸ್ಥೆಗಳು ನೇಮಕ ಮಾಡಿಕೊಳ್ಳುವ ಪ್ರತಿ ಹೆಚ್ಚುವರಿ ಕಾರ್ಮಿಕರಿಗೆ ತಿಂಗಳಿಗೆ 2,500 ರೂಪಾಯಿಯಂತೆ ಗರಿಷ್ಠ 24 ತಿಂಗಳವರೆಗೆ ಪ್ರೋತ್ಸಾಹಧನ ಪಡೆಯಲಿವೆ. ವಾರ್ಷಿಕ 305 ಕೋಟಿ ರೂಪಾಯಿ ವೆಚ್ಚದ ಈ ಯೋಜನೆಯಡಿ, ಉದ್ಯೋಗ ಸೃಷ್ಟಿ ಹಾಗೂ ವೇತನ ಪಾವತಿಗಳನ್ನು ಪರಿಶೀಲಿಸಿ ಪ್ರೋತ್ಸಾಹಧನ ನೀಡಲಾಗುತ್ತದೆ. ಇದರಿಂದ ಉದ್ಯೋಗಗಳನ್ನು ಸೃಷ್ಟಿಸಿ, ಅವುಗಳನ್ನು ನಿರಂತರವಾಗಿ ಉಳಿಸಿಕೊಳ್ಳುವ ಉದ್ಯಮಗಳಿಗೆ ಮಾತ್ರ ಯೋಜನೆಯ ಪ್ರಯೋಜನ ತಲುಪಲಿದೆ ಎಂದೂ ಸಚಿವ ಪ್ರಿಯಾಂಕ್ ಖರ್ಗೆ ಅವರು ಹೇಳಿದ್ದಾರೆ.

ಕಲಬುರಗಿ, ಬೀದರ್, ರಾಯಚೂರು, ಯಾದಗಿರಿ ಹಾಗೂ ಬಾಗಲಕೋಟೆ ಸೇರಿದಂತೆ 11 ಜಿಲ್ಲೆಗಳಲ್ಲಿ ಕೈಗಾರಿಕೆಗಳು ಸ್ಥಾಪನೆಯಾಗಲು ಮತ್ತು ತಮ್ಮ ಕಾರ್ಯಾಚರಣೆಗಳನ್ನು ವಿಸ್ತರಿಸಲು ಈ ಯೋಜನೆ ಉತ್ತೇಜನ ನೀಡಲಿದೆ. 'ಯುವ ನಿಧಿ' ಯೋಜನೆಯೊಂದಿಗೆ ಸಮನ್ವಯ ಸಾಧಿಸುವ ಮೂಲಕ, ಯುವಜನರಿಗೆ ಸ್ಥಳೀಯವಾಗಿಯೇ ಹೆಚ್ಚಿನ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಗುರಿಯನ್ನು ಹೊಂದಿದೆ. ಹೂಡಿಕೆ ಮತ್ತು ಉದ್ಯೋಗಗಳನ್ನು ಯುವಜನರ ಮನೆಬಾಗಿಲಿಗೆ ತರುವುದು ನಮ್ಮ ಆದ್ಯತೆ. ತಮ್ಮದೇ ಪ್ರದೇಶದಲ್ಲಿ ಉತ್ತಮ ಅವಕಾಶಗಳನ್ನು ಪಡೆದು, ತಮ್ಮ ಭವಿಷ್ಯವನ್ನು ತಾವೇ ಕಟ್ಟಿಕೊಳ್ಳಲು ರಾಜ್ಯದ ಯುವಜನರಿಗೆ ಹೆಚ್ಚಿನ ಅವಕಾಶ ಕಲ್ಪಿಸುವುದು ನಮ್ಮ ಸಂಕಲ್ಪ ಎಂದಿದ್ದಾರೆ.
ಮಾದಕ ವಸ್ತುಗಳ ವಿರುದ್ಧ ನಮ್ಮ ಸಮರ ನಿರಂತರ
ಯುವಜನರ ಭವಿಷ್ಯವನ್ನು ಕತ್ತಲೆಗೆ ತಳ್ಳುವ ಮಾದಕ ವಸ್ತುಗಳ ಜಾಲವನ್ನು ಮಟ್ಟಹಾಕಲು ಕರ್ನಾಟಕ ಸರ್ಕಾರ ಹಾಗೂ ಪೊಲೀಸ್ ಇಲಾಖೆಯ ಕಾರ್ಯ ನಿರಂತರವಾಗಿರಲಿದೆ. ಬೆಂಗಳೂರು ಪೊಲೀಸರ ಮಹತ್ವದ ಕಾರ್ಯಾಚರಣೆಯಲ್ಲಿ 11 ಕೆಜಿ ಎಂಡಿಎಂಎ, 2 ಕೆಜಿ ಹೈಡ್ರೋಗಾಂಜಾ ಹಾಗೂ 10 ಕೆಜಿ ಗಾಂಜಾ ಸೇರಿದಂತೆ ಒಟ್ಟು ₹24.22 ಕೋಟಿ ಮಾರುಕಟ್ಟೆ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಹೇಳಿದ್ದಾರೆ.
ಇನ್ನು ಈ ಕಾರ್ಯಾಚರಣೆಯಲ್ಲಿ 5 ಜನ ಆರೋಪಿಗಳನ್ನು ಬಂಧಿಸಲಾಗಿದೆ. ಮಾದಕ ವಸ್ತುಗಳ ಮಾರಾಟ, ಸಾಗಣೆ ಹಾಗೂ ಜಾಲದ ವಿರುದ್ಧ ಕಠಿಣ ಕ್ರಮ ಮುಂದುವರಿಯಲಿದೆ. ನಮ್ಮ ಗುರಿ ಕೇವಲ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳುವುದಲ್ಲ; ಡ್ರಗ್ಸ್ ಜಾಲವನ್ನು ಬೇರುಸಹಿತ ಕಿತ್ತೊಗೆದು, ನಮ್ಮ ಯುವಜನತೆಗೆ ಸುರಕ್ಷಿತ ಮತ್ತು ಆರೋಗ್ಯಕರ ಭವಿಷ್ಯವನ್ನು ನಿರ್ಮಿಸುವುದು ಎಂದಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಡ್ರೋನ್ ಪರೀಕ್ಷಾ ಕೇಂದ್ರ ಸ್ಥಾಪನೆ
ಕರ್ನಾಟಕವನ್ನು ಡ್ರೋನ್ ತಂತ್ರಜ್ಞಾನ, ಪರೀಕ್ಷೆ ಮತ್ತು ಪ್ರಮಾಣೀಕರಣದ ಪ್ರಮುಖ ಕೇಂದ್ರವನ್ನಾಗಿಸುವತ್ತ ಮತ್ತೊಂದು ಮಹತ್ವದ ಹೆಜ್ಜೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಜೀಡರಹಳ್ಳಿ ಗ್ರಾಮದಲ್ಲಿ ಡ್ರೋನ್ ಪರೀಕ್ಷಾ ಕೇಂದ್ರ ಸ್ಥಾಪನೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಸುಮಾರು 19.26 ಎಕರೆ ಸರ್ಕಾರಿ ಜಮೀನಿನಲ್ಲಿ ನಿರ್ಮಾಣವಾಗಲಿರುವ ಈ ಕೇಂದ್ರಕ್ಕೆ ರಾಜ್ಯ ಸರ್ಕಾರ ₹42.83 ಕೋಟಿ ರೂ. ನೆರವು ನೀಡಲಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಹೇಳಿದ್ದಾರೆ.
ಡ್ರೋನ್ ಗಳ ಹಾರಾಟ ಪರೀಕ್ಷೆ, ಕಾರ್ಯಕ್ಷಮತೆ ಹಾಗೂ ಸುರಕ್ಷತಾ ಮೌಲ್ಯಮಾಪನ, ಪ್ರಮಾಣೀಕರಣ ಮತ್ತು BVLOS (ದೃಶ್ಯ ವ್ಯಾಪ್ತಿಯಾಚೆಗಿನ) ಹಾರಾಟ ಪರೀಕ್ಷೆಗಳಿಗೆ ಅಗತ್ಯವಿರುವ ಆಧುನಿಕ ಮೂಲಸೌಕರ್ಯವನ್ನು ಇಲ್ಲಿ ಅಭಿವೃದ್ಧಿಪಡಿಸಲಾಗುವುದು. ನವೋದ್ಯಮಗಳು, ಕೈಗಾರಿಕೆಗಳು, ಶೈಕ್ಷಣಿಕ ಸಂಸ್ಥೆಗಳು, ರಕ್ಷಣಾ ಕ್ಷೇತ್ರ ಹಾಗೂ ಜಾಗತಿಕ ತಂತ್ರಜ್ಞಾನ ಸಂಸ್ಥೆಗಳಿಗೆ ಇದು ಹೊಸ ಅವಕಾಶಗಳನ್ನು ಸೃಷ್ಟಿಸಲಿದೆ.
ಬೆಂಗಳೂರು ಮಾತ್ರವಲ್ಲ - ಕರ್ನಾಟಕದ ಪ್ರತಿಯೊಂದು ಭಾಗವೂ ಹೈಟೆಕ್ ಉದ್ಯಮಗಳ ಬೆಳವಣಿಗೆಯ ಕೇಂದ್ರವಾಗಬೇಕು ಎಂಬುದು ನಮ್ಮ ಗುರಿ. ಚಿಕ್ಕಬಳ್ಳಾಪುರದ ಈ ಡ್ರೋನ್ ಪರೀಕ್ಷಾ ಕೇಂದ್ರವು ನವೋದ್ಯಮ, ಸಂಶೋಧನೆ ಮತ್ತು ಕೈಗಾರಿಕೆಯನ್ನು ಒಂದೇ ವೇದಿಕೆಯಲ್ಲಿ ಸಂಪರ್ಕಿಸುವ ಪ್ರಮುಖ ಕೇಂದ್ರವಾಗಿ ಹೊರಹೊಮ್ಮಲಿದೆ.
ಡ್ರೋನ್ ತಂತ್ರಜ್ಞಾನದಲ್ಲಿ ಕರ್ನಾಟಕದ ಮುನ್ನಡೆಯನ್ನು ಮತ್ತಷ್ಟು ಬಲಪಡಿಸಿ, ಜಾಗತಿಕ ಮಟ್ಟದ ತಂತ್ರಜ್ಞಾನ ಮತ್ತು ನಾವೀನ್ಯತೆಯ ತಾಣವಾಗಿ ಕರ್ನಾಟಕವನ್ನು ರೂಪಿಸುವ ನಮ್ಮ ಪ್ರಯತ್ನ ಮುಂದುವರಿಯಲಿದೆ ಎಂದಿದ್ದಾರೆ.
ಕರ್ನಾಟಕದಲ್ಲಿ ಉರ್ದು ಮಾಧ್ಯಮದಲ್ಲಿ ಶಿಕ್ಷಣದ ಸ್ಥಿತಿಗತಿ
ಕರ್ನಾಟಕದಲ್ಲಿ ಉರ್ದು ಮಾಧ್ಯಮದಲ್ಲಿ ಶಿಕ್ಷಣದ ಸ್ಥಿತಿಗತಿ, ಸಮಸ್ಯೆಗಳು ಹಾಗೂ ಅಗತ್ಯ ಸುಧಾರಣೆಗಳಿಗೆ ಸಂಬಂಧಿಸಿದಂತೆ ಸಿದ್ಧಪಡಿಸಿರುವ 'ಅಧ್ಯಯನ ವರದಿ-2025'ಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಗುರುವಾರ ಸ್ವೀಕರಿಸಿದರು. ಅಂಜುಮನ್ ತರ್ಖಿ ಉರ್ದು (ಹಿಂದ್), ಕರ್ನಾಟಕ, ಬೆಂಗಳೂರು ವತಿಯಿಂದ ಸಿದ್ಧಪಡಿಸಲಾಗಿರುವ ವರದಿಯನ್ನು ವಿಧಾನ ಪರಿಷತ್ ಸಭಾಪತಿ ಸಲೀಂ ಅಹಮದ್ ಅವರ ಕಚೇರಿಯಲ್ಲಿ ಸಚಿವರಿಗೆ ಹಸ್ತಾಂತರಿಸಲಾಯಿತು.
ಕರ್ನಾಟಕದಲ್ಲಿ ಉರ್ದು ಮಾಧ್ಯಮದ ಶಿಕ್ಷಣದ ಪ್ರಸ್ತುತ ಸ್ಥಿತಿಗತಿ, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಎದುರಿಸುತ್ತಿರುವ ಸಮಸ್ಯೆಗಳು, ಶೈಕ್ಷಣಿಕ ಗುಣಮಟ್ಟ ಸುಧಾರಣೆ ಸೇರಿದಂತೆ ವಿವಿಧ ಅಂಶಗಳನ್ನು ಒಳಗೊಂಡಿರುವ ವರದಿಯನ್ನು ಸಚಿವರು ಸ್ವೀಕರಿಸಿದರು.


Click it and Unblock the Notifications
