ಉಕ್ರೇನ್‌ನಿಂದ ವಾಪಸ್ಸಾದ ವಿದ್ಯಾರ್ಥಿಗಳಿಗೆ ಕರ್ನಾಟಕದಲ್ಲೇ ಉಚಿತ ಶಿಕ್ಷಣ
ಬೆಂಗಳೂರು, ಮಾರ್ಚ್ 21: ಉಕ್ರೇನ್‌ನಿಂದ ವಾಪಸ್ ಆಗಿರುವ ವೈದ್ಯಕೀಯ ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ತಿಳಿಸಿದ್ದಾರೆ.
ಸೋಮವಾರ ವಿಧಾನಸೌಧದಲ್ಲಿ ವಿದ್ಯಾರ್ಥಿಗಳ ಜೊತೆ ಸಭೆ ನಡೆಸಿದ ಸಚಿವರು ತದನಂತರದಲ್ಲಿ ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದರು. ರಾಜ್ಯದ 60 ವೈದ್ಯಕೀಯ ಕಾಲೇಜುಗಳಲ್ಲಿ ಉಕ್ರೇನ್‌ನಿಂದ ವಾಪಸ್ಸಾದವರ ಶಿಕ್ಷಣಕ್ಕೆ ಅವಕಾಶ ನೀಡಲಾಗುವುದು. ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಉನ್ನತ ಮಟ್ಟದ ಸಮಿತಿ ರಚಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.
ಉಕ್ರೇನ್ ಹಾಗೂ ರಷ್ಯಾ ನಡುವೆ ನಿರಂತರವಾಗಿ ಯುದ್ಧ ನಡೆಯುತ್ತಿದೆ. ಅಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ 700ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ರಾಜ್ಯಕ್ಕೆ ಸುರಕ್ಷಿತವಾಗಿ ಕರೆ ತರಲಾಗಿದೆ. ಅವರ ಶೈಕ್ಷಣಿಕ ಭವಿಷ್ಯ ರೂಪಿಸುವ ಬಗ್ಗೆ ಚರ್ಚಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದರು. ಅದರಂತೆ ಚರ್ಚೆ ನಡೆಸಿದ್ದು, ತಾತ್ಕಾಲಿಕವಾಗಿ ಒಂದು ಅಭಿಪ್ರಾಯಕ್ಕೆ ಬರಲಾಗಿದೆ ಎಂದು ಸಚಿವರು ವಿವರಿಸಿದರು.

60 ಮೆಡಿಕಲ್ ಕಾಲೇಜುಗಳಲ್ಲಿ ಶಿಕ್ಷಣಕ್ಕೆ ಅವಕಾಶ:
ಮೊದಲ ವರ್ಷದಿಂದ ಆರಂಭವಾಗಿ ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳು ಇಲ್ಲಿದ್ದಾರೆ. ರಾಜ್ಯದಲ್ಲಿ 60 ವೈದ್ಯಕೀಯ ಕಾಲೇಜುಗಳಿವೆ. ಈ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ತಮ್ಮ ವ್ಯಾಸಂಗವನ್ನು ಆಯಾ ವರ್ಷದಲ್ಲೇ ಮುಂದುವರಿಸುವಂತೆ ಕ್ರಮ ತೆಗೆದುಕೊಳ್ಳಲಾಗುವುದು. ಈಗ ನಡೆಯುತ್ತಿರುವ ತರಬೇತಿಯನ್ನೇ ಮುಂದುವರಿಸಲಾಗುವುದು ಎಂದು ತಿಳಿಸಿದರು.

ಉನ್ನತ ಮಟ್ಟದ ಸಮಿತಿ ರಚನೆ:
ಉಕ್ರೇನ್‌ನಿಂದ ಹಿಂದಿರುಗಿದ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವುದು, ಎನ್‍ಎಂಸಿ ಹಾಗೂ ಕೇಂದ್ರ ಸರ್ಕಾರಕ್ಕೆ ಸಲ್ಲಿಸಬೇಕಾದ ಬೇಡಿಕೆಗಳನ್ನು ಸಿದ್ಧಪಡಿಸುವುದಕ್ಕಾಗಿ ವಿಶೇಷ ಸಮಿತಿಯೊಂದನ್ನು ರಚಿಸಲಾಗುವುದು. ಈ ಸಮಿತಿಯಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ, ನಿರ್ದೇಶಕರು ಹಾಗೂ ಮೆಡಿಕಲ್ ಕಾಲೇಜುಗಳ ಕೆಲ ಡೀನ್ ಇರಲಿದ್ದಾರೆ. ಉನ್ನತ ಮಟ್ಟದ ಸಮಿತಿಯ ಮೂಲಕ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಬೇಡಿಕೆಗಳನ್ನು ಕೇಂದ್ರ ಸರ್ಕಾರ ಹಾಗೂ ಕೇಂದ್ರ ಆರೋಗ್ಯ ಸಚಿವರ ಮುಂದೆ ಇಡಲಾಗುವುದು. ಈಗಾಗಲೇ ಪ್ರಧಾನಿ ನರೇಂದ್ರ ಮೋದಿಯವರು ಈ ಕುರಿತು ಕ್ರಮ ವಹಿಸುತ್ತಿದ್ದಾರೆ ಎಂದರು.
ಯುದ್ಧ ಬೇಗ ಕೊನೆಯಾಗಲಿ ಎಂಬುದು ಎಲ್ಲರ ಆಶಯ. ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳ ಮನಸ್ಥಿತಿ ಹೇಗಿರಲಿದೆ ಎಂಬುದನ್ನು ಗಮನಿಸಿ ಕಾನೂನಿನ ಚೌಕಟ್ಟಿನೊಳಗೆ ಕ್ರಮ ವಹಿಸಲಾಗುವುದು. ಅವರ ಉತ್ತಮ ಭವಿಷ್ಯಕ್ಕೆ ಎಲ್ಲ ವ್ಯವಸ್ಥೆ ಮಾಡಲಾಗುವುದು ಎಂದು ಸಚಿವರು ತಿಳಿಸಿದರು.

ವಿದ್ಯಾರ್ಥಿಗಳು ಸುರಕ್ಷಿತವಾಗಿ ಹಿಂದಿಗಿರುವುದೇ ಸೌಭಾಗ್ಯ:
ಉಕ್ರೇನ್‌ನಿಂದ ವಿದ್ಯಾರ್ಥಿಗಳು ಸುರಕ್ಷಿತವಾಗಿ ಹಿಂದಿಗಿರುವುದೇ ಒಂದು ಸೌಭಾಗ್ಯ. ಪ್ರಧಾನಿ ನರೇಂದ್ರ ಮೋದಿ ಈ ವಿಚಾರದಲ್ಲಿ ಹೆಚ್ಚು ಆಸಕ್ತಿ ವಹಿಸಿದ್ದಾರೆ. ವಿದ್ಯಾರ್ಥಿಗಳ ಭವಿಷ್ಯವನ್ನು ಉಜ್ವಲವಾಗಿ ಬೆಳಗಬೇಕಿದೆ. ಎಲ್ಲರೂ ಉತ್ತಮ ಮನೋಸ್ಥೈರ್ಯದಿಂದ ಇರಬೇಕು. ವಿದ್ಯಾರ್ಥಿಗಳಿಗೂ ವಿದ್ಯಾಭ್ಯಾಸದ ಬಗ್ಗೆ ಚಿಂತೆ ಇತ್ತು. ಈಗ ಸರ್ಕಾರ ಮಾಡಿರುವ ತೀರ್ಮಾನಕ್ಕೆ ವಿದ್ಯಾರ್ಥಿಗಳು ಕೂಡ ಒಪ್ಪಿದ್ದಾರೆ. ವೈದ್ಯಕೀಯ ಶಿಕ್ಷಣದಲ್ಲಿ ಮಾರ್ಪಾಡು ಮಾಡುವ ಬಗ್ಗೆ ವಿದ್ಯಾರ್ಥಿಗಳು ಸಲಹೆ ನೀಡಿದ್ದಾರೆ. ಈ ಬಗ್ಗೆಯೂ ಸಮಿತಿಯಲ್ಲಿ ಚರ್ಚೆ ಮಾಡಲಾಗುತ್ತದೆ ಎಂದರು.

ಯಾವುದೇ ಶುಲ್ಕ ಇಲ್ಲ:
ರಾಜ್ಯದ ಮೆಡಿಕಲ್ ಕಾಲೇಜುಗಳಲ್ಲಿ ಈ ವಿದ್ಯಾರ್ಥಿಗಳನ್ನು ಅಧಿಕೃತವಾಗಿ ನೋಂದಣಿ ಮಾಡಿಕೊಳ್ಳುತ್ತಿಲ್ಲ. ಆದರೂ ಕಲಿಕೆ, ತರಬೇತಿಗಳು ಇಲ್ಲಿ ಮುಂದುವರಿಯುತ್ತದೆ. ಅದಕ್ಕಾಗಿ ವಿದ್ಯಾರ್ಥಿಗಳು ಯಾವುದೇ ಶುಲ್ಕ ಪಾವತಿ ಮಾಡಬೇಕಾಗಿಲ್ಲ. ಉಚಿತವಾಗಿ ಶಿಕ್ಷಣ ಮುಂದುವರಿಸಬಹುದು ಎಂದು ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದರು.












Click it and Unblock the Notifications