ಕೇಂದ್ರ ಬಜೆಟ್ ಬಗ್ಗೆ ಸರಣಿ ಟ್ವೀಟ್ ಮಾಡಿದ ಎಚ್.ಡಿ.ಕುಮಾರಸ್ವಾಮಿ
Recommended Video
ಬೆಂಗಳೂರು, ಜುಲೈ 05 : 'ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಚೊಚ್ಚಲ ಬಜೆಟ್ ಇಟ್ಟುಕೊಂಡಿದ್ದ ನಿರೀಕ್ಷೆಗಳನ್ನು ಹುಸಿಯಾಗಿಸಿದೆ' ಎಂದು ಕರ್ನಾಟಕದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು.
ಶುಕ್ರವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ನರೇಂದ್ರ ಮೋದಿ ಸರ್ಕಾರದ 2ನೇ ಮತ್ತು ತಮ್ಮ ಚೊಚ್ಚಲ ಬಜೆಟ್ ಮಂಡನೆ ಮಾಡಿದರು. ಅಮೆರಿಕ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬಜೆಟ್ ಬಗ್ಗೆ ಸರಣಿ ಟ್ವೀಟ್ ಮಾಡಿದ್ದಾರೆ.
'ನಮ್ಮ ರಾಜ್ಯವನ್ನು ರಾಜ್ಯಸಭೆಯಲ್ಲಿ ಪ್ರತಿನಿಧಿಸುತ್ತಿರುವ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ರಾಜ್ಯದ ರೈಲ್ವೆ ಯೋಜನೆಗಳಿಗೆ ಅದರಲ್ಲೂ ಸರ್ಬನ್ ರೈಲ್ವೆ ಯೋಜನೆಗಳಿಗೆ ಹೆಚ್ಚಿನ ಕೊಡುಗೆ ನೀಡುವರೆಂದು ನಿರೀಕ್ಷಿಸಿದ್ದೆ. ಈ ನಿಟ್ಟಿನಲ್ಲಿ ಯಾವುದೇ ಘೋಷಣೆ ಮಾಡದಿರುವುದು ನಿರಾಶೆ ತಂದಿದೆ' ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು 2019-20ರ ಕೇಂದ್ರ ಬಜೆಟ್ ಅನ್ನು ಟೀಕಿಸಿದ್ದಾರೆ. ರಾಜ್ಯವನ್ನು ಪ್ರತಿನಿಧಿಸುವ ಸಚಿವರು ರಾಜ್ಯಕ್ಕೆ ಯಾವುದೇ ಕೊಡುಗೆ ನೀಡಿಲ್ಲ ಎಂದು ಆರೋಪಿಸಿದ್ದಾರೆ.

ಉತ್ತೇಜನ ನೀಡುವ ಯೋಜನೆ ಸ್ವಾಗತಾರ್ಹ
'ರೈತ ಉತ್ಪಾದಕ ಸಂಘಗಳ ಸ್ಥಾಪನೆಗೆ ಒತ್ತು, ಎಪಿಎಂಸಿಗಳಲ್ಲಿ ಆನ್ ಲೈನ್ ಮಾರುಕಟ್ಟೆ ಬಲಪಡಿಸುವ ಕಾರ್ಯಕ್ರಮ ಹಾಗೂ ಗ್ರಾಮೀಣ ಸಾಂಪ್ರದಾಯಿಕ ಕೈಗಾರಿಕೆಗಳಿಗೆ ಉತ್ತೇಜನ ನೀಡುವ ಯೋಜನೆಗಳು ಸ್ವಾಗತಾರ್ಹ. ಆದರೆ ರೈತರ ಆತ್ಮಸ್ಥೈರ್ಯ ಹೆಚ್ಚಿಸಲು ಇನ್ನಷ್ಟು ಕಾರ್ಯಕ್ರಮಗಳನ್ನು ರೂಪಿಸಿದ್ದರೆ ಚೆನ್ನಾಗಿತ್ತು' ಎಂದು ಎಚ್.ಡಿ.ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.

ಎಚ್.ಡಿ.ಕುಮಾರಸ್ವಾಮಿ ಕಳವಳ
'ಜಿಎಸ್‌ಟಿ ತೆರಿಗೆಯಲ್ಲಿ ರಾಜ್ಯದ ಪಾಲಿನ ಮೊತ್ತ ಕಡಿಮೆಯಾಗುವ ಸಾಧ್ಯತೆ ಇದ್ದು, ರಾಜ್ಯದ ಪಾಲಿನಲ್ಲಿ ಸುಮಾರು 1600 ಕೋಟಿ ರೂ. ಗಳಷ್ಟು ಕೊರತೆಯಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. ಇದರಿಂದ ರಾಜ್ಯಗಳ ಆರ್ಥಿಕತೆಯ ಮೇಲೆ ದೊಡ್ಡ ಹೊಡೆತ ಬೀಳಲಿದೆ' ಎಂದು ಎಚ್.ಡಿ.ಕುಮಾರಸ್ವಾಮಿ ಕಳವಳ ವ್ಯಕ್ತಪಡಿಸಿದ್ದಾರೆ.

ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ
'ಪೆಟ್ರೋಲ್, ಡೀಸೆಲ್ ಗಳ ಮೇಲೆ ಸೆಸ್ ಏರಿಕೆ ಮಾಡಿರುವುದರಿಂದ ರಾಜ್ಯವು ಇಂಧನ ಮೇಲೆ ಸೆಸ್ ವಿಧಿಸಲು ಅವಕಾಶ ಕಡಿಮೆ ಮಾಡಿದಂತಾಗಿದೆ. ಅಲ್ಲದೆ, ಇಂಧನ ಬೆಲೆ ಏರಿಕೆಯಿಂದ ಪ್ರತಿಯೊಬ್ಬರಿಗೂ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಹೊರೆಯಾಗಲಿದೆ' ಎಂದು ಕುಮಾರಸ್ವಾಮಿ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರೈಲ್ವೆ ಯೋಜನೆ ಬಗ್ಗೆ ಮಾಹಿತಿ ಇಲ್ಲ
'ಭಾರತದಲ್ಲಿ ಆಯವ್ಯಯ ಕೇವಲ ಸರ್ಕಾರದ ಆಶಯ ತಿಳಿಸುವ ದಾಖಲೆಯಲ್ಲ. ಆಯವ್ಯಯ ಭಾಷಣ, ಜನರಿಗೆ ಮಾಹಿತಿ ಒದಗಿಸುವ ಪ್ರಮುಖ ಮಾಧ್ಯಮ. ಈ ಆಯವ್ಯಯದಲ್ಲಿ ಕೆಲವು ಉದ್ದೇಶಗಳನ್ನು ಉಲ್ಲೇಖಿಸಲಾಗಿದೆ. ಅದರಾಚೆಗೆ ಯಾವ ಮಾಹಿತಿಯೂ ಇಲ್ಲ. ಅದರಲ್ಲಿಯೂ ವಿಶೇಷವಾಗಿ ರೈಲ್ವೆ ಯೋಜನೆಗಳ ಕುರಿತು ಯಾವುದೇ ನಿಖರ ಮಾಹಿತಿ ಇಲ್ಲ' ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.












Click it and Unblock the Notifications