ಪ್ರಹ್ಲಾದ್ ಜೋಶಿಗೆ ಕಲ್ಲಿದ್ದಲು ಹಾಗೂ ಸಂಸದೀಯ ವ್ಯವಹಾರ ಖಾತೆ ಮಿಸ್; ಸಿಕ್ಕ ಖಾತೆ ಯಾವುದು?
ಬೆಂಗಳೂರು, ಜೂನ್ 11: ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಈ ಬಾರಿ ರಾಜ್ಯದ ಐವರಿಗೆ ಮಂತ್ರಿ ಭಾಗ್ಯ ಸಿಕ್ಕಿದೆ. ಕೇಂದ್ರ ಸಂಪುಟದಲ್ಲಿ ರಾಜ್ಯದ ಪ್ರಾತಿನಿಧ್ಯವನ್ನು ಒಕ್ಕಲಿಗ, ಲಿಂಗಾಯತ, ಬ್ರಾಹ್ಮಣ ಸಮೀಕರದಡಿ ಪರಿಗಣಿಸಲಾಗಿದ್ದು, ಐವರು ಸಂಸದರಿಗೆ ಮಂತ್ರಿ ಭಾಗ್ಯ ಒಲಿದು ಬಂದಿದೆ. ಇದೀಗ ಐವರಿಗೂ ಖಾತೆಗಳ ಹಂಚಿಕೆಯಾಗಿದ್ದು, ಬಯಸಿದ ಖಾತೆ ಕೈ ತಪ್ಪಿದ ಹಿನ್ನೆಲೆ ಕೆಲವರಿಗೆ ನಿರಾಸೆಯುಂಟಾಗಿದೆ.
ಹೌದು, ಕಳೆದ ಬಾರಿಯಂತೆ ನಿರ್ಮಲಾ ಸೀತಾರಾಮನ್ ಅವರಿಗೆ ಹಣಕಾಸು ಖಾತೆಯನ್ನೇ ನೀಡಲಾಗಿದೆ. ಕುಮಾರಸ್ವಾಮಿ ಅವರಿಗೆ ಬೃಹತ್ ಕೈಗಾರಿಕೆ ಖಾತೆ ನೀಡಲಾಗಿದ್ದರೆ, ಪ್ರಲ್ಹಾದ್ ಜೋಶಿ ಅವರಿಗೆ ಕಲ್ಲಿದ್ದಲು ಹಾಗೂ ಸಂಸದೀಯ ವ್ಯವಹಾರಗಳ ಖಾತೆ ಸಿಗುತ್ತದೆ ಎಂಬ ನಿರೀಕ್ಷೆ ಇತ್ತು. ಆದರೆ, ಈ ಖಾತೆ ಕೈ ತಪ್ಪಿದ್ದು, ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಹೊಸ ಮತ್ತು ನವೀಕರಿಸಬಹುದಾದ ಇಂಧನ ಖಾತೆ ಸಿಕ್ಕಿದೆ.

ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಸತತ 5ನೇ ಬಾರಿ ಐತಿಹಾಸಿಕ ಗೆಲುವು ಸಾಧಿಸಿರುವ ಪ್ರಲ್ಹಾದ ಜೋಶಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಹೊಸ ಹೊಣೆಗಾರಿಕೆ ನೀಡಿದ್ದಾರೆ. ಮೋದಿ ಸರ್ಕಾರದಲ್ಲಿ ಸತತ ಎರಡನೇ ಬಾರಿ ಕ್ಯಾಬಿನೆಟ್ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಜೋಶಿ ಅವರಿಗೆ ಆಹಾರ ಮತ್ತು ಗ್ರಾಹಕ ವ್ಯವಹಾರ ಖಾತೆ ಜತೆಗೆ ನವೀಕರಿಸಬಹುದಾದ ಇಂಧನ ಖಾತೆಯನ್ನೂ ನೀಡಲಾಗಿದೆ.
ಪ್ರಧಾನಿ ಮೋದಿ ಅವರ 3ನೇ ಅವಧಿ ಸಂಪುಟದಲ್ಲಿ ಸ್ಥಾನ ಪಡೆದ ಎಲ್ಲರಿಗೂ ಸೋಮವಾರ ಸಂಜೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಖಾತೆ ಹಂಚಿಕೆ ಮಾಡಲಾಗಿದೆ. ನರೇಂದ್ರ ಮೋದಿ ಅವರ ಎರಡನೇ ಅವಧಿಯಲ್ಲಿ ಪ್ರಲ್ಹಾದ್ ಜೋಶಿ ಅವರು ಸಂಸದೀಯ ವ್ಯವಹಾರ ಮತ್ತು ಕಲ್ಲಿದ್ದಲು, ಗಣಿ ಖಾತೆಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದರು. ಕಲ್ಲಿದ್ದಲು ಖಾತೆಯಲ್ಲಿ ಪ್ರಮುಖ, ಮಹತ್ವದ ಸುಧಾರಣೆ ತಂದು ಸ್ವತಃ ಪ್ರಧಾನಿ ಮೋದಿ ಅವರಿಂದಲೇ ಪ್ರಶಂಸೆಗೆ ಪಾತ್ರರಾಗಿದ್ದರು.
ಸಂಸದೀಯ ಸಚಿವರಾಗಿ ಸಹ ಸದನದಲ್ಲಿ ಎಲ್ಲರೊಂದಿಗೂ ಬೆರೆತು, ಸರ್ವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಬಹು ಅಚ್ಚುಕಟ್ಟಾಗಿ ನಿರ್ವಹಿಸಿದ್ದರು. ಇದೆಲ್ಲವನ್ನೂ ಮನಗಂಡಿರುವ ಪ್ರಧಾನಿ ಮೋದಿ ಅವರು ಈ ಬಾರಿ ಆಹಾರ ಮತ್ತು ಗ್ರಾಹಕ ವ್ಯವಹಾರ ಖಾತೆ ನೀಡಿದ್ದಾರೆ. ಕಳೆದ ಬಾರಿ ಪ್ರಲ್ಹಾದ ಜೋಶಿ ಕಲ್ಲಿದ್ದಲು ಮತ್ತು ಗಣಿ ಖಾತೆಯಲ್ಲಿ ತಂದ ಪರಿವರ್ತನೆ, ಸಾಧನೆ ಕಂಡು ಪ್ರಧಾನಿ ಮೋದಿ ಈ ಬಾರಿ ಮತ್ತೊಂದು ಖಾತೆ ನವೀಕರಿಸಬಹುದಾದ ಇಂಧನ ಖಾತೆಯ ಹೊಣೆಗಾರಿಕೆಯನ್ನೂ ಜೋಶಿ ಅವರ ಹೆಗಲಿಗೆ ಇರಿಸಿದ್ದಾರೆ.
ಕೇಂದ್ರದಲ್ಲಿ ಮತ್ತೆ ಸಚಿವ ಸ್ಥಾನ ಕಲ್ಪಿಸಿ ಪ್ರಮುಖ ಖಾತೆಗಳನ್ನು ನಿರ್ವಹಿಸಲು ಅವಕಾಶ ಕೊಟ್ಟ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಎನ್‌ಡಿಎ ಮೈತ್ರಿಕೂಟದ ಎಲ್ಲಾ ನಾಯಕರಿಗೆ ಪ್ರಲ್ಹಾದ ಜೋಶಿ ಧನ್ಯವಾದ ತಿಳಿಸಿದ್ದಾರೆ.












Click it and Unblock the Notifications