ಕೆಂಪೇಗೌಡರ ಹೆಸರನ್ನು ರಾಜಕೀಯಕ್ಕೆ ಬಳಸಿಕೊಂಡಿರುವುದು ಅಕ್ಷಮ್ಯ: ಎಚ್‌ಡಿಕೆ
ಬೆಂಗಳೂರು, ನವೆಂಬರ್ 10: ಬಿಜೆಪಿ ನಾಯಕರು ನಾಡಪ್ರಭು ಕೆಂಪೇಗೌಡರ ಹೆಸರನ್ನು ರಾಜಕೀಯಕ್ಕೆ ಬಳಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಕರ್ನಾಟಕ ಸರ್ಕಾರ ಮತ್ತು ಪ್ರಧಾನಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನ. 11ರಂದು ಪ್ರಧಾನಿ ನರೇಂದ್ರ ಮೋದಿ ಅವರಿಂದ ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿದ ಕುಮಾರಸ್ವಾಮಿ, ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ ನರೇಂದ್ರ ಮೋದಿ ಅವರನ್ನು ಕರೆತಂದರೆ ಬಿಜೆಪಿಗೆ ಒಕ್ಕಲಿಗ ಮತಗಳು ಬರುವುದಿಲ್ಲ. ಬಿಜೆಪಿಯವರು ಕೆಂಪೇಗೌಡರ ಹೆಸರನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆಇದು ಅಕ್ಷಮ್ಯ ಎಂದು ಆರೋಪಿಸಿದರು.
ಬಿಜೆಪಿಯವರು ಏನು ಮಾಡುತ್ತಿದ್ದಾರೆ ಎಂಬುದನ್ನು ಜನರು ಗಮನಿಸುತ್ತಿದ್ದಾರೆ. ಬಿಜೆಪಿ ರಾಜ್ಯ ಘಟಕಕ್ಕೆ ಭ್ರಮೆ ಹುಟ್ಟಿಸಿದೆ. ಪ್ರತಿಮೆ ಸ್ಥಾಪಿಸುವ ಮೂಲಕ ಒಕ್ಕಲಿಗ ಸಮುದಾಯದ ಮತ ಸೆಳೆಯಬಹುದು ಎಂದು ಬಿಜೆಪಿ ಲೆಕ್ಕಾಚಾರ ಹಾಕಿದ್ದು, ಬಿಜೆಪಿ ನಾಯಕರನ್ನು ಜನ ಆ ಭ್ರಮೆಯಿಂದ ಹೊರತರುತ್ತಾರೆ ಎಂದರು. ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ ನೀಡಿರುವ ಕುರಿತು ಮಾತನಾಡಿದ ಅವರು, 'ಪ್ರಧಾನಿ ಬರುತ್ತಾರೆ ಹೋಗುತ್ತಾರೆ. ಕೆಂಪೇಗೌಡ ಪ್ರತಿಮೆ ಅನಾವರಣ ಬಿಜೆಪಿ ಸರ್ಕಾರದ ನಿಯೋಜಿತ ಕಾರ್ಯಕ್ರಮ, ನಾನು ಇದಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡುವುದಿಲ್ಲ ಎಂದು ಹೇಳಿದರು.

ಎರಡು ರಾಷ್ಟ್ರೀಯ ಪಕ್ಷಗಳ ಆಡಳಿತದಲ್ಲಿ ಬೆಂಗಳೂರಿನಲ್ಲಿ ಸಾಕಷ್ಟು ಅನಾಹುತಗಳಾಗಿವೆ. ಬೆಂಗಳೂರಿನಲ್ಲಿ ತಾಂಡವವಾಡುತ್ತಿರುವ ನಿರುದ್ಯೋಗ ಸಮಸ್ಯೆಯನ್ನು ಸರಿಪಡಿಸುವ ಮೂಲಕ ಕೆಂಪೇಗೌಡರಿಗೆ ನಿಜವಾದ ಗೌರವ ನೀಡಿದಂತಾಗುತ್ತದೆ. ಈ ಬಗ್ಗೆ ರಾಜ್ಯ ಹಾಗೂ ಕೇಂದ್ರದ ಬಿಜೆಪಿ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.
ನರೇಂದ್ರ ಮೋದಿ ಅವರನ್ನು ಕರೆತಂದು ಕೆಂಪೇಗೌಡ ಪ್ರತಿಮೆ ಅನಾವರಣಗೊಳಿಸಿದರೆ ಜನ ಮತ ಹಾಕುತ್ತಾರೆ ಎಂಬುದು ಬಿಜೆಪಿಯ ಹಗಲುಗನಸು ಎಂದು ಕುಮಾರಸ್ವಾಮಿ ಹೇಳಿದರು.












Click it and Unblock the Notifications