ವಿ.ಸೋಮಣ್ಣ ಕಾಂಗ್ರೆಸ್ ಸೇರ್ಪಡೆ ಕುರಿತು ಮಹತ್ವದ ಮಾಹಿತಿ ನೀಡಿದ ಡಿ ಕೆ ಶಿವಕುಮಾರ್
ಬೆಂಗಳೂರು, ನವೆಂಬರ್ 28: ಬಿಜೆಪಿ ನಾಯಕರ ವಿರುದ್ಧ ಅಸಮಾಧಾನಗೊಂಡಿರುವ ವಿ ಸೋಮಣ್ಣ ಕಾಂಗ್ರೆಸ್ ಪಕ್ಷದತ್ತ ಮುಖ ಮಾಡಿದ್ದಾರೆ ಎನ್ನುವ ಮಾತುಗಳು ರಾಜ್ಯ ರಾಜಕಾರಣದಲ್ಲಿ ಹೆಚ್ಚು ಚರ್ಚೆಯಾಗುತ್ತಿದ್ದು, ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಜೊತೆಗೆ ಸಂಪರ್ಕದಲ್ಲಿದ್ದಾರೆ ಎನ್ನಲಾಗಿದೆ.
ಈ ಕುರಿತು ಡಿಸಿಎಂ ಡಿ ಕೆ ಶಿವಕುಮಾರ್ ಮಾತನಾಡಿ, ಸೋಮಣ್ಣ ಅವರು ನನ್ನ ಬಳಿ ಈ ವಿಚಾರವಾಗಿ ಏನೂ ಮಾತನಾಡಿಲ್ಲ. ಅವರ ದುಃಖ, ದುಮ್ಮಾನಗಳನ್ನು ಮಾಧ್ಯಮಗಳಲ್ಲಿ ನೋಡಿದ್ದೇನೆ. ಅವರು ನಮ್ಮ ತಾಲೂಕಿನವರು, ಹಿರಿಯ ನಾಯಕರು. ಅವರು ಎರಡು ಕಡೆ ನಿಂತು ಸೋತರು. ಅವರು ಅಲ್ಲಿ ಏಕೆ ಹೋದರು ಎಂಬುದೇ ನನಗೆ ವಿಸ್ಮಯ ಹಾಗೂ ದೊಡ್ಡ ಪ್ರಶ್ನೆಯಾಗಿದೆ. ಅವರ ಬಗ್ಗೆ ನಾನು ಮಾತನಾಡುವುದಿಲ್ಲ ಎಂದು ತಿಳಿಸಿದರು.

ನನ್ನ ವಿರುದ್ಧದ ಪ್ರಕರಣದಲ್ಲಿ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದ ನಂತರ ಅನೇಕರು ಮಾತನಾಡುತ್ತಿದ್ದಾರೆ. ಯಾರ್ಯಾರ ಮನಸ್ಸು ಮತ್ತು ನಾಲಿಗೆ ಮೇಲೆ ಏನೇನಿದೆ ಎಂಬುದು ಈಗ ತಿಳಿಯುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಸಿಬಿಐ ತನಿಖೆಗೆ ನೀಡಿದ್ದ ಆದೇಶ ಹಿಂಪಡೆದ ಸರ್ಕಾರದ ನಿರ್ಧಾರದ ಬಗ್ಗೆ ವಿರೋಧ ಪಕ್ಷಗಳ ನಾಯಕರ ಹೇಳಿಕೆ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ತನಿಖೆಗೆ ಅನುಮತಿ ವಾಪಸ್ ಪಡೆದಿರುವ ಬೆಳವಣಿಗೆಯಿಂದ ಎಲ್ಲರ ಮನಸ್ಥಿತಿಯೂ ಅರ್ಥವಾಗುತ್ತಿದೆ. ಯಾರ್ಯಾರು ಗೆಳೆಯರು, ಅವರ ಭಾವನೆ ಏನಿದೆ ಎಂಬುದು ಈಗ ತಿಳಿಯುತ್ತಿದೆ. ಸಿಬಿಐ ತನಿಖೆಗೆ ಅನುಮತಿ ಹಿಂಪಡೆದಿರುವ ಬಗ್ಗೆ ಈಗ ಮಾತನಾಡಲು ಹೋಗುವುದಿಲ್ಲ. ಮುಂದೆ ಅದರ ಬಗ್ಗೆ ಖಂಡಿತವಾಗಿಯೂ ಮಾತನಾಡುತ್ತೇನೆ. ಎಲ್ಲದಕ್ಕೂ ಉತ್ತರ ಕೊಡುತ್ತೇನೆ ಎಂದು ಹೇಳಿದರು.
ಕರ್ನಾಟಕ ಮಾದರಿಯಂತೆ ತೆಲಂಗಾಣದಲ್ಲಿ 6 ಗ್ಯಾರಂಟಿಗಳನ್ನು ನೀಡಲಾಗಿದೆ. ದಲಿತ ಸಿಎಂ ಸೇರಿದಂತೆ ಕೆಸಿಆರ್ ಅವರ ನೇತೃತ್ವದ ಸರ್ಕಾರ 10 ವರ್ಷಗಳಲ್ಲಿ ತಾನು ಕೊಟ್ಟ ಭರವಸೆಗಳನ್ನು ಈಡೇರಿಸಿಲ್ಲ. ತೆಲಂಗಾಣ ರಾಜ್ಯ ರಚನೆಗೆ ಸೋನಿಯಾ ಗಾಂಧಿ ಅವರೇ ಕಾರಣ. ತೆಲಂಗಾಣದ ಜನರಿಗೆ ಸೋನಿಯಾಗಾಂಧಿ ಅವರ ಋಣ ತೀರಿಸಬೇಕು ಎನ್ನುವ ಭಾವನೆ ಬಂದಿದೆ. ಜನರಿಗೆ ತೋಟದ ಮನೆಯಲ್ಲಿ ಕುಳಿತು ಕೆಲಸ ಮಾಡುವವರು ಬೇಕಿಲ್ಲ. ಜನರ ಮಧ್ಯೆ ಕೆಲಸ ಮಾಡುವ ಸರ್ಕಾರ ಬೇಕು ಎನ್ನುವುದು ಅರ್ಥವಾಗಿದೆ. ಜನ ಬದಲಾವಣೆ ಬಯಸಿದ್ದಾರೆ" ಎಂದು ಹೇಳಿದರು.

ತೆಲಂಗಾಣ ಚುನಾವಣೆಗೆ ಕರ್ನಾಟಕದ ಸುಮಾರು 40 ಕ್ಕೂ ಹೆಚ್ಚು ನಾಯಕರು ಭಾಗವಹಿಸಿದ್ದರು. ನಾನು ಸಹ 5 ದಿನಗಳ ಕಾಲ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿದ್ದೆ. ನಿನ್ನೆ ಸಿಎಂ ಸಿದ್ದರಾಮಯ್ಯ ಅವರೂ ಭಾಗವಹಿಸಿದ್ದರು. ರೈತಬಂಧು ಕಾರ್ಯಕ್ರಮದ ಅಡಿ ರೈತರಿಗೆ ಧನಸಹಾಯ ನೀಡುವ ಬಿಜೆಪಿ ಸರ್ಕಾರದ ಕಾರ್ಯಕ್ರಮಕ್ಕೆ ಚುನಾವಣಾ ಆಯೋಗ ಅನುಮತಿ ನೀಡಿತ್ತು. ಆದರೆ ಮತ್ತೆ ರದ್ದು ಮಾಡಿದ್ದಾರೆ. ಒಂದರ್ಥದಲ್ಲಿ ಚೆಸ್ ಆಟವಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
ನಿಮ್ಮನ್ನು ಅಧಿಕಾರದಿಂದ ಕೆಳಗಿಳಿಸಲು ಸಿದ್ದರಾಮಯ್ಯ ಹಾಗೂ ಪರಮೇಶ್ವರ್ ಅವರು ಪ್ಲಾನ್ ಮಾಡುತ್ತಿದ್ದಾರೆ ಎಂಬ ಆರ್. ಅಶೋಕ್ ಅವರ ಆರೋಪದ ಬಗ್ಗೆ ಕೇಳಿದಾಗ, "ಅವರು ಕಾಂಗ್ರೆಸ್ ಪಕ್ಷದ ವಕ್ತಾರರಾಗಿ ಮಾತನಾಡಲು ಆಗುವುದಿಲ್ಲ. ಅವರು ಅವರದೇ ಪಕ್ಷದ ವಕ್ತಾರರಾಗಿ ಅವರ ಪಕ್ಷವನ್ನು ಸರಿಪಡಿಸಿಕೊಳ್ಳಲಿ ಎಂದು ತಿರುಗೇಟು ನೀಡಿದರು.
ತೆಲಂಗಾಣದಲ್ಲಿ ಎಷ್ಟು ಸ್ಥಾನಗಳನ್ನು ಗೆಲ್ಲಬಹುದು ಎಂಬ ಪ್ರಶ್ನೆಗೆ ಉತ್ತರಿಸಿ, ಕರ್ನಾಟಕದಂತೆ ನಿಖರವಾಗಿ ಇಲ್ಲಿ ಹೇಳಲು ಬರುವುದಿಲ್ಲ. ನಾನು ಕರ್ನಾಟಕದ ಪ್ರತಿಯೊಂದು ಕ್ಷೇತ್ರದ ಚಿತ್ರಣವನ್ನು ಅವಲೋಕಿಸಿದ್ದೆ. ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚನೆ ಮಾಡುವುದು ನಿಶ್ಚಿತ. ತೆಲಂಗಾಣದಲ್ಲಿ ಕಾಂಗ್ರೆಸ್ ಸರಕಾರ ರಚನೆ ಆಗಲಿದ್ದು, ಸಚಿವ ಸಂಪುಟದ ಮೊದಲ ಸಭೆಯಲ್ಲಿ ಡಿ.9 ರಂದು ಎಲ್ಲಾ 6 ಗ್ಯಾರಂಟಿಗಳನ್ನು ಜಾರಿಗೆ ತರಲು ಅನುಮೋದನೆ ನೀಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.












Click it and Unblock the Notifications