ತುಮಕೂರಿನಿಂದ ಸ್ಪರ್ಧೆಗೆ ಸಜ್ಜಾದ ವಿ ಸೋಮಣ್ಣ: ಹೈಕಮಾಂಡ್ ಆಜ್ಞೆಗೆ ಕಾಯುತ್ತಿರುವ ಮಾಜಿ ಸಚಿವ
ತುಮಕೂರು, ಫೆಬ್ರವರಿ 19: ಬೇಸಿಗೆ ಆರಂಭಕ್ಕೆ ಮುನ್ನವೇ ಬಿಸಿಲಿನ ಕಾವು ಏರುತ್ತಿರುವಂತೆಯೇ ಲೋಕಸಭಾ ಚುನಾವಣೆಯ ಕಾವು ಸಹ ಜೋರಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡ ಮಾಜಿ ಸಚಿವ ಹಾಗೂ ಲಿಂಗಾಯತ ನಾಯಕ ವಿ ಸೋಮಣ್ಣ ಅವರು ಲೋಕಸಭಾ ಚುಣಾವಣೆಗೆ ಭರ್ಜರಿ ತಯಾರಿ ನಡೆಸುತ್ತಿದ್ದಾರೆ.
ಹೌದು, ಸ್ವಪಕ್ಷದ ನಾಯಕರ ವಿರುದ್ಧವೇ ತೀವ್ರ ಅಸಮಾಧಾನಗೊಂಡಿದ್ದ ಮಾಜಿ ಸಚಿವ ವಿ ಸೋಮಣ್ಣ, ಇದೀಗ ತುಮಕೂರು ಲೋಕಸಭಾ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. ಇನ್ನೂ ಬಿಜೆಪಿ ಟಿಕೆಟ್‌ಗಾಗಿ ಆಕಾಂಕ್ಷಿಗಳ ಪಟ್ಟಿಯೂ ಬೆಳೆಯುತ್ತಿದೆ. ತುಮಕೂರು ಕ್ಷೇತ್ರದ ಬಿಜೆಪಿ ಟಿಕೆಟ್ ಮೇಲೆ ಕಣ್ಣಿಟ್ಟಿರುವ ಮಾಜಿ ಸಚಿವ ಜೆ ಸಿ ಮಾಧುಸ್ವಾಮಿ ಅವರು ಸಹ ಟಿಕೆಟ್ ಗಾಗಿ ಭಾರೀ ಪೈಪೋಟಿ ನಡೆಸಿದ್ದಾರೆ. ಈ ನಡುವೆ ಮಾಜಿ ಸಚಿವ ಹಾಗೂ ಪ್ರಬಲ ನಾಯಕ ವಿ. ಸೋಮಣ್ಣ ಅವರು ಈಗಾಗಲೇ ಕ್ಷೇತ್ರದಲ್ಲಿ ಮಠಗಳ ಭೇಟಿಯತ್ತ ಚಿತ್ತ ಹರಿಸಿದ್ದಾರೆ.

ಈಗಾಗಲೇ ಬಿಜೆಪಿ ಹೈಕಮಾಂಡ್ ನಾಯಕರ ಜೊತೆಗೆ ಚರ್ಚೆ ನಡೆಸಿರುವ ಮಾಜಿ ಸಚಿವ ವಿ ಸೋಮಣ್ಣ ಅವರು ತುಮಕೂರು ಲೋಕಸಭಾ ಚುನಾವಣೆಯ ಟಿಕೆಟ್ ಗಾಗಿ ಬೇಡಿಕೆ ಇಟ್ಟಿದ್ದಾರೆ. ಅಲ್ಲದೇ ತುಮಕೂರು ಮಠ ಮಾನ್ಯಗಳ ಜೊತೆಗೆ ನಿರಂತರ ಸಂಪರ್ಕದಲ್ಲಿರುವ ವಿ ಸೋಮಣ್ಣ ಅವರ ಕ್ಷೇತ್ರದಲ್ಲಿ ಮಿಂಚಿನ ಸಂಚಾರ ನಡೆಸುತ್ತಿದ್ದು, ಶತಾಯ-ಗತಾಯ ಬಿಜೆಪಿ ಟಿಕೆಟ್ ಪಡೆದು ತುಮಕೂರು ಕ್ಷೇತ್ರದಿಂದಲೇ ಲೋಕಸಭಾ ಚುನಾವಣೆಗೆ ಸ್ಪರ್ಧಿಸಬೇಕು ಎಂಬ ಪಟ್ಟು ಹಿಡಿದಿದ್ದಾರೆ.
ಇನ್ನೂ ರಾಜ್ಯ ಬಿಜೆಪಿ ನಾಯಕರ ಜೊತೆಗೆ ವಿ ಸೋಮಣ್ಣ ಲೋಕಸಭಾ ಚುಣಾವಣೆಯಲ್ಲಿ ಸ್ಪರ್ಧಿಸುವ ಕುರಿತು ಚರ್ಚೆ ನಡೆಸಿದ್ದು, ಈಗಾಗಲೇ ಬಿಜೆಪಿ ಹೈಕಮಾಂಡ್ ನಾಯಕರ ಜೊತೆಗೆ ಚರ್ಚೆ ನಡೆಸಿದ್ದಾರೆ. ಇತ್ತ ಲೋಕಸಭಾ ಚುನಾವಣೆಯ ಟಿಕೆಟ್ ಗಾಗಿ ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿರುವ ಮಾಜಿ ಸಚಿವ ವಿ ಸೋಮಣ್ಣ, ಹೈಕಮಾಂಡ್ ನಾಯಕರ ಆಜ್ಞೆಗೆ ಕಾಯುತ್ತಿದ್ದಾರೆ ಎನ್ನಲಾಗಿದೆ. ತುಮಕೂರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡುತ್ತಿದ್ದಂತೆ ಅಧಿಕೃತವಾಗಿ ವಿ ಸೋಮಣ್ಣ ಲೋಕಸಭಾ ಚುನಾವಣಾ ಅಖಾಡಕ್ಕಿಳಿಯಲಿದ್ದಾರೆ ಎನ್ನಲಾಗಿದೆ.
ಈಗಾಗಲೇ ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಸಕ್ರಿಯೆರಾಗಿರುವ ಮಾಜಿ ಸಚಿವ ವಿ ಸೋಮಣ್ಣ ಕೊರಟಗೆರೆ ತಾಲ್ಲೂಕು ಎಲೆರಾಂಪುರ ಕುಂಚಿಟಿಗರ ಮಠದ ಶ್ರೀ ಹನುಮಂತನಾಥ ಸ್ವಾಮೀಜಿ, ಸಿದ್ಧರಬೆಟ್ಟದ ರಂಭಾಪುರಿ ಖಾಸಾ ಶಾಖಾ ಮಠದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿಯನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ನಂತರ ಸಿದ್ಧಗಂಗಾ ಮಠಕ್ಕೆ ಆಗಮಿಸಿ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು. ಬಳಿಗ ಮಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಸ್ವಾಮೀಜಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದು ಕೆಲಹೊತ್ತು ಚರ್ಚೆ ನಡೆಸಿದರು.
ಈ ವೇಳೆ ಮಾಧ್ಯಮಗಳ ಜೊತೆಗೆ ಮಾಜಿ ಸಚಿವ ವಿ. ಸೋಮಣ್ಣ ಅವರು ಮಾತನಾಡಿ, ರಾಜ್ಯಸಭೆಗೆ ಅವಕಾಶ ಕೇಳಿದ್ದೆ. ಅಲ್ಲಿ ಎಲ್ಲವೂ ಕೊನೆ ಹಂತಕ್ಕೆ ಬಂದಿದ್ದರಿಂದ ಸಾಧ್ಯವಾಗಿಲ್ಲ. ಹೈಕಮಾಂಡ್ ಅವಕಾಶ ಕೊಟ್ಟರೆ ತುಮಕೂರು ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ. ತುಮಕೂರು ಬಿಟ್ಟು ಬೇರೆಡೆ ಸ್ಪರ್ಧೆ ಮಾಡುವಂತೆ ಹೇಳಿದರೆ ಅದಕ್ಕೂ ತಯಾರಿದ್ದೇನೆ ಎಂದು ಹೇಳಿದರು.
ನನಗೂ ತುಮಕೂರಿಗೂ ಅವಿನಾಭಾವ ಸಂಬಂಧ ಇದೆ. ಯಾರನ್ನು ಎಲ್ಲಿಗೆ ಕರೆಸಿಕೊಳ್ಳಬೇಕು, ಎಲ್ಲಿ ಕೆಲಸ ಮಾಡಿಸಿಕೊಳ್ಳಬೇಕು ಎಂಬುದು ಗೊತ್ತಿದೆ. ಕಳೆದ ಬಾರಿ ಜಿ.ಎಸ್.ಬಸವರಾಜು ಚುನಾವಣೆಗೆ ಸ್ಪರ್ಧಿಸಿದಾಗ ನಾನೇ ಉಸ್ತುವಾರಿ ಇದ್ದೆ. ಜಿಲ್ಲೆಯ ಒಂದು ಸಾವಿರ ಹಳ್ಳಿ ಹೆಸರು ಹೇಳಬಲ್ಲೆ. ಸಾವಿರಾರು ಜನರು ಗೊತ್ತಿದ್ದಾರೆ ಎನ್ನುವ ಮೂಲಕ ಸ್ಪರ್ಧೆಗೆ ವಿರೋಧಿಸುವವರಿಗೆ ಮಾಜಿ ಸಚಿವ ವಿ ಸೋಮಣ್ಣ ತಿರುಗೇಟು ನೀಡಿದ್ದಾರೆ.












Click it and Unblock the Notifications