ರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣೆ: ಕುತೂಹಲ ಮೂಡಿಸಿದ ಸಿದ್ದರಾಮಯ್ಯ-ವಿಎಚ್‌ಪಿ ಪ್ರಮುಖರ ಭೇಟಿ!
ಬೆಂಗಳೂರು, ಫೆ. 05: ಕುತೂಹಲಕಾರಿ ಬೆಳವಣಿಗೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಶ್ವ ಹಿಂದೂ ಪರಿಷತ್ ಪ್ರಮುಖರು ಭೇಟಿ ಮಾಡಿ ಚರ್ಚೆ ನಡೆಸಿದ್ದು, ಮಂದಿರ ನಿರ್ಮಾಣಕ್ಕೆ ಅವರು ದೇಣಿಗೆ ನೀಡುತ್ತಾರಾ? ಎಂಬ ವಿಚಾರ ಕುತೂಹಲ ಮೂಡಿಸಿದೆ.
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಸರ್ಕಾರಿ ನಿವಾಸಕ್ಕೆ ತೆರಳಿದ್ದ ವಿಶ್ವ ಹಿಂದೂ ಪರಿಷತ್ ಪ್ರಾಂತ ವಿಶೇಷ ಸಂಪರ್ಕ ಪ್ರಮುಖ್ ಮಂಜುನಾಥ ಸ್ವಾಮಿ ಅವರು ಶ್ರೀರಾಮ ಮಂದಿರ ನಿರ್ಮಾಣದ ಕುರಿತು ಸಿದ್ದರಾಮಯ್ಯ ಅವರಿಗೆ ವಿವರಣೆ ನೀಡಿದ್ದಾರೆ.

ಶ್ರೀರಾಮ ಮಂದಿರ ನಿರ್ಮಾಣ ನಿರ್ಮಾಣದ ಹಿನ್ನೆಲೆಯಲ್ಲಿ ನಾಡಿನ ಜನರಿಂದ ದೇಣಿಗೆ ಪಡೆಯಲಾಗುತ್ತಿದ್ದು, ಇದೇ ಹಿನ್ನೆಲೆಯಲ್ಲಿ ತಮ್ಮನ್ನು ಭೇಟಿ ಮಾಡಿದ್ದೇವೆ ಎಂದು ಮಂಜುನಾಥ್ ಸ್ವಾಮಿ ಅವರು ವಿವರಿಸಿದ್ದಾರೆ. ಜೊತೆಗೆ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಕುರಿತು ತಯಾರಿಸಲಾಗಿರುವ ವಿವರಣಾ ಪತ್ರವನ್ನೂ ಸಿದ್ದರಾಮಯ್ಯ ಅವರಿಗೆ ಕೊಡಲಾಗಿದೆ.

ರಾಮ ಮಂದಿರ ನಿರ್ಮಾಣಕ್ಕೆ ಕನಿಷ್ಠ 10 ರೂಪಾಯಿಗಳಿಂದ ತಮ್ಮ ಶಕ್ತಾನುಸಾರ ದೇಣಿಗೆ ನೀಡಬಹುದಾಗಿದೆ. ಎರಡು ಸಾವಿರ ರೂಪಾಯಿಗಳವರೆಗೆ ದೇಣಿಗೆ ನೀಡುವವರಿಗೆ ಕೂಪನ್ ಕೊಡಲಾಗುತ್ತಿದೆ. 2 ಸಾವಿರ ರೂಪಾಯಿಗಳಿಗಿಂತ ಹೆಚ್ಚು ಹಣವನ್ನು ದೇಣಿಗೆ ನೀಡುವವರಿಗೆ ಶ್ರೀ ರಾಮಜನ್ಮಭೂಮಿ ಟ್ರಸ್ಟ್ ವತಿಯಿಂದ ರಸೀದಿ ಕೊಡಲಾಗುವುದು ಎಂದು ಮಂಜುಸ್ವಾಮಿ ಅವರು ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ವಿವರಿಸಿದ್ದಾರೆ.
ಸಿದ್ದರಾಮಯ್ಯ ಅವರು ವಿಶ್ವ ಹಿಂದೂ ಪರಿಷತ್ ಪ್ರಾಂತ ವಿಶೇಷ ಸಂಪರ್ಕ ಪ್ರಮುಖ್ ಮಂಜುನಾಥ ಸ್ವಾಮಿ ಅವರ ವಿವರಣೆಯಿಂದ ಆಲಿಸಿದ್ದಾರೆ. ಈ ಸಂದರ್ಭದಲ್ಲಿ ಹಿರಿಯ ಪತ್ರಕರ್ತ ರಂಗಣ್ಣ ಅವರು ಉಪಸ್ಥಿತರಿದ್ದರು.

Recommended Video
ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೊಮ್ಮೆ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ವಿಶ್ವ ಹಿಂದೂ ಪರಿಷತ್ ಪ್ರಮುಖರು ಭೇಟಿ ಮಾಡಲಿದ್ದಾರೆ ಎಂದು ವಿಎಚ್‌ಪಿ ಮೂಲಗಳು ತಿಳಿಸಿವೆ. ಹೀಗಾಗಿ ಸಿದ್ದರಾಮಯ್ಯ ಅವರು ಶ್ರೀರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡುತ್ತಾರಾ? ಎಂಬುದು ಕುತೂಹಲ ಮೂಡಿಸಿದೆ.












Click it and Unblock the Notifications