ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ
ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಧಿಸಿರುವ ಜೀವಾವಧಿ ಶಿಕ್ಷೆಯನ್ನು ಪ್ರಶ್ನಿಸಿ ವಿನಯ್ ಕುಲಕರ್ಣಿ ಅವರು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಕೆಳ ನ್ಯಾಯಾಲಯ ನೀಡಿದ್ದ ದೋಷಿ ಆದೇಶ ಮತ್ತು ಶಿಕ್ಷೆಯ ಪ್ರಮಾಣವನ್ನು ರದ್ದುಗೊಳಿಸುವಂತೆ ಅವರು ತಮ್ಮ ಅರ್ಜಿಯಲ್ಲಿ ಕೋರಿದ್ದಾರೆ. ಈ ಪ್ರಕರಣದಲ್ಲಿ ತಮಗೆ ವಿಧಿಸಲಾಗಿರುವ ಕಠಿಣ ಶಿಕ್ಷೆಗೆ ತಡೆಯಾಜ್ಞೆ ನೀಡಬೇಕು ಮತ್ತು ಜಾಮೀನು ಮಂಜೂರು ಮಾಡಬೇಕು ಎಂದು ವಿನಯ್ ಕುಲಕರ್ಣಿ ಅರ್ಜಿ ಸಲ್ಲಿಸಿದ್ದಾರೆ.
ಶಾಸಕ ವಿನಯ್ ಕುಲಕರ್ಣಿ ಅವರಿಗೆ ಈ ಕಾನೂನು ಹೋರಾಟ ಅತ್ಯಂತ ನಿರ್ಣಾಯಕವಾಗಿದೆ. ನಿಯಮಗಳ ಪ್ರಕಾರ, ಎರಡು ವರ್ಷಕ್ಕಿಂತ ಹೆಚ್ಚಿನ ಶಿಕ್ಷೆಯಾದಲ್ಲಿ ಜನಪ್ರತಿನಿಧಿಗಳು ತಮ್ಮ ಸ್ಥಾನವನ್ನು ಕಳೆದುಕೊಳ್ಳಬೇಕಾಗುತ್ತದೆ. ಹೀಗಾಗಿ ತಮ್ಮ ಶಾಸಕ ಸ್ಥಾನಕ್ಕೆ ಎದುರಾಗಿರುವ ಅನರ್ಹತೆಯ ಭೀತಿ ತಪ್ಪಿಸಿಕೊಳ್ಳಲು ಅವರು ಶಿಕ್ಷೆಗೆ ತಕ್ಷಣವೇ ತಡೆ ನೀಡುವಂತೆ ನ್ಯಾಯಾಲಯವನ್ನು ಕೋರಿದ್ದಾರೆ ಎನ್ನಲಾಗಿದೆ. ಶಿಕ್ಷೆಯ ಆದೇಶಕ್ಕೆ ತಡೆ ಸಿಗದಿದ್ದರೆ ಅವರು ಶಾಸಕ ಸ್ಥಾನದಿಂದ ಕೆಳಗಿಳಿಯುವ ಸಾಧ್ಯತೆ ದಟ್ಟವಾಗಿದೆ.

ಈಗಾಗಲೇ ಹೈಕೋರ್ಟ್‌ನಲ್ಲಿ ಸಲ್ಲಿಕೆಯಾಗಿರುವ ಈ ಅರ್ಜಿಯ ವಿಚಾರಣೆಯು ಮುಂದಿನ ವಾರ ನಡೆಯುವ ಸಾಧ್ಯತೆಯಿದೆ. ಈ ಹಂತದಲ್ಲಿ ಪ್ರಕರಣದ ತನಿಖೆ ನಡೆಸಿದ್ದ ಸಿಬಿಐ ತನ್ನ ವಾದವನ್ನು ಮಂಡಿಸಲಿದ್ದು, ನ್ಯಾಯಾಲಯವು ಉಭಯ ಪಕ್ಷಗಳ ವಾದ-ಪ್ರತಿವಾದಗಳನ್ನು ಆಲಿಸಲಿದೆ. ಜೀವಾವಧಿ ಶಿಕ್ಷೆಯ ತೀರ್ಪಿನಿಂದಾಗಿ ವಿನಯ್ ಕುಲಕರ್ಣಿ ಅವರ ರಾಜಕೀಯ ಭವಿಷ್ಯದ ಮೇಲೆ ಕಾರ್ಮೋಡ ಕವಿದಿದ್ದು, ಹೈಕೋರ್ಟ್ ನೀಡಲಿರುವ ತೀರ್ಪಿನ ಮೇಲೆ ಎಲ್ಲರ ಕಣ್ಣು ನೆಟ್ಟಿದೆ.
ಏನಿದು ಪ್ರಕರಣ?
ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೇಶ್ ಗೌಡ ಅವರ ಹತ್ಯೆ ಪ್ರಕರಣವು ಕಳೆದ ಹತ್ತು ವರ್ಷಗಳಿಂದ ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿತ್ತು. 2016ರಲ್ಲಿ ನಡೆದ ಈ ಭೀಕರ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಹಾಲಿ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 21 ಮಂದಿಯ ಮೇಲೆ ಗಂಭೀರ ಆರೋಪಗಳು ಕೇಳಿಬಂದಿದ್ದವು. ಅಂದಿನ ಬಿಜೆಪಿ ಸರ್ಕಾರವು ಪ್ರಕರಣದ ತನಿಖೆಗಾಗಿ ಇದನ್ನು ಸಿಬಿಐಗೆ ವಹಿಸಿತ್ತು. ಪ್ರತಿಯೊಂದು ಸಾಕ್ಷ್ಯಗಳನ್ನು ಜಾಲಾಡಿದ ಸಿಬಿಐ ಅಧಿಕಾರಿಗಳು, ಅಂತಿಮವಾಗಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಸುದೀರ್ಘ ವಿಚಾರಣೆಯ ನಂತರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಈ ಹತ್ಯೆಯನ್ನು ಕ್ರಿಮಿನಲ್ ಸಂಚು ಎಂದು ಪರಿಗಣಿಸಿದೆ. ಕೊಲೆ, ಸಾಕ್ಷ್ಯನಾಶ, ಮಾರಕಾಸ್ತ್ರಗಳಿಂದ ಹಲ್ಲೆ ಹಾಗೂ ಅಕ್ರಮ ಕೂಟ ರಚಿಸಿದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ, ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಪ್ರಕರಣದಲ್ಲಿದ್ದ ಸೋಮಶೇಖರ್ ನ್ಯಾಮಗೌಡ ಮತ್ತು ವಾಸುದೇವ್ ನಿಲೇಕಣಿ ಅವರನ್ನು ಸಾಕ್ಷ್ಯಾಧಾರಗಳ ಕೊರತೆಯಿಂದ ನ್ಯಾಯಾಲಯ ಖುಲಾಸೆಗೊಳಿಸಿದೆ. ಶಿಕ್ಷೆ ಪ್ರಕಟವಾದ ಬೆನ್ನಲ್ಲೇ ಅಪರಾಧಿಗಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರಿಸಲಾಗಿದೆ.
ಈ ಪ್ರಕರಣದಲ್ಲಿ ಪೊಲೀಸರ ಪಾತ್ರದ ಬಗ್ಗೆಯೂ ನ್ಯಾಯಾಲಯ ಗಂಭೀರವಾಗಿ ಪರಿಗಣಿಸಿದೆ. ಇನ್‌ಸ್ಪೆಕ್ಟರ್ ಚನ್ನಕೇಶವ ಅವರು ನೇರವಾಗಿ ಕೊಲೆಯಲ್ಲಿ ಭಾಗಿಯಾಗದಿದ್ದರೂ, ತನಿಖೆಯ ಹಾದಿ ತಪ್ಪಿಸಲು ಭ್ರಷ್ಟಾಚಾರ ಎಸಗಿದ್ದು ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ಅವರಿಗೆ 7 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಮಾನವೀಯ ನೆಲೆಯಲ್ಲಿ ಮೃತ ಯೋಗೇಶ್ ಗೌಡ ಅವರ ಕುಟುಂಬದ ಹಿತದೃಷ್ಟಿಯಿಂದ, ಅವರ ಮಕ್ಕಳಿಗೆ 16 ಲಕ್ಷ ರೂಪಾಯಿ ಪರಿಹಾರ ನೀಡುವಂತೆಯೂ ನ್ಯಾಯಾಲಯ ಸೂಚನೆ ನೀಡಿದೆ.












Click it and Unblock the Notifications