Sadananda Gowda: ಬಂಡಾಯವೆದ್ದ ಸದಾನಂದ ಗೌಡ: ಕೈ ಹಿಡಿತಾರಾ ಸಿದ್ದರಾಮಯ್ಯ, ಡಿಕೆ ಶಿವಕುಮಾರ್?
ಬೆಂಗಳೂರು ಮಾರ್ಚ್ 19: ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಹಾಲಿ ಸದಸ್ಯ ಸದಾನಂದ ಗೌಡರ ಕೋಪ ತಣ್ಣಗಾಗುವಂತೆ ಕಾಣಿಸುತ್ತಿಲ್ಲ. ಬಿಜೆಪಿಯೂ ಅವರನ್ನು ಸಮಾಧಾನಪಡಿಸಲು ವಿಫಲವಾದಂತೆ ಕಾಣಿಸುತ್ತಿದೆ. ಇತ್ತ ಸದಾನಂದ ಗೌಡ ಅವರು ಕಾಂಗ್ರೆಸ್ ಸೇರುತ್ತಾರೆನ್ನುವ ಮಾತುಗಳು ಕೇಳಿ ಬರುತ್ತಿವೆ. ಆದರೆ ಸದಾನಂದ ಗೌಡರ ಕೈ ಹಿಡಿಯಲು ಕಾಂಗ್ರೆಸ್‌ನಲ್ಲಿ ಭಿನ್ನಾಭಿಪ್ರಾಯಗಳು ಕೇಳಿ ಬಂದಿವೆ ಎನ್ನಲಾಗುತ್ತಿದೆ.
ಹೌದು... ಸದಾನಂದ ಗೌಡರ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪಕ್ಷದ ಹೈಕಮಾಂಡ್ ಜೊತೆ ಸಮಾಲೋಚನೆ ನಡೆಸಲಿದ್ದಾರೆ ಎನ್ನಲಾಗಿದೆ. ಸದಾನಂದ ಗೌಡರ ಪಕ್ಷ ಸೇರ್ಪಡೆ ವಿಚಾರದಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಮಧ್ಯೆ ಭಿನ್ನ ಅಭಿಪ್ರಾಯಗಳಿವೆ ಎಂದು ಮೂಲಗಳು ತಿಳಿಸಿವೆ.

ಲೋಕಸಭಾ ಚುನಾವಣೆಯ ಟಿಕೆಟ್‌ಗೆ ಸಂಬಂಧಿಸಿದಂತೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್ ಈಶ್ವರಪ್ಪ ಬಳಿಕ ಮಾಜಿ ಮುಖ್ಯಮಂತ್ರಿ ಹಾಗೂ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಹಾಲಿ ಸದಸ್ಯ ಡಿವಿ ಸದಾನಂದಗೌಡರೂ ಅಸಮಾಧಾನಗೊಂಡಿದ್ದು ಇಂದು ತಮ್ಮ ಮುಂದಿನ ನಿರ್ಧಾರ ಪ್ರಕಟಿಸುವ ಸಾಧ್ಯತೆಯಿದೆ.
'ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವಂತೆ ಆ ಪಕ್ಷದ ನಾಯಕರು ನನ್ನನ್ನು ಸಂಪರ್ಕಿಸಿರುವುದು ನಿಜ. ಈ ಬಗ್ಗೆ ಕುಟುಂಬದವರೊಂದಿಗೆ ಚರ್ಚಿಸಿ ಮಂಗಳವಾರ ನನ್ನ ಅಂತರಾಳದ ವಿಚಾರವನ್ನು ತಿಳಿಸುತ್ತೇನೆ' ಎಂದು ಸದಾನಂದ ಗೌಡ ತಿಳಿಸಿರುವುದು ಕುತೂಹಲ ಮೂಡಿಸಿದೆ.
ಸದಾನಂದ ಗೌಡರಿಗೆ ಕಾಂಗ್ರೆಸ್ ಪಕ್ಷದಿಂದ ಬೆಂಗಳೂರು ಉತ್ತರ ಕ್ಷೇತ್ರದ ಟಿಕೆಟ್ ನೀಡುವ ಬಗ್ಗೆಯೂ ಚರ್ಚೆ ನಡೆಯುತ್ತಿದೆ. ಆದರೆ ಈ ವಿಚಾರದಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಮಧ್ಯೆ ಒಮ್ಮತ ಅಭಿಪ್ರಾಯ ಕಂಡು ಬಂದಿಲ್ಲ. ಮತ್ತೊಂದೆಡೆ ಮೈಸೂರು ಲೋಕಸಭಾ ಕ್ಷೇತ್ರದ ಟಿಕೆಟ್ ಅನ್ನು ಸದಾನಂದ ಗೌಡಗೆ ನೀಡುವ ಬಗ್ಗೆ ಕೂಡ ಕಾಂಗ್ರೆಸ್ ಪಕ್ಷದಲ್ಲಿ ಚರ್ಚೆ ನಡೆದಿದೆ. ಆದರೆ, ಮೈಸೂರು ಕ್ಷೇತ್ರದ ಟಿಕೆಟ್ ನೀಡುವುದು ಸಿದ್ದರಾಮಯ್ಯ ನಿರಾಕರಿಸಿದ್ದಾರೆ ಎನ್ನಲಾಗುತ್ತಿದೆ.

ಬೆಂಗಳೂರು ಉತ್ತರ ಟಿಕೆಟ್ ನೀಡಲು ಕೈ ಒಲವು?
ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಸಂಸದ ಸದಾನಂದಗೌಡ ಅವರಿಗೆ ಬೆಂಗಳೂರು ಉತ್ತರ ಕ್ಷೇತ್ರದಿಂದಲೇ ಟಿಕೆಟ್ ನೀಡುವ ಬಗ್ಗೆ ಕಾಂಗ್ರೆಸ್‌ಲ್ಲಿ ಪ್ರಾಥಮಿಕ ಚರ್ಚೆ ನಡೆದಿದೆ. ಬೆಂಗಳೂರು ಉತ್ತರ ಕ್ಷೇತ್ರಕ್ಕೆ ಹಾಲಿ ಕಾಂಗ್ರೆಸ್ ಶಾಸಕ ಪ್ರಿಯಕೃಷ್ಣ ಸ್ಪರ್ಧೆಗೆ ಹಿಂದೇಟು ಹಾಕಿದ್ದಾರೆ. ಹೀಗಾಗಿ ಸದಾನಂದ ಗೌಡ ಹೆಸರು ಪರಿಶೀಲಿಸಲಾಗಿದೆ. ಆದರೆ ಸದಾನಂದ ಗೌಡ ಮೈಸೂರು ಕ್ಷೇತ್ರದಿಂದ ಸ್ಪರ್ಧಿಸುವ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಒಂದು ವೇಳೆ ಸದಾನಂದ ಗೌಡರಿಗೆ ಬೆಂಗಳೂರು ಉತ್ತರ ಕ್ಷೇತ್ರದ ಟಿಕೆಟ್ ಸಿಕ್ಕಿದ್ದೇ ಆದಲ್ಲಿ ಶೋಭಾ ಕರಂದ್ಲಾಜೆ ವಿರುದ್ಧ ಇವರು ಕಣಕ್ಕೆ ಇಳಿಯಲಿದ್ದಾರೆ.
ರಾಜಕೀಯ ನಿವೃತ್ತಿ ಘೋಷಣೆ ಸಾಧ್ಯತೆ
ಜೊತೆಗೆ ಸದಾನಂದಗೌಡ ಕಾಂಗ್ರೆಸ್‌ಗೆ ಹೋಗುವ ಬದಲು ರಾಜಕೀಯದಿಂದಲೇ ನಿವೃತ್ತಿ ಘೋಷಿಸಲು ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಆರು ತಿಂಗಳ ಹಿಂದೆಯೇ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುವುದಾಗಿ ಘೋಷಿಸಿದ್ದರು. ಬಳಿಕ ಬಸವರಾಜ ಬೊಮ್ಮಾಯಿ, ಆರ್. ಅಶೋಕ್ ಹಾಗೂ ಡಾ.ಸಿ.ಎನ್ ಅಶ್ವಸ್ಥನಾರಾಯಣ ಅವರು ಸದಾನಂದಗೌಡರ ನಿವಾಸಕ್ಕೆ ತೆರಳಿ ಮತ್ತೊಮ್ಮೆ ಸ್ಪರ್ಧಿಸಬೇಕು ಎಂಬ ಮನವಿ ಮಾಡಿದ್ದರು. ಆದರೆ ಅದ್ಯಾಕೂ ಸದಾನಂದ ಗೌಡರ ಮುನಿಸು ತಣ್ಣಗಾಗುವಂತೆ ಕಾಣಿಸುತ್ತಿಲ್ಲ.












Click it and Unblock the Notifications