ಕರ್ನಾಟಕದ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್: ವಿದ್ಯಾರ್ಥಿವೇತನ ಇನ್ಮುಂದೆ ಸುಲಭ!
ತುಮಕೂರು: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ನಿಗದಿತ ಅವಧಿಯಲ್ಲಿ ವಿದ್ಯಾರ್ಥಿವೇತನ ಪಾವತಿಸುವ ಉದ್ದೇಶದಿಂದ ಪ್ರತ್ಯೇಕ ವಿದ್ಯಾರ್ಥಿವೇತನ ನಿರ್ದೇಶನಾಲಯ ಸ್ಥಾಪಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರಾದ ಡಾ. ಜಿ. ಪರಮೇಶ್ವರ ತಿಳಿಸಿದ್ದಾರೆ.
ತುಮಕೂರು ಜಿಲ್ಲಾಡಳಿತ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ ನಗರದ ಗಾಜಿನ ಮನೆಯಲ್ಲಿ ಭಾನುವಾರ ಆರಂಭಗೊಂಡ ಎರಡು ದಿನಗಳ ರಾಜ್ಯಮಟ್ಟದ ಯುವಜನೋತ್ಸವವನ್ನು ಉದ್ಘಾಟಿಸಿದ ಬಳಿಕ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಅವರು, ವಿದ್ಯಾರ್ಥಿವೇತನ ಪಾವತಿಯಲ್ಲಿ ವಿಳಂಬವಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ವಿದ್ಯಾರ್ಥಿಗಳಿಗೆ ನಿಗದಿತ ಸಮಯದಲ್ಲಿ ವಿದ್ಯಾರ್ಥಿವೇತನ ದೊರೆಯುವಂತೆ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆದರೂ ಕೆಲವೊಮ್ಮೆ ವಿವಿಧ ಕಾರಣಗಳಿಂದ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರತ್ಯೇಕ ನಿರ್ದೇಶನಾಲಯ ಸ್ಥಾಪಿಸುವ ಕುರಿತು ಚಿಂತನೆ ನಡೆಸಲಾಗುತ್ತಿದೆ ಎಂದಿದ್ದಾರೆ.

ರಾಜ್ಯದಲ್ಲಿ ಸುಮಾರು 10,000 ವಿದ್ಯಾರ್ಥಿಗಳು ವಿದ್ಯಾರ್ಥಿನಿಲಯಗಳಲ್ಲಿ ವ್ಯಾಸಂಗ ಮಾಡುತ್ತಿದ್ದು, ನಿಲಯಗಳ ವಿದ್ಯಾರ್ಥಿಗಳಿಗಾಗಿ ₹22,000 ಕೋಟಿ ಮೀಸಲಿಡಲಾಗಿದೆ. ಇದರಲ್ಲಿ ₹3,000 ಕೋಟಿಯನ್ನು ವಿದ್ಯಾರ್ಥಿವೇತನಕ್ಕಾಗಿ ವೆಚ್ಚ ಮಾಡಲಾಗುತ್ತಿದೆ.
Scholarship Payments: ಅಭಿವೃದ್ಧಿಯೇ ಬದಲಾವಣೆಯ ಸಾಧನ
ದೇಶದ ಪ್ರಗತಿಗೆ ಅಭಿವೃದ್ಧಿಯೇ ಪ್ರಮುಖ ಸಾಧನವಾಗಿದೆ. ಹಿಂದೆ ದೇಶದಲ್ಲಿ ಆಹಾರ ಧಾನ್ಯಗಳ ಉತ್ಪಾದನೆ ಕಡಿಮೆಯಿದ್ದ ಕಾರಣ ಹಸಿರು ಕ್ರಾಂತಿ ಕೈಗೊಳ್ಳಲಾಯಿತು. ತಂತ್ರಜ್ಞಾನದ ಬೆಳವಣಿಗೆಯೊಂದಿಗೆ ದೇಶದಲ್ಲಿ ಹಲವು ಸುಧಾರಣೆಗಳು ಸಾಧ್ಯವಾಗಿವೆ. ಅಭಿವೃದ್ಧಿಯ ಮೂಲಕವೇ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯ ಎಂದು ವಿದ್ಯಾರ್ಥಿಯೊಬ್ಬರ ಪ್ರಶ್ನೆಗೆ ಉತ್ತರಿಸಿದರು.
ಸ್ಮಾರ್ಟ್ ಸಿಟಿಗಳ ಮಾದರಿಯಲ್ಲಿ ಹಳ್ಳಿಗಳ ಅಭಿವೃದ್ಧಿ ಯಾವಾಗ ಸಾಧ್ಯ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಭಾರತ ಹಳ್ಳಿಗಳ ದೇಶವಾಗಿದ್ದು, ಕಾಲಕ್ರಮೇಣ ನಗರೀಕರಣ ಹೆಚ್ಚುತ್ತಿದೆ. ಶೇ.70 ರಷ್ಟು ಜನರು ನಗರ ಭಾಗದಲ್ಲಿ ವಾಸಿಸುತ್ತಿದ್ದಾರೆ. ನಗರ ಪ್ರದೇಶಗಳ ಅಭಿವೃದ್ಧಿಗೆ ಸ್ಮಾರ್ಟ್ ಸಿಟಿ ಯೋಜನೆಯ ಮೂಲಕ ಆದ್ಯತೆ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ನಗರಗಳಂತೆ ಹಳ್ಳಿಗಳೂ ಅಭಿವೃದ್ಧಿ ಹೊಂದಲಿವೆ ಎಂದರು.
ಎತ್ತಿನಹೊಳೆ ಯೋಜನೆಯಿಂದ ಮುಂದಿನ ತಿಂಗಳು ತುಮಕೂರಿಗೆ ನೀರು ಬರುವ ನಿರೀಕ್ಷೆ
ತುಮಕೂರು ಜಿಲ್ಲೆಯ ನೀರಾವರಿ ಯೋಜನೆಗಳ ಕುರಿತು ಮಾತನಾಡಿದ ಉಪಮುಖ್ಯಮಂತ್ರಿಗಳು, ದೇವರಾಜ ಅರಸು ಅವರು ಆರಂಭಿಸಿದ್ದ ಹೇಮಾವತಿ ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಸುಮಾರು 30 ವರ್ಷಗಳು ಬೇಕಾಯಿತು. ಬಯಲುಸೀಮೆ ಪ್ರದೇಶಗಳಿಗೆ ನೇತ್ರಾವತಿ ನದಿಯಿಂದ ಕುಡಿಯುವ ನೀರು ಒದಗಿಸುವ ಉದ್ದೇಶದ ಎತ್ತಿನಹೊಳೆ ಯೋಜನೆಯನ್ನು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಆರಂಭಿಸಲಾಯಿತು. ಪ್ರಸ್ತುತ ಯೋಜನೆಯ ಕಾಮಗಾರಿ ಪ್ರಗತಿಯಲ್ಲಿದೆ ಎಂದರು.
ಆರಂಭದಲ್ಲಿ ₹13,000 ಕೋಟಿ ಅಂದಾಜು ವೆಚ್ಚ ಹೊಂದಿದ್ದ ಯೋಜನೆಯ ವೆಚ್ಚ ಪ್ರಸ್ತುತ ಹೆಚ್ಚಾಗಿದೆ. ಯೋಜನೆಯ 128 ಕಿ.ಮೀ. ಪೈಪ್‌ಲೈನ್ ಕಾಮಗಾರಿ ಪೂರ್ಣಗೊಂಡಿದ್ದು, ಮುಂದಿನ ತಿಂಗಳ ವೇಳೆಗೆ ತುಮಕೂರಿಗೆ ನೀರು ಹರಿಯುವ ಸಾಧ್ಯತೆಯಿದೆ. ಇದರ ಜೊತೆಗೆ ಬೆಂಗಳೂರಿಗೆ ಕುಡಿಯುವ ನೀರು ಒದಗಿಸುವ ಉದ್ದೇಶದಿಂದ ಆಲಮಟ್ಟಿ ಜಲಾಶಯದಿಂದ ನೀರು ಹರಿಸುವ ಯೋಜನೆಯ ಬಗ್ಗೆಯೂ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದರು.
ಕಾರ್ಮಿಕರ ಕೆಲಸದ ಅವಧಿ, ವೇತನದಲ್ಲಿ ಬದಲಾವಣೆಗೆ ಹೊಸ ಕಾನೂನು
ಉದ್ಯಮಗಳಲ್ಲಿ ಕೆಲಸ ಮಾಡುವ ನೌಕರರ ಕೆಲಸದ ಅವಧಿ ಹಾಗೂ ವೇತನದ ಕುರಿತು ವಿದ್ಯಾರ್ಥಿಯೊಬ್ಬರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಸ್ತುತ ಕಾರ್ಮಿಕ ಕಾಯ್ದೆಯ ಪ್ರಕಾರ ಕೆಲಸದ ಅವಧಿ ಮತ್ತು ವೇತನವನ್ನು ನಿಗದಿಪಡಿಸಲಾಗಿದೆ. ಈ ವ್ಯವಸ್ಥೆಯಲ್ಲಿ ಸಾಕಷ್ಟು ಬದಲಾವಣೆಗಳ ಅಗತ್ಯವಿದ್ದು, ಮುಂದಿನ ಅಧಿವೇಶನದಲ್ಲಿ ಹೊಸ ಕಾನೂನು ರೂಪಿಸಲಾಗುವುದು.
ರಾಜ್ಯದಲ್ಲಿ ಅಭಿವೃದ್ಧಿಗೆ ಸಂಬಂಧಿಸಿದ ಬದಲಾವಣೆಗಳು ನಿರಂತರವಾಗಿ ನಡೆಯುತ್ತಿದ್ದು, ಅದಕ್ಕೆ ಪೂರಕವಾಗಿ ಯೋಜನೆಗಳನ್ನು ರೂಪಿಸಲಾಗುತ್ತಿದೆ. ಡಿಜಿಟಲ್ ಇಂಡಿಯಾ ಮಾದರಿಯಲ್ಲಿ ಹೊಸ ತಲೆಮಾರಿನ ಅಗತ್ಯಗಳಿಗೆ ಅನುಗುಣವಾದ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದರು.
ಪ್ರತಿಯೊಬ್ಬರೂ ಸಂವಿಧಾನದ ಅರಿವು ಹೊಂದಿರಬೇಕು
ಸಂವಿಧಾನದ ಮಹತ್ವದ ಕುರಿತು ವಿದ್ಯಾರ್ಥಿಯೊಬ್ಬರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಉಪಮುಖ್ಯಮಂತ್ರಿ, ಸಂವಿಧಾನದ ಕುರಿತು ಪ್ರತಿ ತರಗತಿಯಲ್ಲೂ ಪಠ್ಯ ಅಳವಡಿಸುವ ಅಗತ್ಯವಿದೆ. ಪ್ರತಿಯೊಬ್ಬರೂ ಸಂವಿಧಾನದ ಅರಿವು ಹೊಂದಿರಬೇಕು. ಭಾರತದ ಸಂವಿಧಾನವು ಸಮಾನತೆಯ ಮಹತ್ವವನ್ನು ಸಾರುತ್ತದೆ.
ಪ್ರತಿಯೊಬ್ಬ ಭಾರತೀಯನೂ ಸಂವಿಧಾನವನ್ನು ಅರಿತು, ಸಮಾನತೆಯ ಪರಿಕಲ್ಪನೆಯನ್ನು ಅರ್ಥಮಾಡಿಕೊಳ್ಳಬೇಕು. ಸಂವಿಧಾನದ ಆಶಯಗಳನ್ನು ತಿಳಿದುಕೊಳ್ಳುವುದರಿಂದ ಸಮಾಜದಲ್ಲಿ ಸಮಾನತೆ ಹಾಗೂ ಜವಾಬ್ದಾರಿಯುತ ನಾಗರಿಕತ್ವದ ಅರಿವು ಮೂಡಲು ಸಾಧ್ಯ. ಈ ನಿಟ್ಟಿನಲ್ಲಿ ಯುವಜನತೆ ಸಂವಿಧಾನದ ಮೌಲ್ಯಗಳನ್ನು ತಿಳಿದುಕೊಳ್ಳುವುದು ಅತ್ಯಂತ ಅಗತ್ಯ ಎಂದಿದ್ದಾರೆ.





Click it and Unblock the Notifications
