ಗೃಹಲಕ್ಷ್ಮಿ: ಮನೆ ಯಜಮಾನಿಗೆ 2000 ರೂಪಾಯಿ, ಸರ್ಕಾರ ಹಾಕಿರುವ ಷರತ್ತುಗಳು ಇವು
ಬೆಂಗಳೂರು, ಜೂನ್. 06: ಕರ್ನಾಟಕ ರಾಜ್ಯದ ಕುಟುಂಬದಲ್ಲಿನ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ. 2000 ಗಳನ್ನು ನೀಡುವ "ಗೃಹಲಕ್ಷ್ಮಿ" ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡುವ ಕುರಿತು ಸರ್ಕಾರ ಮಂಗಳವಾರ ಅಧಿಕೃತ ಸೂಚನೆ ಹೊರಡಿಸಿದೆ. ಈ ಯೋಜನೆಯಲ್ಲಿ ಒಂದೇ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರಿದ್ದಲ್ಲಿ, ಒಬ್ಬ ಮಹಿಳೆಗೆ ಮಾತ್ರ ಯೋಜನೆ ಅನ್ವಯಿಸಲಿದೆ.
ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರವು ಅನೇಕ ಯೋಜನೆಗಳನ್ನು ಹಮ್ಮಿಕೊಂಡಿರುತ್ತದೆ. ಕುಟುಂಬದ ನಿರ್ವಹಣೆಯಲ್ಲಿ ಕುಟುಂಬ ಯಜಮಾನಿಯ ಪಾತ್ರ ಪುಮುಖವಾಗಿದ್ದು, ಯಜಮಾನಿಯು ಆರ್ಥಿಕವಾಗಿ ಸಬಲೀಕರಣಗೊಂಡಲ್ಲಿ ಕುಟುಂಬ ನಿರ್ವಹಣೆಯು ಉತ್ತಮ ಗುಣಮಟ್ಟದಲ್ಲಿರುತ್ತದೆ. ಆದ್ದರಿಂದ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ. 2000 ಗಳನ್ನು ನೀಡುವ "ಗೃಹಲಕ್ಷ್ಮಿ ಯೋಜನೆ"ಯನ್ನು ಜಾರಿಗೆ ತರಲು ಪ್ರಸ್ತಾಪಿಸಲಾಗಿದೆ ಎಂದು ಆದೇಶದಲ್ಲಿ ಹೇಳಲಾಗಿದೆ.

"ಸರ್ಕಾರದ ದಿನಾಂಕ 20-5-2023ರ ಆದೇಶದಲ್ಲಿ, ಅಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನೀಡಿದ ತಾತ್ವಿಕ ಅನುಮೋದನೆ ಮೇರೆಗೆ, ಕರ್ನಾಟಕ ರಾಜ್ಯದ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ. 2000ಗಳನ್ನು ನೀಡುವ "ಗೃಹಲಕ್ಷ್ಮಿ ಯೋಜನೆ"ಯನ್ನು ಜಾರಿಗೆ ತರಲು ತಾತ್ವಿಕ ಅನುಮೋದನೆ ನೀಡಿ ಆದೇಶಿಸಲಾಗಿದೆ . ಈ ವಿವರವಾದ ರೂಪುರೇಷ ಹಾಗೂ ಯೋಜನೆಯ ಮಾರ್ಗಸೂಚಿಗಳನ್ನು ಪ್ರತ್ಯೇಕವಾಗಿ ಹೊರಡಿಸಲಾಗುವುದೆಂದು ತಿಳಿಸಲಾಗಿದೆ".
ಅದರಂತೆ ಆರ್ಥಿಕ ಇಲಾಖೆ ಹಾಗೂ ಯೋಜನಾ ಇಲಾಖೆಗಳೊಂದಿಗೆ ಸಮಾಲೋಚಿಸಿ ಸಚಿವ ಸಂಪುಟದ ಅನುಮೋದನೆ ಪಡೆದು, ಈ ಕೆಳಗಿನಂತೆ ಆದೇಶಿಸಿದೆ. ರಾಜ್ಯದ ಕುಟುಂಬದಲ್ಲಿನ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ. 2000ಗಳನ್ನು (ಎರಡು ಸಾವಿರ ರೂಪಾಯಿಗಳು ಮಾತ್ರ) ನೀಡುವ "ಗೃಹಲಕ್ಷ್ಮಿ" ಯೋಜನೆಯನ್ನು 2023-24ನೇ ಸಾಲಿನಲ್ಲಿ ಈ ಕೆಳಕಂಡಂತೆ ಅನುಷ್ಟಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶಿಸಿದೆ.

1. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ವಿತರಿಸುವ ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಈ ಯೋಜನೆಯ ಅರ್ಹ ಫಲಾನುಭವಿಯಾಗಿರುತ್ತಾರೆ.
2. ಒಂದೇ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರಿದ್ದಲ್ಲಿ, ಒಬ್ಬ ಮಹಿಳೆಗೆ ಮಾತ್ರ ಯೋಜನ ಅನ್ವಯಿಸತಕ್ಕದ್ದು.

3. ಈ ಯೋಜನೆಯ ಫಲಾನುಭವಿಗಳು 2023ರ ಜೂನ್ 15 ರಿಂದ ಜುಲೈ 15 ರವರೆಗೆ ಅರ್ಜಿ ಸಲ್ಲಿಸುವುದು. ನಂತರ ಜುಲೈ 15 ರಿಂದ ಫಲಾನುಭವಿಗಳ ಆಯ್ಕೆ ಮಾಡುವುದು. ಆಯ್ಕೆಗೊಂಡ ಫಲಾನುಭವಿಗಳಿಗೆ ಆಗಸ್ಟ್ 15 ರಂದು ಅವರ ಬ್ಯಾಂಕ್ ಖಾತೆಗೆ ಹಣವನ್ನು ವರ್ಗಾವಣೆ ಮಾಡಲಾಗುವುದು.
4. ಅರ್ಜಿದಾರರು ಸೇವಾ ಸಿಂಧು ಪೋರ್ಟಲ್ ಮೂಲಕವಾಗಲೀ ಅಥವಾ ಭೌತಿಕವಾಗಿಯಾಗಲೀ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಬೇಕು.
5. ಅರ್ಜಿದಾರರು ಸಲ್ಲಿಸುವ ಪೂರ್ಣ ಪ್ರಮಾಣದ ಅರ್ಜಿಯಲ್ಲಿನ ಸ್ವಯಂ ಘೋಷಣೆ ಆಧಾರದ ಮೇಲೆ ಮಂಜೂರಾತಿ ನೀಡುವುದು. ಅರ್ಜಿಯಲ್ಲಿನ ಅಂಶಗಳ ಬಗ್ಗೆ ತದನಂತರ ಪರಿಶೀಲನೆ ಮಾಡುವುದು. ತಪ್ಪು ಮಾಹಿತಿ ನೀಡಿ ಸೌಲಭ್ಯ ಪಡೆದಿರುವುದು ಕಂಡುಬಂದಲ್ಲಿ, ಈಗಾಗಲೇ ಪಾವತಿಸಲಾಗಿರುವ ಹಣವನ್ನು ಅರ್ಜಿದಾರರಿಂದ ವಸೂಲು ಮಾಡುವುದು ಮತ್ತು ಅಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ.
6. ಈ ಯೋಜನೆಯ ಸೌಲಭ್ಯ ಪಡೆಯಲು ಫಲಾನುಭವಿಯ ಬ್ಯಾಂಕ್ ಖಾತೆ ಮತ್ತು ಆಧಾರ ಕಾರ್ಡ್ ಗಳನ್ನು ಜೋಡಣೆ ಮಾಡಬೇಕು.
7. ಈ ಕೆಳಕಂಡ ಮಾನದಂಡಗಳನ್ನು ಹೊಂದಿರುವವರು ಈ ಯೋಜನೆಗೆ ಅರ್ಹರಾಗಿರುವುದಿಲ್ಲ
* ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ಕುಟುಂಬದ ಪಾವತಿದಾರರಾಗಿದ್ದಲ್ಲಿ ಯೋಜನೆಗೆ ಅರ್ಹರಾಗಿರುವುದಿಲ್ಲ
* ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಜಿಎಸ್‌ಟಿ ರಿಟರ್ನ್ಸ್ ಸಲ್ಲಿಸುವವರಾಗಿದ್ದಲ್ಲಿ ಯೋಜನೆಗೆ ಅರ್ಹರಾಗಿರುವುದಿಲ್ಲ
ಈ ಆದೇಶವನ್ನು ಸಚಿವ ಸಂಪುಟವು ಪ್ರಕರಣ ಸಂಖ್ಯೆ 322/2023 ರಲ್ಲಿ ದಿನಾಂಕ 02-06-2023 ರಂದು ನೀಡಿರುವ ಅನುಮೋದನೆ ಯನ್ವಯ ಹೊರಡಿಸಲಾಗಿದೆ ಎಂದು ಅಧಿಕೃತ ಪತ್ರದಲ್ಲಿ ತಿಳಿಸಲಾಗಿದೆ.












Click it and Unblock the Notifications