Siddaramaiah: ರಾಷ್ಟ್ರ ರಾಜಕಾರಣಕ್ಕೆ ಹೋಗುವ ಬಗ್ಗೆ ಸಿದ್ದರಾಮಯ್ಯ ನಿಲುವೇನು?
ಕಾಂಗ್ರೆಸ್‌ನಲ್ಲಿ ಸದ್ಯ ಸಿಎಂ ಬದಲಾವಣೆ ಮಾತು ಜೀವ ಪಡೆದಿದ್ದರೆ, ಮತ್ತೊಂದೆಡೆ ಪೂರ್ಣಾವಧಿಗೂ ನಾನೇ ಸಿಎಂ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಇದರ ನಡುವೆ ಕಾಂಗ್ರೆಸ್ ಸಿದ್ದರಾಮಯ್ಯ ಅವರಿಗೆ ಎಐಸಿಸಿ ಮಟ್ಟದಲ್ಲಿ ದೊಡ್ಡ ಜವಾಬ್ದಾರಿ ನೀಡಿರುವುದು ಅಚ್ಚರಿ ಮೂಡಿಸಿದೆ. ಎಐಸಿಸಿ ಒಬಿಸಿ ಸಲಹಾ ಮಂಡಳಿಯಲ್ಲಿ ಅವರಿಗೆ ಮಹತ್ವದ ಸ್ಥಾನ ನೀಡಲಾಗಿದ್ದು, ಇದರ ಬೆನ್ನಲ್ಲೇ ಸಿದ್ದರಾಮಯ್ಯ ಅವರು ರಾಜ್ಯ ರಾಜಕಾರಣ ಬಿಟ್ಟು, ರಾಷ್ಟ್ರ ರಾಜಕಾರಣಕ್ಕೆ ಎಂಟ್ರಿ ಕೊಡುತ್ತಿದ್ದಾರೆ, ಅವರು ರಾಷ್ಟ್ರ ರಾಜಕಾರಣಕ್ಕೆ ಹೋದರೆ ಇಲ್ಲಿ ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ ಎಂಬ ಮಾತುಗಳು ಕೇಳಿಬಂದಿವೆ. ಹೀಗಾಗಿ ಸಿದ್ದರಾಮಯ್ಯ ಅವರು ಈ ಬಗ್ಗೆ ತಮ್ಮ ನಿಲುವು ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ. ರಾಷ್ಟ್ರ ರಾಜಕಾರಣಕ್ಕೆ ಹೋಗುವ ಬಗ್ಗೆ ಸ್ಪಷ್ಟನೆಯೂ ನೀಡಿದ್ದಾರೆ.
ಈ ಹಿಂದೆ ಸಿದ್ದರಾಮಯ್ಯ ಅವರು ವೇದಿಕೆಗಳಲ್ಲೇ ನನಗೆ ವಯಸ್ಸಾಯ್ತು, ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂಬ ನಿಲುವು ವ್ಯಕ್ತಪಡಿಸಿದ್ದರು. ಈಗ ಎಐಸಿಸಿ ಮಟ್ಟದಲ್ಲಿ ದೊಡ್ಡ ಜವಾಬ್ದಾರಿ ನೀಡಿರುವುದು ಅವರನ್ನು ರಾಷ್ಟ್ರ ರಾಜಕಾರಣಕ್ಕೆ ಕರೆಸಿಕೊಳ್ಳುವ ಸೂಚನೆ ಎಂಬ ಚರ್ಚೆ ಶುರುವಾಗಿದೆ. ಈ ಬಗ್ಗೆ ಸಿದ್ದರಾಮಯ್ಯ ಅವರು ತಮ್ಮ ಆಪ್ತರ ಬಳಿ ಸ್ಪಷ್ಟನೆ ನೀಡಿದ್ದಾರೆ ಎನ್ನಲಾಗಿದೆ. ನಾನು ಆವಾಗಲೇ ರಾಷ್ಟ್ರ ರಾಜಕಾರಣಕ್ಕೆ ಹೋಗಲಿಲ್ಲ, ಈಗ ಯಾಕೆ ಹೋಗಲಿ? ರಾಜಕೀಯದ ಕೊನೆಯ ಕಾಲಘಟ್ಟದಲ್ಲಿರುವಾಗ ಅಲ್ಲಿಗೆ ನಾನು ಯಾಕೆ ಹೋಗಬೇಕು? ಎಂದಿದ್ದಾರಂತೆ.

ನಾನು ರಾಷ್ಟ್ರೀಯ ರಾಜಕಾರಣಕ್ಕೆ ಹೋಗುವ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ, ನನ್ನ ಗಮನ ಸಂಪೂರ್ಣವಾಗಿ ಕರ್ನಾಟಕದ ಜನರ ಮೇಲಿದೆ. ಸದ್ಯಕ್ಕೆ ನಾನು ಯಾವುದೇ ರಾಷ್ಟ್ರ ರಾಜಕೀಯದ ಚಟುವಟಿಕೆಯಲ್ಲಿ ತೊಡಗಿಕೊಳ್ಳುವುದಿಲ್ಲ ಎಂಬ ನಿಲುವು ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ. ರಾಷ್ಟ್ರ ರಾಜಕಾರಣದಲ್ಲಿ ನನಗೆ ಈಗ ಆಸಕ್ತಿ ಇಲ್ಲ. ಆ ವಯಸ್ಸು ಕೂಡ ನನಗಿಲ್ಲ, ಸಾರ್ವಜನಿಕ ಬದುಕು ಇಲ್ಲೇ ಮುಗಿಯಲಿ. ಇನ್ನು ಒಬಿಸಿ ಸಭೆಯ ನೇತೃತ್ವ ನೀಡಿರುವ ಬಗ್ಗೆ ದೆಹಲಿಯ ನಾಯಕರಿಗೆ ವಿವರಣೆ ಕೇಳುತ್ತೇನೆ ಎಂದಿದ್ದಾರೆ. ಎಐಸಿಸಿ ಒಬಿಸಿ ಸಲಹಾ ಮಂಡಳಿಯಲ್ಲಿ ಪ್ರಮುಖ ಸ್ಥಾನ ನೀಡಿರುವ ಹಿನ್ನೆಲೆ ಕಾಂಗ್ರೆಸ್ ಹೈಕಮಾಂಡ್ ಭೇಟಿಗೆ ಸಿದ್ದರಾಮಯ್ಯ ಮುಂದಾಗಿದ್ದಾರೆ.
ರಾಜೀನಾಮೆ ಕೊಟ್ಟು ನಿವೃತ್ತರಾಗಿ ಅಂತಿದೆ ಕಾಂಗ್ರೆಸ್
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಿವೃತ್ತಿ ಸಮಯ ಹತ್ತಿರ ಬಂದಿದೆ ಎನ್ನುವುದಕ್ಕೆ ಕಾಂಗ್ರೆಸ್ ಹೈಕಮಾಂಡ್ ರಚನೆ ಮಾಡಿರುವ ಎಐಸಿಸಿ ಓಬಿಸಿ ರಾಷ್ಟ್ರೀಯ ಸಲಹಾ ಮಂಡಳಿ ಎಂಬ ಪುನರ್ವಸತಿ ಕೇಂದ್ರವೇ ಸಾಕ್ಷಿ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ. ಸಿದ್ದರಾಮಯ್ಯನವರೇ, ನಿಮ್ಮ ಸೇವೆ ಸಾಕು, ರಾಜೀನಾಮೆ ಕೊಟ್ಟು ನಿವೃತ್ತರಾಗಿ ಎಂದು ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರು ಪರೋಕ್ಷವಾಗಿ ಹೇಳುತ್ತಿದ್ದಾರೆ. ಇನ್ನೆಷ್ಟು ದಿನ ಸ್ವಾಮಿ ಈ ಭಂಡ ಬಾಳು. ಈ ರಬ್ಬರ್ ಸ್ಟ್ಯಾಂಪ್ ಕುರ್ಚಿ ಇದ್ದರೆಷ್ಟು, ಬಿಟ್ಟರೆಷ್ಟು? ನಿಮಗೆ ಕಿಂಚಿತ್ತಾದರೂ ಸ್ವಾಭಿಮಾನ ಇದ್ದಿದ್ದರೆ ಒಂದು ಕ್ಷಣವೂ ಅಧಿಕಾರದಲ್ಲಿ ಮುಂದುವರೆಯುತ್ತಿರಲಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.












Click it and Unblock the Notifications