Yashwanthrayagowda Patil: ಇಂಡಿ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ
ಬೆಂಗಳೂರು: ವಿಜಯಪುರ ಜಿಲ್ಲೆಯ ಇಂಡಿ ಮತ್ತು ಚಡಚಣ ತಾಲೂಕುಗಳನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿರುವುದನ್ನು ವಿರೋಧಿಸಿ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ್ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಅವರು ವಿಧಾನಸಭಾ ಸ್ಪೀಕರ್ ಜಿ.ಎಸ್. ಪಾಟೀಲ್ ಅವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ನೀಡಿದ್ದಾರೆ.
ಇಂಡಿ ಹಾಗೂ ಚಡಚಣ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸುವಂತೆ ಹಲವು ಬಾರಿ ಮನವಿ ಮಾಡಿದ್ದರೂ ಸರ್ಕಾರದಿಂದ ಸ್ಪಂದನೆ ಸಿಗಲಿಲ್ಲ ಎಂದು ಯಶವಂತರಾಯಗೌಡ ಪಾಟೀಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಮ್ಮ ಕ್ಷೇತ್ರದ ಜನರ ಆಶೋತ್ತರಗಳಿಗೆ ಸ್ಪಂದಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡುತ್ತಿರುವುದಾಗಿ ಅವರು ತಿಳಿಸಿದ್ದಾರೆ.

ಮಳೆ ಕೈಕೊಟ್ಟು ಬೆಳೆ ನಷ್ಟ
ತಮ್ಮ ರಾಜೀನಾಮೆ ಪತ್ರದಲ್ಲಿ ಇಂಡಿ ತಾಲೂಕಿನ ಬರ ಪರಿಸ್ಥಿತಿಯನ್ನು ವಿವರಿಸಿರುವ ಯಶವಂತರಾಯಗೌಡ ಪಾಟೀಲ್ ಅವರು, 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ತಾಲೂಕು ತೀವ್ರ ಬರ ಪರಿಸ್ಥಿತಿಗೆ ತುತ್ತಾಗಿದೆ ಎಂದು ತಿಳಿಸಿದ್ದಾರೆ.
ಆರಂಭದಲ್ಲಿ ಸ್ವಲ್ಪ ಮಳೆಯಾದ ಹಿನ್ನೆಲೆಯಲ್ಲಿ ರೈತರು ಸಾಲ ಮಾಡಿ ಬೀಜ ಮತ್ತು ಗೊಬ್ಬರ ಖರೀದಿಸಿ ಬಿತ್ತನೆ ಮಾಡಿದ್ದರು. ಆದರೆ ನಂತರ ಸಕಾಲದಲ್ಲಿ ಮಳೆಯಾಗದ ಕಾರಣ ಬೆಳೆಗಳು ಒಣಗಿವೆ. ಇದರೊಂದಿಗೆ ಜನರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯೂ ಎದುರಾಗಿದೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಆಗಸ್ಟ್ 28ರಂದು ಮನವಿ ಸಲ್ಲಿಕೆ
ಇಂಡಿ ತಾಲೂಕನ್ನು ಬರಪೀಡಿತ ಎಂದು ಘೋಷಿಸುವಂತೆ ಆಗಸ್ಟ್ 28ರಂದು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗೆ ಮನವಿ ಪತ್ರ ಸಲ್ಲಿಸಿದ್ದಾಗಿ ಯಶವಂತರಾಯಗೌಡ ಪಾಟೀಲ್ ತಿಳಿಸಿದ್ದಾರೆ. ಆದರೆ ವಿಜಯಪುರ ಜಿಲ್ಲೆಯ 13 ತಾಲೂಕುಗಳ ಪೈಕಿ ಇಂಡಿ ಮತ್ತು ಚಡಚಣವನ್ನು ಬರಪೀಡಿತ ಪಟ್ಟಿಯಿಂದ ಹೊರಗಿಡಲಾಗಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಾಜ್ಯದ ಬರಪೀಡಿತ ತಾಲೂಕುಗಳ ಪಟ್ಟಿಯಲ್ಲಿ ಇಂಡಿ ಮತ್ತು ಚಡಚಣ ಸೇರದಿರುವ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಅವರು ರಾಜೀನಾಮೆ ನೀಡಿದ್ದಾರೆ.
'ಸೌಮ್ಯ ಸ್ವಭಾವದವರಿಗೆ ಮನ್ನಣೆ ಇಲ್ಲ'
ತಮ್ಮ ರಾಜೀನಾಮೆ ಪತ್ರದಲ್ಲಿ ರಾಜಕೀಯ ವಾತಾವರಣದ ಬಗ್ಗೆಯೂ ಯಶವಂತರಾಯಗೌಡ ಪಾಟೀಲ್ ಅಸಮಾಧಾನ ಹೊರಹಾಕಿದ್ದಾರೆ. ಬಲಾಢ್ಯರಿಗೆ ಹಾಗೂ ಒತ್ತಡ ತಂತ್ರಗಳನ್ನು ಹೆಣೆಯುವವರಿಗೆ ಮನ್ನಣೆ ಇದೆ. ನಮ್ಮಂತಹ ಸೌಮ್ಯ ಸ್ವಭಾವದವರಿಗೆ ಯಾವುದೇ ಕೆಲಸಗಳಿಗೆ ಮನ್ನಣೆ ದೊರೆಯುತ್ತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಲವು ಬಾರಿ ಮನವಿ ಮಾಡಿದರೂ ತಮ್ಮ ಮಾತು ಮತ್ತು ಭಾವನೆಗಳಿಗೆ ಬೆಲೆ ಸಿಕ್ಕಿಲ್ಲ ಎಂದು ದೂರಿದ್ದಾರೆ.
ಈ ಕೂಡಲೇ ರಾಜೀನಾಮೆ ಅಂಗೀಕರಿಸಿ
ಇನ್ನೂ ಕ್ಷೇತ್ರದ ಜನರ ಆಶೋತ್ತರಗಳಿಗೆ ಸ್ಪಂದಿಸಲು ಸಾಧ್ಯವಾಗದ ಕಾರಣ ಸ್ವಇಚ್ಛೆಯಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿರುವ ಯಶವಂತರಾಯಗೌಡ ಪಾಟೀಲ್, ತಮ್ಮ ರಾಜೀನಾಮೆಯನ್ನು ಕೂಡಲೇ ಅಂಗೀಕರಿಸುವಂತೆ ಸ್ಪೀಕರ್ ಅವರಿಗೆ ಮನವಿ ಮಾಡಿದ್ದಾರೆ.
ಈ ಬೆಳವಣಿಗೆಯ ಬೆನ್ನಲ್ಲೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಯಶವಂತರಾಯಗೌಡ ಪಾಟೀಲ್ ಅವರನ್ನು ಮನವೊಲಿಸಲು ಪ್ರಯತ್ನ ನಡೆಸಿದ್ದಾರೆ, ಅಲ್ಲದೇ ಈ ಕುರಿತು ಯಶವಂತರಾಯಗೌಡ ಪಾಟೀಲ್ ಅವರ ಜೊತೆಗೆ ಮಾತನಾಡಿದ್ದಾರೆ.
ತಾಲೂಕುಗಳ ಸಂಖ್ಯೆ 177ಕ್ಕೆ ಏರಿಕೆ
ರಾಜ್ಯದಲ್ಲಿ ಮುಂಗಾರು ಮಳೆಯ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯನ್ನು ನಿರಂತರವಾಗಿ ವೈಜ್ಞಾನಿಕವಾಗಿ ಮೌಲ್ಯಮಾಪನ ನಡೆಸಲಾಗುತ್ತಿದ್ದು, ರೈತರ ಸಂಕಷ್ಟಕ್ಕೆ ತ್ವರಿತವಾಗಿ ಸ್ಪಂದಿಸುವ ನಿಟ್ಟಿನಲ್ಲಿ ಹಂತ ಹಂತವಾಗಿ ಕ್ರಮ ಕೈಗೊಳ್ಳುತ್ತಿದ್ದೇವೆ.
ಮೊದಲ ಹಂತದಲ್ಲಿ 101 ಹಾಗೂ ಎರಡನೇ ಹಂತದಲ್ಲಿ 23 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದ್ದೆವು. ಇದೀಗ ಮತ್ತೆ 53 ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಿಸಿ ಆದೇಶ ಹೊರಡಿಸಿದ್ದೇವೆ. ಈ ಪೈಕಿ 51 ತಾಲೂಕುಗಳು ತೀವ್ರ ಹಾಗೂ 2 ತಾಲೂಕುಗಳು ಸಾಧಾರಣ ಬರಪೀಡಿತವಾಗಿದ್ದು, ಇದರೊಂದಿಗೆ ರಾಜ್ಯದಲ್ಲಿ ಬರಪೀಡಿತ ಎಂದು ಘೋಷಿಸಲಾದ ತಾಲೂಕುಗಳ ಸಂಖ್ಯೆ 177ಕ್ಕೆ ಏರಿಕೆಯಾಗಿದೆ.


Click it and Unblock the Notifications
