ಯತೀಂದ್ರಗೆ ಮಹತ್ವದ ಖಾತೆ ಸಿಗುವ ಸಾಧ್ಯತೆ: ಮೈಸೂರು ಕ್ಷೇತ್ರದಲ್ಲಿ ಹಿಡಿತ; ಸಿದ್ದರಾಮಯ್ಯ ಲೆಕ್ಕಾಚಾರವೇನು
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಡಿಕೆ ಶಿವಕುಮಾರ್ ಅವರೊಂದಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಹಾಗೂ ವಿಧಾನ ಪರಿಷತ್ತಿನ ಸದಸ್ಯರಾದ ಯತೀಂದ್ರ ಸಿದ್ದರಾಮಯ್ಯ ಅವರು ಸಹ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅನಿರೀಕ್ಷಿತವಾಗಿ ಹಾಗೂ ಅವರ ತಂದೆ ಸಿದ್ದರಾಮಯ್ಯ ಅವರ ಸಹಾಯಕ್ಕಾಗಿ ರಾಜಕೀಯಕ್ಕೆ ಬಂದ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಇದೀಗ ಮಹತ್ವದ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇದೆ. ಈಚೆಗೆ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಯತೀಂದ್ರ ಸಿದ್ದರಾಮಯ್ಯ ಅವರು ನನಗೆ ಮಂತ್ರಿಗಿರಿ ಕೊಡುವುದಾಗಿ ಕಾಂಗ್ರೆಸ್ ಹೈಕಮಾಂಡ್ ಭರವಸೆ ನೀಡಿದೆ. ಹೀಗಾಗಿ ನಾನೂ ಸಚಿವನಾಗಲಿದ್ದೇನೆ ಎಂದು ಯತೀಂದ್ರ ಸಿದ್ದರಾಮಯ್ಯ ಅವರು ಹೇಳಿದ್ದರು. ಅದರಂತೆ ಜೂನ್ 3ರ ಬುಧವಾರ ಡಿಕೆ ಶಿವಕುಮಾರ್ ಅವರೊಂದಿಗೆ ಸಚಿವರಾಗಿ ಯತೀಂದ್ರ ಸಿದ್ದರಾಮಯ್ಯ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ನಿಯೋಜಿತ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಹೊಸ ಸಚಿವ ಸಂಪುಟ ರಚನೆಯಾಗಲಿದೆ. ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಅವರ ಹೆಸರನ್ನು ಸಹ ಕಾಂಗ್ರೆಸ್ ಹೈಕಮಾಂಡ್ ಅನುಮೋದಿಸಿತ್ತು. ಮೊದಲ ಹಂತದಲ್ಲಿಯೇ ಯತೀಂದ್ರ ಸಿದ್ದರಾಮಯ್ಯ ಅವರು ಸಚಿವ ಸಂಪುಟಕ್ಕೆ ಸೇರ್ಪಡೆಯಾಗಿದ್ದು, ಮೈಸೂರು ಜಿಲ್ಲೆಗೆ ಸಚಿವ ಸಂಪುಟದಲ್ಲಿ ಮಹತ್ವದ ಸ್ಥಾನ ಸಿಗಲಿದೆ ಎಂದು ನಿರೀಕ್ಷಿಸಲಾಗಿದೆ. ಸಿದ್ದರಾಮಯ್ಯ ಅವರು ಅಧಿಕಾರದಿಂದ ದೂರ ಉಳಿದರೂ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಹಾಗೂ ಸಿದ್ದರಾಮಯ್ಯ ಆಪ್ತರು ಮೊದಲ ಹಂತದಲ್ಲಿಯೇ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಹುದ್ದೆಯಿಂದ ನಿರ್ಗಮಿಸಿದ ನಂತರ ಯತೀಂದ್ರ ಸಿದ್ದರಾಮಯ್ಯ ಅವರು ಸರ್ಕಾರದಲ್ಲಿ ಮೈಸೂರಿನ ಪ್ರಮುಖ ರಾಜಕೀಯ ನಾಯಕರಾಗಲು ವೇದಿಕೆ ಸಿದ್ಧವಾಗುತ್ತಿದೆ ಎಂದು ವಿಶ್ಲೇಷಿಸಲಾಗಿದೆ. ವೈದ್ಯ, ರೋಗಶಾಸ್ತ್ರಜ್ಞರಾಗಿರುವ ಯತೀಂದ್ರ ಅವರು ಎಂಬಿಬಿಎಸ್ ಪೂರ್ಣಗೊಳಿಸಿ ನಂತರ ಎಂಡಿ ಪದವಿ ಪಡೆದು ಸಕ್ರಿಯ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದರು. ಮೊದಲು ಸಿದ್ದರಾಮಯ್ಯ ಅವರಿಗೆ ಸಹಾಯ ಮಾಡುವ ಉದ್ದೇಶದಿಂದಲೇ ರಾಜಕೀಯ ಪ್ರವೇಶ ಮಾಡಿರುವುದಾಗಿ ಯತೀಂದ್ರ ಸಿದ್ದರಾಮಯ್ಯ ಅವರು ಹೇಳಿದ್ದರು. ಇದೀಗ ರಾಜಕೀಯ ಪ್ರವೇಶ ಮಾಡಿದ ಕೆಲವೇ ವರ್ಷಗಳಲ್ಲಿ ಸಚಿವ ಸ್ಥಾನ ಸಿಕ್ಕಿದೆ.
2018 ಮತ್ತು 2023 ರ ನಡುವೆ ವರುಣ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಯತೀಂದ್ರ ಸಿದ್ದರಾಮಯ್ಯ ಅವರು ನಂತರ ವಿಧಾನ ಪರಿಷತ್ತಿಗೆ ಆಯ್ಕೆಯಾಗಿದ್ದರು. ಅಲ್ಲದೆ ತಮ್ಮ ತಂದೆ ಸಿದ್ದರಾಮಯ್ಯ ಅವರ ವರುಣ ಕ್ಷೇತ್ರದ ಉಸ್ತುವಾರಿ ವಹಿಸಿಕೊಂಡರು. ಈ ಸಂದರ್ಭದಲ್ಲಿ ವಿವಾದವೂ ಸೃಷ್ಟಿಯಾಗಿತ್ತು. ಇನ್ನು ಸಂಘಟನಾತ್ಮಕ ವ್ಯವಹಾರಗಳಲ್ಲಿ ಸಕ್ರಿಯವಾಗಿರುವ ಯತೀಂದ್ರ ಸಿದ್ದರಾಮಯ್ಯ ಅವರು ಸರಳ ಸಜ್ಜನಿಕೆಯಿಂದ ಖ್ಯಾತಿ ಪಡೆದಿದ್ದಾರೆ. ಯತೀಂದ್ರ ಅವರು ಸಂಪುಟಕ್ಕೆ ಬಡ್ತಿ ಪಡೆದುಕೊಂಡಿರುವುದು ಸರ್ಕಾರದಲ್ಲಿ ಸಿದ್ದರಾಮಯ್ಯ ಅವರ ಪ್ರಭಾವ ಮುಂದುವರಿಯಲಿದೆ ಎಂದು ಹೇಳಲಾಗಿದೆ.












Click it and Unblock the Notifications