Year Ender 2024: 2024ರಲ್ಲಿ ಭಾರೀ ಸದ್ದು ಮಾಡಿದ ಕಾಂಗ್ರೆಸ್ ಸರ್ಕಾರದ ಹಗರಣಗಳ ಪಟ್ಟಿ ಇಲ್ಲಿದೆ
ಬೆಂಗಳೂರು, ಡಿಸೆಂಬರ್ 17: ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ 40 ಪರ್ಸೆಂಟ್ ಕಮಿಷನ್ ಆರೋಪದ ಕುರಿತು ಕಾಂಗ್ರೆಸ್ ಬೃಹತ್ ಹೋರಾಟವನ್ನ ನಡೆಸಿತ್ತು. ಅಲ್ಲದೇ ಕಾಂಗ್ರೆಸ್ 2023 ರ ವಿಧಾನಸಭಾ ಚುನಾವಣೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳನ್ನ ನೀಡುವ ಮೂಲಕ ಕಾಂಗ್ರೆಸ್ ಭರ್ಜರಿ ಬಹುಮತದೊಂದಿದೆ ಅಧಿಕಾರಕ್ಕೆ ಬಂದಿದೆ. ಆದರೆ, ಮೊದಲ ವರ್ಷದಲ್ಲೇ ಹಲವು ಹಗರಣಗಳು ಭಾರೀ ಸದ್ದು ಮಾಡಿವೆ.
ಹೌದು, ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಹತ್ತು ಹಲವು ಹಗರಣಗಳು ರಾಜ್ಯದಲ್ಲಿ ದೊಡ್ಡ ಮಟ್ಟಿಗೆ ಸದ್ದು ಮಾಡುತ್ತಿದೆ. ವಾಲ್ಮೀಕಿ ಅಭಿವೃದ್ದಿ ನಿಗಮದ ಅವ್ಯವಹಾರದ ಕುರಿತು ಒಬ್ಬ ಸಚಿವರು ಮಂತ್ರಿಗಿರಿಗೆ ರಾಜೀನಾಮೆ ನೀಡಿದ್ರು. ಅಲ್ಲದೇ ಮುಡಾ ಹಗರಣ ರಾಜ್ಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿದ್ದು, ಅಲ್ಲದೇ ಈ ಹಗರಣದಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಎಫ್ ಐ ಆರ್ ಸಹ ದಾಖಲಾಗಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ
ವಾಲ್ಮೀಕಿ ಅಭಿವೃದ್ದಿ ನಿಗಮದ ಹಗರಣವು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಕಲ್ಯಾಣ ನಿಗಮ ನಿಯಮಿತದಲ್ಲಿನ ಭ್ರಷ್ಟಾಚಾರದ ಆರೋಪವಾಗಿದೆ. ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕಾಗಿ ಮೀಸಲಿಟ್ಟ ಹಣವನ್ನು ಸರ್ಕಾರ ದುರುಪಯೋಗಪಡಿಸಿಕೊಂಡಿದೆ ಎನ್ನುವ ಆರೋಪ ಇದಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್ ಆತ್ಮಹತ್ಯೆ ಮಾಡಿಕೊಂಡ ನಂತರ ಹಗರಣ ಬೆಳಕಿಗೆ ಬಂದಿತ್ತು. ಪಾಲಿಕೆಯಿಂದ ವಿವಿಧ ಬ್ಯಾಂಕ್ ಖಾತೆಗಳಿಗೆ ಅಕ್ರಮವಾಗಿ ಹಣ ವರ್ಗಾವಣೆ ಮಾಡಲಾಗಿದೆ ಎಂದು ಡೆತ್ನೋಟ್ನಲ್ಲಿ ಬರೆಯಲಾಗಿತ್ತು. ಈ ಹಗರಣ ಸರ್ಕಾರವನ್ನ ಇಕ್ಕಟ್ಟಿಗೆ ಸಿಲುಕುವಂತೆಯೂ ಮಾಡಿತ್ತು.
ವಾಲ್ಮೀಕಿ ಅಭಿವೃದ್ದಿ ನಿಗಮದ ಹಗರಣದಿಂದಾಗಿ ಆಗಿನ ಸಚಿವ ಬಿ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ರು. ಅಲ್ಲದೇ ಈ ಹಗರಣದ ಪ್ರಧಾನ ಆರೋಪಿ ಎಂದು ಹೆಸರಿಸಿ ಜಾರಿ ನಿರ್ದೇಶನಾಲಯ (ಇಡಿ) ಆರೋಪಪಟ್ಟಿ ಸಲ್ಲಿಸಿತ್ತು. ನಾಗೇಂದ್ರ ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ 18 ನಕಲಿ ಖಾತೆಗಳಿಗೆ ನಿಗಮದಿಂದ ಹಣವನ್ನು ವರ್ಗಾಯಿಸಿದ್ದರು ಎಂದು ಇಡಿ ಆರೋಪಿಸಿತ್ತು.
ಮುಡಾ ಹಗರಣ
ರಾಜ್ಯದಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣ ಬಹಳ ಸದ್ದು ಮಾಡಿದ್ದು, ಈ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಅವರ ಹೆಸರು ಕೇಳಿ ಬಂದಿದೆ. ಈ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭಾಗಿಯಾಗಿದ್ದಾರೆ ಎಂದು ರಾಜೀನಾಮೆಗೆ ವಿಪಕ್ಷಗಳು ಆಗ್ರಹಿಸಿದ್ವು. ಅಲ್ಲದೇ ಸಿದ್ದರಾಮಯ್ಯ ಕುರಿತು ಲೋಕಾಯುಕ್ತ ತನಿಖೆಗೆ ರಾಜ್ಯಪಾಲರು ಅನುಮತಿಯನ್ನೂ ನೀಡಿದ್ದರು. ಈಗಾಗಲೇ ಸಿಎಂ ಸಿದ್ದರಾಮಯ್ಯ ಲೋಕಾಯುಕ್ತ ವಿಚಾರಣೆಗೂ ಹಾಜರಾಗಿದ್ದಾರೆ. ಮತ್ತೊಂದೆಡೆ, ಜಾರಿ ನಿರ್ದೇಶನಾಲಯವೂ ಮುಡಾ ಹಗರಣ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ.
ಭೋವಿ ನಿಗಮದ ಅವ್ಯವಹಾರ
ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲಿ ಕೂಡ ಬಹುಕೋಟಿ ರೂಪಾಯಿ ಮೊತ್ತದ ಅವ್ಯವಹಾರ ನಡೆದಿರುವುದು ಬೆಳಕಿಗೆ ಬಂದಿದೆ. ಉದ್ಯಮಿ ಜೀವಾ ಅವರು ಬೆಂಗಳೂರಿನ ಪದ್ಮನಾಭನಗರದ ರಾಘವೇಂದ್ರ ಲೇಔಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ನಂತರ ಪ್ರಕರಣ ಬೆಳಕಿಗೆ ಬಂದಿತ್ತು. ಐದು ಖಾಸಗಿ ಕಂಪನಿಗಳಿಗೆ ಅಕ್ರಮವಾಗಿ 34 ಕೋಟಿ ರೂ. ಹಣ ವರ್ಗಾವಣೆಯಾಗಿರುವುದು ಸಿಐಡಿ ತನಿಖೆ ವೇಳೆ ತಿಳಿದುಬಂದಿತ್ತು.
ಅಬಕಾರಿ ಇಲಾಖೆಯಲ್ಲಿ ಹಗರಣ
ಅಬಕಾರಿ ಇಲಾಖೆಯು ಮದ್ಯದಂಗಡಿಗಳಿಂದ 'ಮಂಥ್ಲಿ ಮನಿ' ಹೆಸರಿನಲ್ಲಿ ಲಂಚ ಪಡೆಯುತ್ತಿದೆ ಎಂಬ ಆರೋಪ ಈ ವರ್ಷ ಕೇಳಿಬಂದಿತ್ತು. ಮದ್ಯ ಮಾರಾಟ ವ್ಯಾಪಾರಿಗಳಿಂದ ಮಾಸಿಕ ಹಣ ವಸೂಲಿ ಮಾಡಲಾಗುತ್ತಿದೆ ಎಂದು ಕರ್ನಾಟಕ ವೈನ್ ಮರ್ಚೆಂಟ್ ಅಸೋಸಿಯೇಷನ್ ಆರೋಪಿಸಿತ್ತು. ರಾಜ್ಯದಲ್ಲಿ 11 ಸಾವಿರಕ್ಕೂ ಹೆಚ್ಚು ವೈನ್ ಸ್ಟೋರ್ಗಳಿವೆ. ಪ್ರತಿಯೊಂದರಿಂದ 20 ಸಾವಿರ ರೂ. ವಸೂಲಿ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಕೂಡ ಮದ್ಯದಂಗಡಿ ಮಾಲೀಕರ ಹೇಳಿಕೆಗಳನ್ನು ಆಧರಿಸಿ ಗಂಭೀರ ಆರೋಪ ಮಾಡಿದ್ದರು.
ಪ್ರವಾಸೋದ್ಯಮ ಇಲಾಖೆಯಲ್ಲಿ ಅಕ್ರಮ
ಬಾಗಲಕೋಟೆಯಲ್ಲಿ ಪ್ರವಾಸೋದ್ಯಮ ಇಲಾಖೆಯ 2,47,73,999 ರೂ. ಹಣ ಅಕ್ರಮ ವರ್ಗಾವಣೆ ಆಗಿರುವುದು ಬೆಳಕಿಗೆ ಬಂದಿತ್ತು. ಪ್ರವಾಸೋದ್ಯಮ ಇಲಾಖೆ ಅಧಿಕಾರಿ ಗೋಪಾಲ ಹಿತ್ತಲಮನಿ ಎಂಬುವವರು ಬಾಗಲಕೋಟೆ ಐಡಿಬಿಐ ಬ್ಯಾಂಕ್ ಮ್ಯಾನೇಜರ್ ಹಾಗೂ ಸಿಬ್ಬಂದಿ ವಿರುದ್ಧ ದೂರು ದಾಖಲಿಸಿದ ನಂತರ ಹಗರಣ ಬಯಲಾಗಿದೆ.












Click it and Unblock the Notifications