ಉಪ ಚುನಾವಣೆ ಬೆನ್ನಲ್ಲೇ ಬಿಜೆಪಿ ಮಹತ್ವದ ಕಾರ್ಯಕಾರಣಿ ಸಭೆ!
ಬೆಂಗಳೂರು, ನ. 04: ವಿಧಾನಸಭೆಯ ಎರಡು ಕ್ಷೇತ್ರಗಳಿಗೆ ಉಪ ಚುನಾವಣೆ ಹಾಗೂ ವಿಧಾನ ಪರಿಷತ್‌ನ ನಾಲ್ಕು ಕ್ಷೇತ್ರಗಳಿಗೆ ಚುನಾವಣೆ ಮುಗಿಯುತ್ತಿದ್ದಂತೆಯೆ ಬಿಜೆಪಿ ಮತ್ತೊಂದು ಚುನಾವಣೆಗೆ ಸಿದ್ಧತೆ ಆರಂಭಿಸಿದೆ. ಎರಡು ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಿಂದ ಬಿಜೆಪಿ ಸರ್ಕಾರಕ್ಕೆ ತೊಂದರೆ ಇರಲಿಲ್ಲ. ಆದರೆ ಮುಂದೆ ಬರಲಿರುವ ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪ ಚುನಾವಣೆಯು ರಾಜ್ಯ ಬಿಜೆಪಿ ಸರ್ಕಾರಕ್ಕೆ ಮಹತ್ವದ್ದಾಗಿದೆ.
Recommended Video
ಜೊತೆಗೆ ಗ್ರಾಮ ಪಂಚಾಯತ್ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಬೇಕಿದೆ. ಇದೇ ಸಂದರ್ಭದಲ್ಲಿ ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ಬಿಜೆಪಿಯಲ್ಲಿಯೇ ಮಾತು ಕೇಳಿ ಬಂದಿದೆ. ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ನಾಳೆ (ನ.5) ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಬಿಜೆಪಿ ಕಾರ್ಯಕಾರಣಿ ಸಭೆಗೆ ಮಹತ್ವ ಬಂದಿದೆ.

ಕಾರ್ಯಕಾರಣಿಯಲ್ಲಿ ಬಿಎಸ್‌ವೈ ಭಾಗಿ
ಮಹತ್ವದ ರಾಜ್ಯ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಂಗಳೂರಿಗೆ ತೆರಳಿದ್ದಾರೆ. ನಾಳೆ (ನ.5) ಮಂಗಳೂರಿನಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿಯನ್ನು ಅವರು ಉದ್ಘಾಟನೆ ಮಾಡಲಿದ್ದಾರೆ. ನಂತರ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ಸಭೆಯಲ್ಲಿ ಸಧ್ಯದ ರಾಜಕೀಯ ಬೆಳವಣಿಗೆಗಳ ಕುರಿತು ಮಹತ್ವದ ಚರ್ಚೆ ನಡೆಯಲಿದೆ ಎಂಬ ಮಾಹಿತಿಯಿದೆ.

ಮತ್ತೆ ಚುನಾವಣೆ ಸಿದ್ಧತೆ
ಆರ್ ಆರ್ ನಗರ ಹಾಗೂ ಶಿರಾ ಕ್ಷೇತ್ರಗಳ ಉಪ ಚುನಾವಣೆಯ ಬಳಿಕ ಇದೀಗ ಮತ್ತೆ ಬೆಳಗಾವಿ ಲೋಕಸಭಾ ಉಪಚುನಾವಣೆ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಎದುರಿಸಬೇಕಾಗಿದೆ. ರಾಜ್ಯ ಬಿಜೆಪಿ ಸರ್ಕಾರ ಹಾಗೂ ಯಡಿಯೂರಪ್ಪ ಅವರ ರಾಜಕೀಯ ಭವಿಷ್ಯದ ದೃಷ್ಟಿಯಿಂದ ಈ ಚುನಾವಣೆಗಳು ಮಹತ್ವ ಪಡೆದುಕೊಂಡಿವೆ.
ಈಗ ನಡೆದಿರುವ ಎರಡು ಉಪ ಚುನಾವಣೆಯ ಫಲಿತಾಂಶದಿಂದ ಸರ್ಕಾರಕ್ಕೆ ತೊಂದರೆಯಿಲ್ಲ. ಆದರೆ ಮುಂದಿನ ಚುನಾವಣೆಯ ಫಲಿತಾಂಶ ಸರ್ಕಾರ ಹಾಗೂ ಯಡಿಯೂರಪ್ಪ ಅವರ ಮೇಲೆ ಪರಿಣಾಮ ಬೀರಲಿದೆ. ಹೀಗಾಗಿ ರಾಜ್ಯ ಬಿಜೆಪಿ ಕಾರ್ಯಕಾರಣಿಯಲ್ಲಿ ಈ ಬಗ್ಗೆ ಮಹತ್ವದ ಚರ್ಚೆ ನಡೆಯಲಿದೆ.

ಗ್ರಾ.ಪಂ., ಬಿಬಿಎಂಪಿ ಚುನಾವಣೆ
ಜೊತೆಗೆ ಗ್ರಾಮ ಪಂಚಾಯತ್ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆಯ ಕುರಿತು ಕಾರ್ಯಕಾರಣಿಯಲ್ಲಿ ಮಹತ್ವದ ಚರ್ಚೆ ನಡೆಯಲಿದೆ. ಜೊತೆಗೆ ಬೆಳಗಾವಿ ಲೋಕಸಭಾ ಉಪಚುನಾವಣೆ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಉಪಚುನಾವಣೆ ಬಗ್ಗೆ ಚರ್ಚೆ ನಡೆಯಲಿದೆ. ಸುಮಾರು 150 ಪ್ರತಿನಿಧಿಗಳು ಭಾಗವಹಿಸುವ ಕಾರ್ಯಕಾರಿಣಿಯಲ್ಲಿ ರಾಜ್ಯ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ವಿಭಾಗವಾರು ವರದಿ ಪಡೆಯಲಿದ್ದಾರೆ.

ಕೋವಿಡ್ ನಿಯಂತ್ರಣ, ಪ್ರವಾಹ ಸ್ಥಿತಿಗತಿ
ರಾಜಕೀಯ ಚರ್ಚೆಯ ಜೊತೆಗೆ ಕಾರ್ಯಕಾರಿಣಿಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ ವಿಚಾರ ಮಂಡನೆ ಮತ್ತು ನಿರ್ಣಯ ಕೈಗೊಳ್ಳಲಾಗುತ್ತಿದೆ. ಹಾಗೆಯೆ ರಾಜ್ಯದಲ್ಲಿ ಕೊರೊನಾವೈರಸ್ ನಿಯಂತ್ರಣ, ಪ್ರವಾಹ ಸ್ಥಿತಿಗತಿ ಕುರಿತೂ ಮಹತ್ವದ ಚರ್ಚೆ ನಡೆಯಲಿದೆ. ಬಿಜೆಪಿ ಮುಂದಿನ ಕಾರ್ಯಯೋಜನೆಗಳ ಕುರಿತು ಚರ್ಚೆ ನಡೆಯಲಿದೆ.
ಮಂಗಳೂರಿನ ಟಿ.ವಿ. ರಮಣ ಪೈ ಸಭಾಂಗಣದಲ್ಲಿ ನಾಳೆ ಬೆಳಗ್ಗೆ ೧೦ ಗಂಟೆಗೆ ಕಾರ್ಯಕಾರಿಣಿ ಉದ್ಘಾಟನೆಯನ್ನು ಯಡಿಯೂರಪ್ಪ ಮಾಡಲಿದ್ದಾರೆ. ಬಳಿಕ 11.30ಕ್ಕೆ ಖಾಸಗಿ ಹೋಟೆಲ್‌ನಲ್ಲಿ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆ ನಡೆಯಲಿದೆ. ಕೋರ್ ಕಮಿಟಿ ಸಭೆ ಬಳಿಕ ಮಧ್ಯಾಹ್ನ 02.30ರಿಂದ ಸಂಜೆ 5 ಗಂಟೆಯವರೆಗೆ ಕಾರ್ಯಕಾರಿಣಿ ಮುಂದುವರಿಯಲಿದೆ.












Click it and Unblock the Notifications