ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರಕ್ಕೆ 2027ರ ಅಂತ್ಯದೊಳಗೆ ಎತ್ತಿನಹೊಳೆ ನೀರು
ಬೆಂಗಳೂರು: ಎತ್ತಿನಹೊಳೆ ಯೋಜನೆಯ ಮೂಲಕ 2027ರ ಅಂತ್ಯದೊಳಗೆ ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕುಡಿಯುವ ನೀರಿನ ಕೆರೆಗಳಿಗೆ ನೀರು ಹರಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ತಕ್ಷಣ ಕೈಗೊಳ್ಳಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಸಚಿವ ಕೃಷ್ಣ ಬೈರೇಗೌಡ ಅವರ ಅಧ್ಯಕ್ಷತೆಯಲ್ಲಿ ನಡೆದ ಜಂಟಿ ಸಭೆಯಲ್ಲಿ ಕೋಲಾರ ಉಸ್ತುವಾರಿ ಸಚಿವ ಬೈರತಿ ಸುರೇಶ್, ಚಿಕ್ಕಬಳ್ಳಾಪುರ ಉಸ್ತುವಾರಿ ಸಚಿವ ಎಂ.ಸಿ.ಸುಧಾಕರ್ ಹಾಗೂ ಬೆಂಗಳೂರು ಗ್ರಾಮಾಂತರ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಭಾಗವಹಿಸಿದರು. ಈ ಮೂರು ಜಿಲ್ಲೆಗಳ ತೀವ್ರ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ಉದ್ದೇಶದಿಂದಲೇ ಎತ್ತಿನಹೊಳೆ ಯೋಜನೆಯನ್ನು ಸರ್ಕಾರ ಕೈಗೆತ್ತಿಕೊಂಡಿದ್ದು, ಈ ಗುರಿ ಈಡೇರಬೇಕಾದರೆ ಬಾಕಿ ಉಳಿದಿರುವ ಕಾಮಗಾರಿಗಳನ್ನು ಸಮರೋಪಾದಿಯಲ್ಲಿ ಪೂರ್ಣಗೊಳಿಸಬೇಕೆಂದು ಸೂಚನೆ ನೀಡಿದರು.

ತುಮಕೂರು ಗಡಿಯಲ್ಲಿದೆ ಎತ್ತಿನಹೊಳೆ
ಈ ವೇಳೆ, 2027ರೊಳಗೆ ಬೆಂಗಳೂರಿನ ಸುತ್ತಮುತ್ತಲ ಜಿಲ್ಲೆಗಳಿಗೆ ಎತ್ತಿನಹೊಳೆ ಯೋಜನೆಯ ಮೂಲಕ ಕುಡಿಯುವ ನೀರು ತಲುಪಿಸುವುದನ್ನು ಖಚಿತಪಡಿಸಬೇಕೆಂದು ಅಧಿಕಾರಿಗಳಿಗೆ ಮಹತ್ವದ ನಿರ್ದೇಶನ ನೀಡಿದರು. ಎತ್ತಿನಹೊಳೆ ನೀರನ್ನು ಈಗಾಗಲೇ ತುಮಕೂರು ಜಿಲ್ಲೆಯ ಗಡಿಯವರೆಗೆ ತರಲಾಗಿದ್ದು, ಮುಂದಿನ ಹಂತದಲ್ಲಿ ದೊಡ್ಡಬಳ್ಳಾಪುರದಿಂದ ಕುಂದಾಣ ಮಾರ್ಗವಾಗಿ ಒಂದು ಪೈಪ್‌ಲೈನ್ ಕೋಲಾರ ಹಾಗೂ ಬಂಗಾರಪೇಟೆ ಕಡೆಗೆ ಮತ್ತು ಮತ್ತೊಂದು ಪೈಪ್‌ಲೈನ್ ಚಿಂತಾಮಣಿ-ಶ್ರೀನಿವಾಸಪುರ ಮಾರ್ಗವಾಗಿ ಮುಳಬಾಗಿಲು ಕಡೆಗೆ ಅಳವಡಿಸುವ ಕಾಮಗಾರಿಯನ್ನು ಕೂಡಲೇ ಆರಂಭಿಸಲು ಸೂಚನೆ ನೀಡಿ, ಈ ಎರಡೂ ಪೈಪ್‌ಲೈನ್‌ಗಳ ಒಟ್ಟು ಉದ್ದ 261.90 ಕಿಲೋಮೀಟರ್ ಆಗಿದೆ ಎಂದರು.
ಪೈಪ್‌ಲೈನ್ ಅಳವಡಿಕೆಗೆ ಅಗತ್ಯವಿರುವ ಭೂ ಸ್ವಾಧೀನ ಪ್ರಕ್ರಿಯೆಯನ್ನು ತಕ್ಷಣ ಪೂರ್ಣಗೊಳಿಸುವಂತೆ ಭೂಸ್ವಾಧೀನ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಭೂ ಸ್ವಾಧೀನ ಆದೇಶ ಹೊರಡಿಸಿದ ಪ್ರದೇಶಗಳಲ್ಲಿ ಕೂಡಲೇ ಕಾಮಗಾರಿ ಆರಂಭಿಸುವಂತೆ ನೀರಾವರಿ ನಿಗಮದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮೂಲಕ ನೀರು ಶುದ್ಧೀಕರಣ ಘಟಕಗಳ ನಿರ್ಮಾಣ ಹಾಗೂ ಗ್ರಾಮಗಳಿಗೆ ನೀರು ಪೂರೈಸುವ ಪೈಪ್‌ಲೈನ್ ಜಾಲ ಅಳವಡಿಕೆಗೆ ಸಂಬಂಧಿಸಿದಂತೆ ಅಂದಾಜು ಪಟ್ಟಿ ಹಾಗೂ ಪ್ರಸ್ತಾವನೆಗಳನ್ನು ತ್ವರಿತವಾಗಿ ತಯಾರಿಸಿ ಅನುಮೋದನೆಗೆ ಸಲ್ಲಿಸುವಂತೆ ಸಭೆಯಲ್ಲಿ ತೀರ್ಮಾನಿಸಲಾಯಿತು.

2027ರ ಅಂತ್ಯದೊಳಗೆ ಈ ಮೂರು ಜಿಲ್ಲೆಗಳಿಗೆ ಎತ್ತಿನಹೊಳೆ ನೀರು ತಲುಪಿಸುವುದು, ನೀರನ್ನು ಶುದ್ಧೀಕರಿಸಿ ಗ್ರಾಮೀಣ ಪ್ರದೇಶಗಳಿಗೆ ನಿರಂತರ ಕುಡಿಯುವ ನೀರು ಸರಬರಾಜು ಮಾಡುವ ಗುರಿಯನ್ನು ಸಾಧಿಸಲು ಎಲ್ಲ ಸಂಬಂಧಿತ ಇಲಾಖೆಗಳು ಸಮನ್ವಯದಿಂದ ಹಾಗೂ ವೇಗವಾಗಿ ಕೆಲಸ ಮಾಡಬೇಕೆಂದು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.
ಇದೇ ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿ ಸಮೀರ್ ಶುಕ್ಲಾ, ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ ಅಮ್ಮಿನಭಾವಿ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಸಿಇಓಗಳು ಮತ್ತು ಸಂಬಂಧಿತ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.












Click it and Unblock the Notifications