ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆ: ಸರ್ಕಾರಕ್ಕೆ ನ್ಯಾಯಾಂಗ ನಿಂದನೆ ತೂಗುಗತ್ತಿ!
ಬೆಂಗಳೂರು, ಜೂನ್ 25: ಕರ್ನಾಟಕ ಸರ್ಕಾರ ನ್ಯಾಯಾಲಯಕ್ಕೆ ನೀಡಿದ್ದ ಭರವಸೆಯಂತೆ ನಿಗದಿತ ಅವಧಿಯಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳಿಗೆ ಮೀಸಲು ಅಂತಿಮಗೊಳಿಸಿ ಚುನಾವಣೆ ನಡೆಸಿಲ್ಲ. ಆದ್ದರಿಂದ ಈಗ ಸರ್ಕಾರ ನ್ಯಾಯಾಂಗ ನಿಂದನೆ ಎದುರಿಸಬೇಕಾಗಿದೆ.
ರಾಜ್ಯ ಚುನಾವಣಾ ಆಯೋಗ ಈ ಸಂಬಂಧ ರಾಜ್ಯ ಸರ್ಕಾರದ ವಿರುದ್ಧ ಕರ್ನಾಟಕ ಹೈಕೋರ್ಟ್‌ಗೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದೆ. ಸಿವಿಲ್ ನ್ಯಾಯಾಂಗ ನಿಂದನೆ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎನ್. ವಿ. ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ. ವಿ. ಅರವಿಂದ್ ಅವರಿದ್ದ ವಿಭಾಗೀಯಪೀಠದ ಮುಂದೆ ಸೋಮವಾರ ವಿಚಾರಣೆಗೆ ಬಂದಿತ್ತು.

ಭರವಸೆ ಪಾಲಿಸಲ್ಲ: ರಾಜ್ಯ ಚುನಾವಣಾ ಆಯೋಗದ ಪರ ಹಿರಿಯ ವಕೀಲರು ವಾದ ಮಂಡಿಸಿ, ನ್ಯಾಯಾಲಯಕ್ಕೆ ನೀಡಿದ ಭರವಸೆಯಂತೆ ಸರ್ಕಾರ ನಡೆದುಕೊಂಡಿಲ್ಲ. ಆದ್ದರಿಂದ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲಾಗಿದೆ ಎಂದು ತಿಳಿಸಿದರು.
ಅದಕ್ಕೆ ಸರ್ಕಾರದ ಪರ ಹಾಜರಾದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಈ ವಿಚಾರವಾಗಿ ಅಡ್ವೊಕೇಟ್ ಜನರಲ್ ವಾದ ಮಂಡಿಸಲಿದ್ದಾರೆ. ಹಾಗಾಗಿ, ಕಾಲಾವಕಾಶಬೇಕು ಎಂದು ಕೋರಿದರು. ಇದನ್ನು ಪರಿಗಣಿಸಿದ ನ್ಯಾಯಪೀಠ ವಿಚಾರಣೆಯನ್ನು ಜುಲೈ 11ಕ್ಕೆ ಮುಂದೂಡಿತು.
ಏನು ಪ್ರಕರಣದ ಹಿನ್ನೆಲೆ?: ರಾಜ್ಯದ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಭೌಗೋಳಿಕ ಗಡಿಗಳನ್ನು ನಿರ್ಧರಿಸುವ ಹಾಗೂ ಮೀಸಲಾತಿ ನಿಗದಿಪಡಿಸುವ ಪ್ರಕ್ರಿಯೆ ಚುರುಕುಗೊಳಿಸಲಾಗಿದೆ.
ಕೊಡಗು ಜಿಲ್ಲೆ ಹೊರತುಪಡಿಸಿ ಉಳಿದ 30 ಜಿಲ್ಲೆಗಳ ಕ್ಷೇತ್ರ ಪುನರ್‌ವಿಂಗಡಣೆ ಅಧಿಸೂಚನೆಯನ್ನು ಡಿಸೆಂಬರ್ 19ರಂದು ಪ್ರಕಟಿಸಲಾಗುವುದು. ಮುಂದಿನ ಏಳು ದಿನಗಳಲ್ಲಿ ಕೊಡಗು ಜಿಲ್ಲೆಯ ಕ್ಷೇತ್ರ ಪುನರ್‌ವಿಂಗಡಣೆ ಅಧಿಸೂಚನೆ ಪ್ರಕಟಿಸಲಾಗುವುದು.
ಅದಾದ 7 ದಿನಗಳಲ್ಲಿ ಮೀಸಲಾತಿ ಕರಡು ಅಧಿಸೂಚನೆ ಹೊರಡಿಸಲಾಗುವುದು. ಮೀಸಲಾತಿ ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಲು 10 ದಿನ ಕಾಲಾವಕಾಶ ನೀಡಲಾಗುವುದು. ಅದಾದ ಎರಡು ವಾರಗಳಲ್ಲಿ ಮೀಸಲಾತಿ ಅಂತಿಮಗೊಳಿಸಲಾಗುವುದು ಎಂದು ಸರ್ಕಾರ 2023ರ ಡಿಸೆಂಬರ್‌ನಲ್ಲಿ ಭರವಸೆ ನೀಡಿತ್ತು.
ನ್ಯಾಯಾಲಯ ಇದನ್ನು ದಾಖಲಿಸಿಕೊಂಡು, ಸರ್ಕಾರಕ್ಕೆ ನಿರ್ದೇಶನ ನೀಡಿ ಅರ್ಜಿಯನ್ನು ಇತ್ಯರ್ಥಪಡಿಸಿತ್ತು. ಜತೆಗೆ ಸರ್ಕಾರ ನೀಡಿದ ಭರವಸೆಯಂತೆ ನಡೆದುಕೊಳ್ಳದಿದ್ದರೆ ಚುನಾವಣಾ ಆಯೋಗ ನ್ಯಾಯಾಲಯದ ಮೊರೆ ಹೋಗಬಹುದು ಎಂದೂ ಹೇಳಿತ್ತು.
ಇದೀಗ ರಾಜ್ಯ ಸರ್ಕಾರ ನ್ಯಾಯಾಲಯಕ್ಕೆ ನೀಡಿದ ಭರವಸೆಯಂತೆ ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ಅಂತಿಮಗೊಳಿಸಿಲ್ಲ. ಆದ್ದರಿಂದ 2023ರ ಡಿಸೆಂಬರ್ 19ರಂದು ನ್ಯಾಯಾಲಯ ನೀಡಿದ ಅಂತಿಮ ಆದೇಶ ಪಾಲಿಸದ ರಾಜ್ಯ ಸರ್ಕಾರದ ವಿರುದ್ಧ ನ್ಯಾಾಯಾಂಗ ನಿಂದನೆ ಆರೋಪದಡಿ ಕ್ರಮ ಜರುಗಿಸಬೇಕು ಎಂದು ಚುನಾವಣಾ ಆಯೋಗ ಮನವಿ ಮಾಡಿದೆ.












Click it and Unblock the Notifications