ಜಿಪಂ.ತಾಪಂ ಚುನಾವಣೆ ಮತ್ತಷ್ಟು ವಿಳಂಬ, ವಾರ್ಡ್ ವಿಂಗಡಣೆ, ಮೀಸಲು ನಿಗದಿಗೆ 12 ವಾರ ಕಾಲಾವಕಾಶ
ಬೆಂಗಳೂರು, ಸೆ.27: ರಾಜ್ಯದಲ್ಲಿ ಸುಮಾರು ಒಂದೂವರೆ ವರ್ಷದಿಂದ ಬಾಕಿ ಇರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ಸದ್ಯಕ್ಕೆ ನಡೆಯುವ ಸಾಧ್ಯತೆಗಳಿಲ್ಲ.
ಏಕೆಂದರೆ ಎರಡೂ ಪಂಚಾಯ್ತಿಗಳಲ್ಲಿ ಕ್ಷೇತ್ರಗಳ ಮರು ವಿಗಂಡಣೆ ಮತ್ತು ಮೀಸಲು ನಿಗದಿ ಪ್ರಕ್ರಿಯೆ ಇನ್ನೂ ಮುಗಿದಿಲ್ಲ ಮತ್ತು ಸದ್ಯಕ್ಕೆ ಮುಗಿಯುವ ಲಕ್ಷಣಗಳೂ ಇಲ್ಲ. ಕಾರಣ ಕ್ಷೇತ್ರಗಳ ಮರು ವಿಂಗಡಣೆ ಮತ್ತು ಮೀಸಲು ನಿಗದಿ ಕಾರ್ಯ ಪೂರ್ಣಗೊಳಿಸಲು ಹೈಕೋರ್ಟ್‌ನಿಂದ ರಾಜ್ಯ ಸರ್ಕಾರಕ್ಕೆ ಮತ್ತೆ 12 ವಾರ ಕಾಲಾವಕಾಶ ಪಡೆದುಕೊಂಡಿದೆ.
'ಕರ್ನಾಟಕ ಪಂಚಾಯತ್ ರಾಜ್ ಮತ್ತು ಗ್ರಾಮ ಸ್ವರಾಜ್ ಕಾಯ್ದೆ'ಗೆ ತಿದ್ದುಪಡಿ ಪ್ರಶ್ನಿಸಿ ಚುನಾವಣಾ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ನೇತೃತ್ವದ ವಿಭಾಗೀಯಪೀಠದ ಮುಂದೆ ಸೋಮವಾರ ವಿಚಾರಣೆಗೆ ಬಂದಿತ್ತು.

ಕಾರ್ಯ ಪೂರ್ಣಗೊಂಡಿಲ್ಲ: ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ, ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಕ್ಷೇತ್ರಗಳ ವಿಗಂಡಣೆ ಮತ್ತು ಮೀಸಲು ನಿಗದಿ ಕೆಲಸ ಪೂರ್ಣಗೊಳಿಸಲು ರಾಜ್ಯ ಸರ್ಕಾರಕ್ಕೆ 12 ವಾರ ಕಾಲಾವಕಾಶ ನೀಡಿ ಮೇ 24ರಂದು ಹೈಕೋರ್ಟ್ ಆದೇಶಿಸಿತ್ತು.
ಆದರೆ, ಕ್ಷೇತ್ರ ಮರು ವಿಂಗಡಣೆ ಕೆಲಸ ಪೂರ್ಣಗೊಳಿಸಲು ಹೈಕೋರ್ಟ್‌ನಿಂದ ಮತ್ತೆ ಕಾಲಾವಕಾಶ ಪಡೆಯಲು ಮರು ವಿಂಗಡಣೆ ಆಯೋಗವು ಸರ್ಕಾರಕ್ಕೆ ಸೆ.9ರಂದು ಪತ್ರ ಬರೆದಿದೆ. ಆನಂತರ ಮೀಸಲು ನಿಗದಿ ಕಾರ್ಯವನ್ನು ಸರ್ಕಾರ ಮಾಡಲು ಸಾಧ್ಯ ಎಂದರು.
ಕ್ಷೇತ್ರ ಮರು ವಿಂಗಡಣೆ ಮತ್ತು ಮೀಸಲು ನಿಗದಿ ಶೀಘ್ರ ಪೂರ್ಣಗೊಳಿಸಲು ಸರ್ಕಾರ ಸಹ ಎಲ್ಲಾ ಪ್ರಯತ್ನ ಮಾಡುತ್ತಿದೆ. ಆದ್ದರಿಂದ 12 ವಾರ ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿದರು.

ಆ ಮನವಿ ಮಾನ್ಯ ಮಾಡಿದ ನ್ಯಾಯಪೀಠ, ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಕ್ಷೇತ್ರಗಳಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಸೇರಿದಂತೆ ಇತರೆ ವರ್ಗಗಗಳಿಗೆ ಮೀಸಲು ಕಲ್ಪಿಸುವ ಮತ್ತು ಕ್ಷೇತ್ರ ಮರು ವಿಂಗಡಣೆ ಕಾರ್ಯವನ್ನು 12 ವಾರಗಳಲ್ಲಿ ಪೂರ್ಣಗೊಳಿಸುವಂತೆ ಸರ್ಕಾರಕ್ಕೆ ಸೂಚಿಸಿ ಮಧ್ಯಂತರ ಅರ್ಜಿ ಇತ್ಯರ್ಥಪಡಿಸಿತು.
ಚುನಾವಣಾ ಆಯೋಗ, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ಕಾಯ್ದೆ-2021ಅನ್ನು ಅಸಂವಿಧಾನ ಎಂಬುದಾಗಿ ಘೋಷಿಸಿ ರದ್ದುಪಡಿಸಬೇಕು. ಚುನಾವಣಾ ಆಯೋಗವು ಈಗಾಗಲೇ ಪ್ರಕಟಿಸಿರುವ ಕರಡು ಮೀಸಲು ಮತ್ತು ಕ್ಷೇತ್ರ ಮರುವಿಂಗಡಣೆ ಅಧಿಸೂಚನೆ ಆಧರಿಸಿ ಚುನಾವಣಾ ಪ್ರಕ್ರಿಯೆ ಮುಂದುವರಿಸಬೇಕು. ಅಂತಿಮ ಮೀಸಲು ಮತ್ತು ಕ್ಷೇತ್ರ ಪುನರ್ ವಿಂಗಡಣೆ ಪಟ್ಟಿ ಪ್ರಕಟಿಸಿ, ಶೀಘ್ರ ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಮನವಿ ಮಾಡಿದೆ.












Click it and Unblock the Notifications