Breaking: ಕಾರು-ಬಸ್ ನಡುವೆ ಭೀಕರ ಅಪಘಾತ: ಐವರು ದಾರುಣ ಸಾವು
ಕಾರವಾರ, ಡಿಸೆಂಬರ್ 08: ಕಾರು ಮತ್ತು ಸರ್ಕಾರಿ ಬಸ್‌ನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬಂಡಲದಲ್ಲಿ ನಡೆದಿದೆ.
ಶಿರಸಿಯಿಂದ ಕುಮಟಾ ಕಡೆಗೆ ಹೋಗುತ್ತಿದ್ದ ಸರ್ಕಾರಿ ಬಸ್ ಕುಮಟಾ ಕಡೆಯಿಂದ ಶಿರಸಿಗೆ ಬರುತ್ತಿದ್ದ ಮಾರುತಿ ಸ್ವಿಫ್ಟ್ ಕಾರಿಗೆ ಡಿಕ್ಕಿಯಾಗಿದೆ. ಎರಡು ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಐವರು ಸಾವನ್ನಪ್ಪಿದ್ದಾರೆ. ಮೃತರ ಪೈಕಿ ನಾಲ್ವರು ಮಂಗಳೂರು ಮೂಲದವರಾಗಿದ್ದು, ಒಂದೇ ಕುಟುಂಬದವರು ಎಂದು ತಿಳಿದು ಬಂದಿದೆ.

ಘಟನೆಯಲ್ಲಿ ಇನ್ನೋರ್ವ ತಮಿಳುನಾಡು ಮೂಲದ ವ್ಯಕ್ತಿ ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆಗೆ ಫಲಿಸದೇ ಸಾವನ್ನಪ್ಪಿದ್ದಾರೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಬಸ್‌ನ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಅದೃಷ್ಟವಶಾತ್ ಬಸ್ ಚಾಲಕ ಸೇರಿದಂತೆ ಬಸ್‌ನಲ್ಲಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಶುಕ್ರವಾರ ಬೆಳಗ್ಗೆ 11 ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ. ಘಟನಾ ಸ್ಥಳಕ್ಕೆ ಶಿರಸಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಗಳ ಮೃತದೇಹಗಳನ್ನು ಶಿರಸಿ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮಗಳನ್ನು ಕೈಗೊಂಡಿದ್ದಾರೆ.












Click it and Unblock the Notifications